ಪಂಜರಕೋಡಿಯಲ್ಲಿ ಅಕ್ರಮ ಗೋಸಾಗಾಟ ಪತ್ತೆ: ಚಾಲಕ ವಶ, ಪೊಲೀಸರ ಮೇಲೆ ಕಾರು ಹತ್ತಿಸಲು ಯತ್ನ

ವಿಟ್ಲ: ಪಿಕಪ್ ವಾಹನದಲ್ಲಿ ಅಕ್ರಮವಾಗಿ ಗೋಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ವಿಟ್ಲ ಪೊಲೀಸರು ಪತ್ತೆಹಚ್ಚಿ ವಾಹನ ಚಾಲಕನನ್ನು ವಶಕ್ಕೆ ಪಡೆದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕೊಳ್ನಾಡು ಗ್ರಾಮದ ಪಂಜರಕೋಡಿ ಎಂಬಲ್ಲಿ ನಡೆದಿದೆ.

ಅಕ್ರಮ ಗೋಸಾಗಾಟ ನಡೆಯುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ನಿನ್ನೆ ವಿಟ್ಲ ಪೊಲೀಸರು ಸ್ಥಳಕ್ಕೆ ತೆರಳಿ KA-19-D-1496 ನೋಂದಣಿಯ ಪಿಕಪ್ ವಾಹನವನ್ನು ತಡೆದು ನಿಲ್ಲಿಸಿ ಪರಿಶೀಲನೆ ನಡೆಸಿದರು.

ಈ ವೇಳೆ ಪಿಕಪ್ ವಾಹನಕ್ಕೆ ಬೆಂಗಾವಲಾಗಿ ಬಂದಿದ್ದ KA-21-MA-0801 ನೋಂದಣಿಯ ಸ್ವಿಫ್ಟ್ ಕಾರಿನಲ್ಲಿದ್ದ ಆರೋಪಿ ಬಶೀರ್, ಸ್ಥಳದಲ್ಲಿದ್ದ ಪೊಲೀಸರ ಪ್ರಾಣಕ್ಕೆ ಅಪಾಯವಾಗುವ ರೀತಿಯಲ್ಲಿ ಕಾರು ಚಲಾಯಿಸಿಕೊಂಡು ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಳಿಕ ಪಿಕಪ್ ವಾಹನವನ್ನು ಪರಿಶೀಲಿಸಿದಾಗ, ಎರಡು ಜಾನುವಾರುಗಳನ್ನು ಹಿಂಸಾತ್ಮಕವಾಗಿ ಕಟ್ಟಿ ಸಾಗಿಸಲಾಗುತ್ತಿರುವುದು ಪತ್ತೆಯಾಯಿತು. ಈ ಕುರಿತು ಪಿಕಪ್ ಚಾಲಕ ಬಂಟ್ವಾಳ ಮೂಲದ ಮೊಹಮ್ಮದ್ ಹನೀಪ್‌ನನ್ನು ವಿಚಾರಿಸಿದಾಗ, ಯಾವುದೇ ಪರವಾನಿಗೆ ಪಡೆಯದೇ ಜಾನುವಾರುಗಳನ್ನು ವಧೆಗಾಗಿ ಸಾಗಿಸುತ್ತಿರುವುದಾಗಿ ಒಪ್ಪಿಕೊಂಡಿದ್ದಾನೆ ಎನ್ನಲಾಗಿದೆ.

ಪೊಲೀಸರು ಚಾಲಕನನ್ನು ವಶಕ್ಕೆ ಪಡೆದು, ಕೃತ್ಯಕ್ಕೆ ಬಳಸಿದ ಪಿಕಪ್ ವಾಹನ ಹಾಗೂ ಎರಡು ಜಾನುವಾರುಗಳನ್ನು ಸ್ವಾಧೀನಪಡಿಸಿಕೊಂಡಿದ್ದಾರೆ.

ಈ ಸಂಬಂಧ ಮೊಹಮ್ಮದ್ ಹನೀಪ್ ಹಾಗೂ ಬಶೀರ್ ವಿರುದ್ಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಅ.ಕ್ರ:114/2026ರಂತೆ ಬಿ.ಎನ್.ಎಸ್-2023 ಕಾಯ್ದೆಯ ಕಲಂ 118(1), 109, 132, 3(5) ಜೊತೆಗೆ ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧ ಮತ್ತು ಸಂರಕ್ಷಣಾ ಅಧಿನಿಯಮ 2020ರ ಕಲಂ 5, 7, 12 ಹಾಗೂ ಪ್ರಾಣಿ ಹಿಂಸೆ ತಡೆ ಕಾಯ್ದೆ 1960ರ ಕಲಂ 11ರಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿದೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!