ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಶಿರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಕಲ್ಲಟ್ಟು ಪ್ರದೇಶದಲ್ಲಿ ನದಿ ತೀರದ ಬಳಿ ಹಸುವಿನ ರುಂಡ ಪತ್ತೆಯಾಗಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮತ್ತು ಆಕ್ರೋಶಕ್ಕೆ ಕಾರಣವಾಗಿದೆ.
ಕಲ್ಲಟ್ಟು ಗ್ರಾಮದ ನಿರ್ಜನ ಪ್ರದೇಶದಲ್ಲಿರುವ ನದಿ ತೀರದಲ್ಲಿ ಈ ಅವಶೇಷ ಪತ್ತೆಯಾಗಿದ್ದು, ಸ್ಥಳೀಯ ಹಿಂದೂ ಕಾರ್ಯಕರ್ತರು ಘಟನೆಯನ್ನು ತೀವ್ರವಾಗಿ ಖಂಡಿಸಿದ್ದಾರೆ. ಈ ನದಿ ಪ್ರದೇಶವು ಶಿರ್ವ ವಿಷ್ಣುಮೂರ್ತಿ ದೇವಸ್ಥಾನ ಸೇರಿದಂತೆ ಸುತ್ತಮುತ್ತಲಿನ ಅನೇಕ ದೇವಾಲಯಗಳ ಪುಣ್ಯಸ್ನಾನ ಹಾಗೂ ಧಾರ್ಮಿಕ ಜಳಕ ನಡೆಯುವ ಪವಿತ್ರ ತಾಣವಾಗಿದ್ದು, ಸ್ಥಳೀಯವಾಗಿ “ಪಾಪನಾಶಿನಿ ನದಿ” ಎಂದೇ ಪ್ರಸಿದ್ಧವಾಗಿದೆ.
ನಿರ್ಜನ ಪ್ರದೇಶವನ್ನು ದುರುಪಯೋಗಪಡಿಸಿಕೊಂಡು ದುಷ್ಕರ್ಮಿಗಳು ಹಸುವಿನ ತ್ಯಾಜ್ಯವನ್ನು ಇಲ್ಲಿ ಎಸೆದಿರುವ ಶಂಕೆ ವ್ಯಕ್ತವಾಗಿದೆ. ಮಾಹಿತಿ ತಿಳಿದು ಸ್ಥಳಕ್ಕೆ ಶಿರ್ವ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪೊಲೀಸ್ ಇಲಾಖೆ ಹಾಗೂ ಪಶುಸಂಗೋಪನಾ ಇಲಾಖೆಯ ಅಧಿಕಾರಿಗಳ ಸಮ್ಮುಖದಲ್ಲಿ ಸ್ಥಳ ಮಹಜರು ಪ್ರಕ್ರಿಯೆ ನಡೆಸಲಾಗಿದೆ.
ಘಟನೆಗೆ ಸಂಬಂಧಿಸಿದಂತೆ ದುಷ್ಕರ್ಮಿಗಳನ್ನು ಶೀಘ್ರ ಪತ್ತೆಹಚ್ಚಿ ಕಠಿಣ ಕ್ರಮ ಕೈಗೊಳ್ಳಬೇಕೆಂದು ಹಿಂದೂ ಜಾಗರಣ ವೇದಿಕೆ ಹಾಗೂ ವಿಶ್ವ ಹಿಂದೂ ಪರಿಷತ್ ಮುಖಂಡರು ಒತ್ತಾಯಿಸಿದ್ದಾರೆ. ಸ್ಥಳದಲ್ಲಿ ಜಮಾಯಿಸಿದ ಕಾರ್ಯಕರ್ತರು ಸಮಗ್ರ ತನಿಖೆಗೆ ಆಗ್ರಹಿಸಿದ್ದು, ಆರೋಪಿಗಳನ್ನು ಬಂಧಿಸದಿದ್ದಲ್ಲಿ ಉಗ್ರ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.ಪ್ರಕರಣದ ಕುರಿತು ಶಿರ್ವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.