ಈಶ್ವರ್ ಭಟ್ ರಾಕೋಡಿ ಬೋಳಂತ್ತೂರು ಪ್ರದೇಶದಲ್ಲಿ ಸುಮಾರು 50 ವರ್ಷಗಳಿಂದ ಬಿಜೆಪಿ ಪಕ್ಷದ ಸಕ್ರಿಯ ಕಾರ್ಯಕರ್ತ ಹಾಗೂ ಸಾಮಾಜಿಕ ಮುಖಂಡರಾಗಿ ಗುರುತಿಸಿಕೊಂಡಿದ್ದು, ಇದೀಗ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.
ಧಾರ್ಮಿಕ, ರಾಜಕೀಯ ಹಾಗೂ ಸಾಮಾಜಿಕ ಕ್ಷೇತ್ರಗಳಲ್ಲಿ ಸಕ್ರಿಯರಾಗಿದ್ದ ಅವರು, ಬೋಳಂತ್ತೂರಿನ ಹಲವು ಸಂಘ-ಸಂಸ್ಥೆಗಳಲ್ಲಿ ಪ್ರಮುಖ ಜವಾಬ್ದಾರಿಗಳನ್ನು ನಿರ್ವಹಿಸಿ ಅಭಿವೃದ್ಧಿ ಕಾರ್ಯಗಳಲ್ಲಿ ತಮ್ಮದೇ ಆದ ಕೊಡುಗೆ ನೀಡಿದ್ದಾರೆ. ಬಡವರ ಬಗ್ಗೆ ಕಾಳಜಿ, ನೇರ ನಡೆ-ನುಡಿ ಹಾಗೂ ಪ್ರಾಮಾಣಿಕ ವ್ಯಕ್ತಿತ್ವದಿಂದ ಸ್ಥಳೀಯವಾಗಿ ಗೌರವ ಪಡೆದಿದ್ದರು.
ಬಿಜೆಪಿಯಲ್ಲಿ ಸಾಮಾನ್ಯ ಕಾರ್ಯಕರ್ತರಿಗೆ ಸೂಕ್ತ ಗೌರವ ಹಾಗೂ ಸ್ಪಂದನೆ ದೊರೆಯುತ್ತಿಲ್ಲ ಎಂಬ ಅಸಮಾಧಾನ ವ್ಯಕ್ತಪಡಿಸಿದ ಅವರು, ಕಾಂಗ್ರೆಸ್ ಪಕ್ಷದ ಕಾರ್ಯನಿಷ್ಠೆ ಮತ್ತು ಧೋರಣೆಯನ್ನು ಮೆಚ್ಚಿ ಪಕ್ಷ ಸೇರ್ಪಡೆಯಾಗಿರುವುದಾಗಿ ತಿಳಿಸಿದ್ದಾರೆ.
ಮಾಜಿ ಸಚಿವ ಬಿ. ರಮಾನಾಥ ರೈ ಅವರ ನಿವಾಸದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಪಕ್ಷದ ಶಾಲು ಧರಿಸುವ ಮೂಲಕ ಈಶ್ವರ್ ಭಟ್ ರಾಕೋಡಿ ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಯಾದರು.