ಹುಳಿಯಾರು: ಚಿತ್ರದುರ್ಗ ಹಾಗೂ ತುಮಕೂರು ಜಿಲ್ಲೆಯ ಗಡಿಭಾಗದಲ್ಲಿ ಗುರುವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ನಡೆದಿದೆ.
ಹಿರಿಯೂರು ಮಾರ್ಗವಾಗಿ ಹುಳಿಯಾರು ಕಡೆಗೆ ಬರುತ್ತಿದ್ದ ಕಾರಿಗೆ ಎದುರಿನಿಂದ ಬಂದ ಓಮಿನಿ ವಾಹನ ಡಿಕ್ಕಿ ಹೊಡೆದ ಪರಿಣಾಮ, ಮತ್ತೊಂದು ಕಾರು ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಪಲ್ಟಿಯಾಗಿದೆ. ಅಪಘಾತದ ತೀವ್ರತೆಗೆ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಮೃತರು ಆಂಧ್ರಪ್ರದೇಶ ಮೂಲದವರಾಗಿರುವ ಸಾಧ್ಯತೆ ಇದ್ದು, ಅವರ ಗುರುತು ಪತ್ತೆ ಕಾರ್ಯವನ್ನು ಪೊಲೀಸರು ಕೈಗೊಂಡಿದ್ದಾರೆ. ಅಪಘಾತದಲ್ಲಿ ಗಾಯಗೊಂಡವರನ್ನು ಸ್ಥಳೀಯರ ಸಹಾಯದಿಂದ ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಸುದ್ದಿ ತಿಳಿಯುತ್ತಿದ್ದಂತೆ ಹುಳಿಯಾರು ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಅಪಘಾತಕ್ಕೆ ನಿಖರ ಕಾರಣವೇನು ಎಂಬುದರ ಕುರಿತು ತನಿಖೆ ಮುಂದುವರಿದಿದೆ.
ಸ್ಥಳೀಯರ ಪ್ರಕಾರ, ಅಪಘಾತದ ಭೀಕರತೆಗೆ ವಾಹನಗಳು ಸಂಪೂರ್ಣ ಜಖಂಗೊಂಡಿದ್ದು, ಕೆಲಕಾಲ ಸಂಚಾರವೂ ಅಸ್ತವ್ಯಸ್ತಗೊಂಡಿತ್ತು. ಪೊಲೀಸರು ವಾಹನಗಳನ್ನು ತೆರವುಗೊಳಿಸಿ ಸಂಚಾರವನ್ನು ಸುಗಮಗೊಳಿಸಿದರು.