ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿವಾಸ ‘ಕಾವೇರಿ’ಯಲ್ಲಿ ಇಂದು ಬೆಳಗ್ಗೆ ನಡೆದ ಬ್ರೇಕ್‌ಫಾಸ್ಟ್ ಸಭೆಯ ಬಳಿಕ ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಗಳು ನಡೆದಿರುವ ಸೂಚನೆಗಳು ಲಭಿಸಿವೆ. ಸಭೆ ಮುಗಿಸಿ ವಾಪಸ್ ತೆರಳುತ್ತಿದ್ದ ವೇಳೆ ಸಚಿವ ಸಂತೋಷ್ ಲಾಡ್ ಭಾವುಕರಾಗಿ ಕಣ್ಣೀರು ಹಾಕಿದ ಘಟನೆ ಗಮನ ಸೆಳೆಯಿತು.
ಸಭೆ ಬಳಿಕ ಕಾರಿನಲ್ಲಿ ತೆರಳುತ್ತಿದ್ದ ಸಚಿವ ಸಂತೋಷ್ ಲಾಡ್ ಅವರನ್ನು ಮಾಧ್ಯಮ ಪ್ರತಿನಿಧಿಗಳು “ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡುತ್ತಾರೆಯೇ?” ಎಂದು ಪ್ರಶ್ನಿಸಿದರು. ಈ ವೇಳೆ ದುಃಖ ತಡೆಯಲಾರದೆ ಕಾರಿನಲ್ಲೇ ಕಣ್ಣೀರು ಹಾಕಿದ ಅವರು, “ಮಧ್ಯಾಹ್ನ 3 ಗಂಟೆಗೆ ರಾಜೀನಾಮೆ ಕೊಡುತ್ತಾರೆ” ಎಂದು ಹೇಳಿ ಭಾವುಕರಾಗಿಯೇ ಸ್ಥಳದಿಂದ ತೆರಳಿದರು.
ರಾಜ್ಯ ರಾಜಕೀಯದಲ್ಲಿ ಹಲವು ದಿನಗಳಿಂದ ನಡೆಯುತ್ತಿದ್ದ ಊಹಾಪೋಹಗಳಿಗೆ ತೆರೆ ಎಳೆಯುವಂತೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬ್ರೇಕ್‌ಫಾಸ್ಟ್ ಸಭೆಯಲ್ಲಿ ತಮ್ಮ ರಾಜೀನಾಮೆ ನಿರ್ಧಾರವನ್ನು ಪ್ರಕಟಿಸಿದ್ದಾರೆ ಎನ್ನಲಾಗಿದೆ. ಹೈಕಮಾಂಡ್ ಸೂಚನೆಯಂತೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವ ತೀರ್ಮಾನ ಕೈಗೊಂಡಿದ್ದು, ಮುಂದಿನ ಎರಡು ವರ್ಷಗಳ ಕಾಲ ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಹುದ್ದೆಯನ್ನು ವಹಿಸಿಕೊಳ್ಳಲಿದ್ದಾರೆ ಎಂಬ ಮಾಹಿತಿ ಸಭೆಯಲ್ಲಿ ಹಂಚಿಕೊಳ್ಳಲಾಗಿದೆ ಎಂದು ತಿಳಿದುಬಂದಿದೆ.
ಸಭೆಯ ವೇಳೆ ಸಿದ್ದರಾಮಯ್ಯ ಅವರು ಭಾವುಕರಾಗಿ ಮಾತನಾಡಿದ್ದು, ತಮ್ಮ ಆಡಳಿತಾವಧಿಯಲ್ಲಿ ಜಾರಿಗೊಳಿಸಿದ ಜನಪರ ಯೋಜನೆಗಳು ಹಾಗೂ ಸರ್ಕಾರದ ಸಾಧನೆಗಳನ್ನು ಸ್ಮರಿಸಿದ್ದಾರೆ ಎನ್ನಲಾಗಿದೆ. ಜೊತೆಗೆ, ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಸಂಪೂರ್ಣ ಸಹಕಾರ ನೀಡುವಂತೆ ಸಚಿವ ಸಂಪುಟದ ಸದಸ್ಯರಿಗೆ ಕರೆ ನೀಡಿದರೆಂದು ಮೂಲಗಳು ತಿಳಿಸಿವೆ. ಬಿಜೆಪಿಯ ರಾಜಕೀಯ ತಂತ್ರಗಳ ಬಗ್ಗೆ ಎಚ್ಚರಿಕೆಯಿಂದ ಇರುವಂತೆಯೂ ಅವರು ಸೂಚನೆ ನೀಡಿದರು ಎನ್ನಲಾಗಿದೆ.
ಇನ್ನೊಂದೆಡೆ, ಸಚಿವ ಎಚ್.ಕೆ. ಪಾಟೀಲ್ ಕೂಡ ಡಿ.ಕೆ. ಶಿವಕುಮಾರ್ ಮುಂದಿನ ಮುಖ್ಯಮಂತ್ರಿ ಆಗಲಿದ್ದಾರೆ ಎಂದು ಸ್ಪಷ್ಟಪಡಿಸಿದ್ದಾರೆ. ಸಭೆ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಇಂದು ಮಧ್ಯಾಹ್ನ 3 ಗಂಟೆಗೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಲಿದ್ದಾರೆ. ಅವರು ರಾಜ್ಯಸಭೆಗೆ ಹೋಗುವುದಿಲ್ಲ. ಡಿ.ಕೆ. ಶಿವಕುಮಾರ್ ಮುಂದಿನ ಮುಖ್ಯಮಂತ್ರಿ ಆಗಲಿದ್ದಾರೆ. ಈ ಪ್ರಸ್ತಾಪಕ್ಕೆ ಸಭೆಯಲ್ಲಿ ಎಲ್ಲರೂ ಒಪ್ಪಿಗೆ ನೀಡಿದ್ದಾರೆ” ಎಂದು ಹೇಳಿದರು.