ಬೆಂಗಳೂರು: ಕರ್ನಾಟಕ ಕಾಂಗ್ರೆಸ್‌ನಲ್ಲಿ ಕಳೆದ ಮೂರು ವರ್ಷಗಳಿಂದ ನಿರಂತರವಾಗಿ ಚರ್ಚೆಯಾಗುತ್ತಿದ್ದ ಮುಖ್ಯಮಂತ್ರಿ ಹುದ್ದೆ ಬದಲಾವಣೆ ಹಾಗೂ ನಾಯಕತ್ವ ಹಸ್ತಾಂತರದ ಹಗ್ಗಜಗ್ಗಾಟಕ್ಕೆ ಕೊನೆಗೂ ತೆರೆ ಬೀಳುವ ಲಕ್ಷಣಗಳು ಗೋಚರಿಸುತ್ತಿವೆ. ಹೈಕಮಾಂಡ್ ಮಟ್ಟದಲ್ಲಿ ನಡೆದ ಮಹತ್ವದ ಮಾತುಕತೆಯ ಬೆನ್ನಲ್ಲೇ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸ್ಥಾನ ತ್ಯಾಗ ಮಾಡಲು ಒಪ್ಪಿಕೊಂಡಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.
ರಾಷ್ಟ್ರ ರಾಜಧಾನಿ ದೆಹಲಿಯ ಎಐಸಿಸಿ (AICC) ಕಚೇರಿಯಲ್ಲಿ ನಡೆದ ಸತತ 7 ಗಂಟೆಗಳ ಮ್ಯಾರಥಾನ್ ಸಭೆ ಹಾಗೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ನಡೆದ ‘ಒನ್-ಟು-ಒನ್’ ರಹಸ್ಯ ಚರ್ಚೆಯ ಬಳಿಕ ಈ ಪ್ರಮುಖ ನಿರ್ಧಾರಕ್ಕೆ ಬರಲಾಗಿದೆ ಎನ್ನಲಾಗಿದೆ. ಸರ್ಕಾರ ರಚನೆಯ ಸಂದರ್ಭದಲ್ಲಿ ಮಾಡಿಕೊಳ್ಳಲಾಗಿದ್ದ ಆಂತರಿಕ ‘ಅಧಿಕಾರ ಹಂಚಿಕೆ ಸೂತ್ರ’ದ (Power Sharing Formula) ಪ್ರಕಾರವೇ ಸಿಎಂ ಸಿದ್ದರಾಮಯ್ಯ ಅವರು ನಾಳೆ (ಗುರುವಾರ) ತಮ್ಮ ಹುದ್ದೆಗೆ ಅಧಿಕೃತವಾಗಿ ರಾಜೀನಾಮೆ ನೀಡುವ ಸಾಧ್ಯತೆಯಿದೆ.
ದೆಹಲಿ ಪ್ರವಾಸ ಮುಗಿಸಿ ಸಿಎಂ ಸಿದ್ದರಾಮಯ್ಯ ನಿನ್ನೆ ರಾತ್ರಿಯೇ ಬೆಂಗಳೂರಿಗೆ ಆಗಮಿಸಿದ್ದು, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಇಂದು ಅಪರಾಹ್ನ ರಾಜಧಾನಿಗೆ ಬಂದಿಳಿಯಲಿದ್ದಾರೆ. ಈ ನಡುವೆ, ನಾಳೆ ಬೆಳಗ್ಗೆ 9 ಗಂಟೆಗೆ ಸಿಎಂ ಸಿದ್ದರಾಮಯ್ಯ ಅವರು ಡಿಸಿಎಂ ಡಿ.ಕೆ. ಶಿವಕುಮಾರ್ ಅವರನ್ನು ಪ್ರಮುಖ ‘ಬ್ರೇಕ್‌ಫಾಸ್ಟ್ ಮೀಟಿಂಗ್’ಗೆ ಆಹ್ವಾನಿಸಿದ್ದಾರೆ.ಈ ಉಪಾಹಾರ ಸಭೆಯಲ್ಲಿ ನಾಯಕತ್ವ ಹಸ್ತಾಂತರದ ಅಂತಿಮ ಪ್ರಕ್ರಿಯೆಗಳ ಕುರಿತು ಉಭಯ ನಾಯಕರು ಚರ್ಚಿಸಲಿದ್ದಾರೆ. ಸಭೆಯ ಬೆನ್ನಲ್ಲೇ ಸಿದ್ದರಾಮಯ್ಯ ಅವರು ಸಿಎಂ ಹುದ್ದೆಗೆ ಅಧಿಕೃತವಾಗಿ ರಾಜೀನಾಮೆ ಘೋಷಿಸಲಿದ್ದಾರೆ ಎಂದು ಹೇಳಲಾಗುತ್ತಿದ್ದು, ಇದರೊಂದಿಗೆ ರಾಜ್ಯ ರಾಜಕಾರಣದಲ್ಲಿ ಹೊಸ ನಾಯಕತ್ವದ ಅಧ್ಯಾಯ ಆರಂಭವಾಗುವುದು ಬಹುತೇಕ ಖಚಿತವಾಗಿದೆ.