ಬೆಂಗಳೂರುದಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಿದ ಬೆನ್ನಲ್ಲೇ, ಕಾಂಗ್ರೆಸ್ ಪಕ್ಷದಲ್ಲಿ ನೂತನ ಮುಖ್ಯಮಂತ್ರಿ ಆಯ್ಕೆ ಪ್ರಕ್ರಿಯೆ ಚುರುಕುಗೊಂಡಿದೆ.
ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಮಹತ್ವದ ಸಭೆಯನ್ನು ಶನಿವಾರ (ಮೇ 30) ಸಂಜೆ 4 ಗಂಟೆಗೆ ಕರೆಯಲಾಗಿದೆ.
ವಿಧಾನಸೌಧದ ಮೂರನೇ ಮಹಡಿಯ ಕೊಠಡಿ ಸಂಖ್ಯೆ 334ರ ‘ಸಮ್ಮೇಳನ ಸಭಾಂಗಣ’ದಲ್ಲಿ ಸಭೆ ನಡೆಯಲಿದ್ದು, ಶಾಸಕಾಂಗ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ.
ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ, ವಿಧಾನ ಪರಿಷತ್ ಸಭಾ ನಾಯಕ ಎನ್.ಎಸ್. ಭೋಸರಾಜು ಸೇರಿದಂತೆ ಪಕ್ಷದ ಹಿರಿಯ ನಾಯಕರು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ಸಭೆಯಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ನೂತನ ನಾಯಕನ ಆಯ್ಕೆ ನಡೆಯುವ ಸಾಧ್ಯತೆ ಇದ್ದು, ಆಯ್ಕೆಯಾದ ನಾಯಕರು ಬಳಿಕ ರಾಜ್ಯಪಾಲರನ್ನು ಭೇಟಿ ಮಾಡಿ ಸರ್ಕಾರ ರಚನೆಗೆ ಹಕ್ಕು ಮಂಡಿಸಲಿದ್ದಾರೆ ಎನ್ನಲಾಗಿದೆ.
ರಾಜ್ಯದ ರಾಜಕೀಯ ಬೆಳವಣಿಗೆಗಳ ನಡುವೆ ನಡೆಯುತ್ತಿರುವ ಈ ಸಭೆ ಕಾಂಗ್ರೆಸ್ ಪಾಲಿಗೆ ಅತ್ಯಂತ ಮಹತ್ವದ್ದಾಗಿ ಪರಿಗಣಿಸಲಾಗಿದೆ.