ಬೆಂಗಳೂರು, ಜೂ.10: ರಾಜ್ಯಾದ್ಯಂತ ನೈಋತ್ಯ ಮುಂಗಾರು ಮಾರುತಗಳ ಅಬ್ಬರ ಮುಂದುವರಿದಿದ್ದು, ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಜೂನ್ 13ರವರೆಗೆ ಹಲವು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಿದೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಿಗೆ ಈಗಾಗಲೇ ರೆಡ್ ಅಲರ್ಟ್ ನೀಡಲಾಗಿತ್ತು. ಆದರೆ ಮಳೆಯ ತೀವ್ರತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಬುಧವಾರ ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ, ಬೆಳಗಾವಿ, ಧಾರವಾಡ ಹಾಗೂ ಹಾವೇರಿ ಸೇರಿದಂತೆ ಒಟ್ಟು ಏಳು ಜಿಲ್ಲೆಗಳಿಗೆ ರೆಡ್ ಅಲರ್ಟ್ ವಿಸ್ತರಿಸಲಾಗಿದೆ.
ಕೊಡಗು ಜಿಲ್ಲೆಯ ಕೆಲ ಭಾಗಗಳಲ್ಲಿಯೂ ಮುಂಗಾರು ಚುರುಕುಗೊಂಡಿದ್ದು, ವ್ಯಾಪಕ ಮಳೆಯಾಗುತ್ತಿದೆ. ಕರಾವಳಿ ಮತ್ತು ಮಲೆನಾಡು ಪ್ರದೇಶಗಳಲ್ಲಿ ನಿರಂತರ ಸುರಿಯುತ್ತಿರುವ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿದ್ದು, ಹಲವೆಡೆ ರಸ್ತೆ ಸಂಚಾರ ಹಾಗೂ ದೈನಂದಿನ ಚಟುವಟಿಕೆಗಳ ಮೇಲೆ ಪರಿಣಾಮ ಬೀರಿದೆ.
ಮುಂದಿನ ಕೆಲವು ದಿನಗಳ ಕಾಲ ರಾಜ್ಯದ ವಿವಿಧ ಭಾಗಗಳಲ್ಲಿ ಭಾರೀ ಮಳೆ ಮುಂದುವರಿಯುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಹಾಗೂ ಜಿಲ್ಲಾಡಳಿತಗಳು ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಹವಾಮಾನ ಇಲಾಖೆ ಸೂಚಿಸಿದೆ.