ಪ್ರೀತಿಸಿ ಮದುವೆಯಾದ ಪತ್ನಿಯನ್ನೇ ಹತ್ಯೆಗೈದ ಪತಿ; 13 ದಿನಗಳ ಬಳಿಕ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ

ಬಳ್ಳಾರಿ, ಜೂನ್ 4: ಪ್ರೀತಿಸಿ ಮದುವೆಯಾಗಿದ್ದ ಪತ್ನಿಯನ್ನೇ ಭೀಕರವಾಗಿ ಹತ್ಯೆಗೈದ ಘಟನೆ ಬಳ್ಳಾರಿ ನಗರದ ಕೌಲ್ ಬಜಾರ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ. ಈ ಪ್ರಕರಣ ರಾಜ್ಯಾದ್ಯಂತ ಸಂಚಲನ ಮೂಡಿಸಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.ಮೃತ ಮಹಿಳೆಯನ್ನು ಆಫ್ರೀನ್ ಬಾನು ಎಂದು ಗುರುತಿಸಲಾಗಿದ್ದು, ಆರೋಪಿ ಪತಿ ನೂರ್ ಅಹ್ಮದ್ ಎಂದು ತಿಳಿದುಬಂದಿದೆ. ಇಬ್ಬರೂ ಎರಡು ವರ್ಷಗಳ ಹಿಂದೆ ಪ್ರೀತಿಸಿ ವಿವಾಹವಾಗಿದ್ದರು. ದಂಪತಿಗೆ ಎಂಟು ತಿಂಗಳ ಗಂಡು ಮಗುವಿದೆ.

ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಆಫ್ರೀನ್ ಬಾನು ತವರು ಮನೆಯಲ್ಲಿ ವಾಸಿಸುತ್ತಿದ್ದರು. ಈ ನಡುವೆ ಪತ್ನಿಯ ಹುಟ್ಟುಹಬ್ಬ ಆಚರಿಸುವ ನೆಪದಲ್ಲಿ ನೂರ್ ಅಹ್ಮದ್ ಆಕೆಯ ಮನೆಗೆ ಬಂದು ಕೇಕ್ ಕತ್ತರಿಸಿ ಸಂಭ್ರಮಿಸಿದ್ದಾನೆ. ಬಳಿಕ ಪಾರ್ಟಿಗೆ ಹೋಗುವುದಾಗಿ ಹೇಳಿ ಪತ್ನಿಯನ್ನು ತನ್ನೊಂದಿಗೆ ಕರೆದುಕೊಂಡು ಹೋಗಿದ್ದಾನೆ.

ಆದರೆ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ತಲೆಯ ಮೇಲೆ ಕಲ್ಲು ಎತ್ತಿಹಾಕಿ ಆಫ್ರೀನ್ ಬಾನು ಅವರನ್ನು ಬರ್ಬರವಾಗಿ ಹತ್ಯೆಗೈದಿದ್ದಾನೆ ಎಂದು ಆರೋಪಿಸಲಾಗಿದೆ. ಬಳಿಕ ಶವವನ್ನು ನಿರ್ಜನ ಪ್ರದೇಶದಲ್ಲಿ ಎಸೆದು ಪರಾರಿಯಾಗಿದ್ದಾನೆ.ಇದಾದ ನಂತರ ಏನೂ ನಡೆದಿಲ್ಲ ಎಂಬಂತೆ ವರ್ತಿಸಿದ ಆರೋಪಿ, ಪತ್ನಿ ಕಾಣೆಯಾಗಿರುವ ಬಗ್ಗೆ ಕುಟುಂಬಸ್ಥರಿಗೆ ಸುಳ್ಳು ಮಾಹಿತಿ ನೀಡಿ ಹುಡುಕಾಟದ ನಾಟಕವಾಡಿದ್ದಾನೆ ಎನ್ನಲಾಗಿದೆ. ಪತ್ನಿಯ ನಾಪತ್ತೆ ಕುರಿತು ಅನುಮಾನಗೊಂಡ ಕುಟುಂಬಸ್ಥರು ಪೊಲೀಸರಿಗೆ ದೂರು ನೀಡಿದ್ದರು.

ದೂರಿನ ಆಧಾರದ ಮೇಲೆ ತನಿಖೆ ಆರಂಭಿಸಿದ ಪೊಲೀಸರು ಆರೋಪಿ ನೂರ್ ಅಹ್ಮದ್‌ನನ್ನು ವಿಚಾರಣೆ ನಡೆಸಿದಾಗ ಕೊಲೆ ಮಾಡಿರುವುದನ್ನು ಆತ ಒಪ್ಪಿಕೊಂಡಿದ್ದಾನೆ ಎಂದು ತಿಳಿದುಬಂದಿದೆ. ಕೊಲೆ ನಡೆದ 13 ದಿನಗಳ ಬಳಿಕ ಆಫ್ರೀನ್ ಬಾನು ಅವರ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಈ ಸಂಬಂಧ ಕೌಲ್ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!