ತಮಿಳುನಾಡಿನ ಮುಖ್ಯಮಂತ್ರಿ ವಿಜಯ್ ಅವರು ಜೂನ್ 12ರಂದು ಪ್ರಸಿದ್ಧ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ

ಉಡುಪಿ, ತಮಿಳುನಾಡಿನ ಸಿ ಎಂ ವಿಜಯ್ ಅವರು ಜೂನ್ 12ರಂದು ಪ್ರಸಿದ್ಧ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆಯಲಿದ್ದಾರೆ.

ಮಾಹಿತಿಯ ಪ್ರಕಾರ, ವಿಜಯ್ ಅವರು ಮಧ್ಯಾಹ್ನ 12.30ಕ್ಕೆ ವಿಶೇಷ ವಿಮಾನದ ಮೂಲಕ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದು, ಅಲ್ಲಿಂದ ರಸ್ತೆ ಮಾರ್ಗವಾಗಿ ಕೊಲ್ಲೂರಿಗೆ ತೆರಳಲಿದ್ದಾರೆ. ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ದೇವರ ದರ್ಶನ ಪಡೆದ ಬಳಿಕ ಮಧ್ಯಾಹ್ನ 3 ಗಂಟೆ ಸುಮಾರಿಗೆ ಮತ್ತೆ ರಸ್ತೆ ಮಾರ್ಗವಾಗಿ ಮಂಗಳೂರು ವಿಮಾನ ನಿಲ್ದಾಣಕ್ಕೆ ತೆರಳಿ, ವಿಶೇಷ ವಿಮಾನದ ಮೂಲಕ ಚೆನ್ನೈಗೆ ಪ್ರಯಾಣ ಬೆಳೆಸಲಿದ್ದಾರೆ.

ವಿಜಯ್ ಅವರಿಗೆ ‘Z+’ ವರ್ಗದ ಭದ್ರತೆ ಕಲ್ಪಿಸಲಾಗಿರುವ ಹಿನ್ನೆಲೆಯಲ್ಲಿ ಅವರ ಭೇಟಿ ವೇಳೆ ವ್ಯಾಪಕ ಭದ್ರತಾ ವ್ಯವಸ್ಥೆ ಕೈಗೊಳ್ಳುವಂತೆ ತಮಿಳುನಾಡು ಸಿಐಡಿ ಭದ್ರತಾ ವಿಭಾಗವು ಕರ್ನಾಟಕ ಪೊಲೀಸರಿಗೆ ಮನವಿ ಮಾಡಿದೆ.

ಕರ್ನಾಟಕದಲ್ಲಿಯೂ ವಿಜಯ್ ಅವರಿಗೆ ಅಪಾರ ಅಭಿಮಾನಿ ಬಳಗವಿರುವುದರಿಂದ ಅವರು ಸಂಚರಿಸುವ ಮಾರ್ಗದ ಪ್ರಮುಖ ಜಂಕ್ಷನ್‌ಗಳಲ್ಲಿ ಅಭಿಮಾನಿಗಳು ಹಾಗೂ ಪಕ್ಷದ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಸೇರುವ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿದೆ. ಈ ಹಿನ್ನೆಲೆಯಲ್ಲಿ ಸಂಚಾರ ದಟ್ಟಣೆ ನಿಯಂತ್ರಣ ಹಾಗೂ ಭದ್ರತಾ ದೃಷ್ಟಿಯಿಂದ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಸೂಚಿಸಲಾಗಿದೆ.

ಕೆಲವರು ಬೆಂಗಾವಲು ವಾಹನಗಳನ್ನು ಹಿಂಬಾಲಿಸುವ ಸಾಧ್ಯತೆ ಇರುವುದರಿಂದ ಭದ್ರತಾ ಸಿಬ್ಬಂದಿ ವಿಶೇಷ ನಿಗಾ ವಹಿಸಲಿದ್ದಾರೆ. ಅಲ್ಲದೆ, ಕೊಲ್ಲೂರಿಗೆ ಸಂಪರ್ಕ ಕಲ್ಪಿಸುವ ಕೊನೆಯ 30ರಿಂದ 40 ಕಿಲೋಮೀಟರ್ ರಸ್ತೆ ಮಾರ್ಗವು ಮೂಕಾಂಬಿಕಾ ವನ್ಯಜೀವಿ ಅಭಯಾರಣ್ಯ, ಸೌಪರ್ಣಿಕಾ ನದಿ ಪಾತ್ರ ಹಾಗೂ ದಟ್ಟ ಅರಣ್ಯ ಪ್ರದೇಶಗಳ ಮೂಲಕ ಹಾದುಹೋಗುವುದರಿಂದ ಸಂಶಯಾಸ್ಪದ ಚಟುವಟಿಕೆಗಳು ಹಾಗೂ ಕಾಡುಪ್ರಾಣಿಗಳ ಚಲನವಲನಗಳ ಮೇಲೂ ನಿಗಾ ಇರಿಸಲು ಸೂಚನೆ ನೀಡಲಾಗಿದೆ.

ಈ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆಯೊಂದಿಗೆ ಅರಣ್ಯ ಇಲಾಖೆಯ ಸಿಬ್ಬಂದಿಯನ್ನೂ ಭದ್ರತಾ ಕಾರ್ಯಾಚರಣೆಗೆ ನಿಯೋಜಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!