ಬಂಟ್ವಾಳ, ಜೂ.12: ಗಡಿಯಾರ ಸಮೀಪ ನಿನ್ನೆ ನಡೆದ ಕಾರು ಅಪಘಾತದಲ್ಲಿ ಚಾಲಕ ಮೃತಪಟ್ಟ ಬೆನ್ನಲ್ಲೇ ರಾಷ್ಟ್ರೀಯ ಹೆದ್ದಾರಿಯ ನಿರ್ವಹಣೆ ಮತ್ತು ಕಾಮಗಾರಿ ಅವ್ಯವಸ್ಥೆ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತವಾಗುತ್ತಿದೆ.
“ಹೆದ್ದಾರಿಯಲ್ಲಿ ಅಪಾಯಕಾರಿ ಕಲ್ಲು ಹಾಗೂ ತ್ಯಾಜ್ಯ ವಸ್ತುಗಳನ್ನು ತೆರವುಗೊಳಿಸದೆ ಅಮಾಯಕ ವಾಹನ ಸವಾರರ ಜೀವದೊಂದಿಗೆ ಚೆಲ್ಲಾಟ ನಡೆಸಲಾಗುತ್ತಿದೆ” ಎಂಬ ಬರಹಗಳೊಂದಿಗೆ ಹಲವು ಸಂದೇಶಗಳು ವೈರಲ್ ಆಗಿವೆ.
ಬಿಸಿರೋಡು–ಅಡ್ಡಹೊಳೆ ನಡುವಿನ ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ಕಾಂಕ್ರೀಟ್ ರಸ್ತೆ ಕಾಮಗಾರಿ ಇನ್ನೂ ಸಂಪೂರ್ಣಗೊಂಡಿಲ್ಲ. ಅಲ್ಲಲ್ಲಿ ಹೊಂಡ-ಗುಂಡಿಗಳು, ಕಾಮಗಾರಿಗೆ ಸಂಬಂಧಿಸಿದ ವಸ್ತುಗಳು ಹಾಗೂ ಅಪೂರ್ಣ ಕಾಮಗಾರಿಗಳು ವಾಹನ ಸಂಚಾರಕ್ಕೆ ಅಡ್ಡಿಯಾಗುತ್ತಿವೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.
ಮಳೆಗಾಲದಲ್ಲಿ ನೀರು ಸರಾಗವಾಗಿ ಹರಿದು ಹೋಗಲು ಸೂಕ್ತ ವ್ಯವಸ್ಥೆ ಇಲ್ಲದ ಕಾರಣ ರಸ್ತೆಯಲ್ಲಿ ನೀರು ನಿಂತು ವಾಹನ ಸವಾರರಿಗೆ ಅಪಾಯಕಾರಿಯಾಗಿ ಪರಿಣಮಿಸುತ್ತಿದೆ. ಕೆಲವೆಡೆ ರಸ್ತೆ ವಿಭಜಕಗಳ ಸಮೀಪ ಇರುವ ಗುಂಡಿಗಳು ನೀರಿನಿಂದ ಮುಚ್ಚಿಹೋಗುವುದರಿಂದ ರಾತ್ರಿ ವೇಳೆ ವಾಹನ ಸವಾರರಿಗೆ ಗೋಚರಿಸದೆ ಅಪಘಾತಗಳಿಗೆ ಕಾರಣವಾಗುವ ಸಾಧ್ಯತೆ ಇದೆ ಎಂದು ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ.
ಇದಲ್ಲದೆ, ಅಳವಡಿಸಲಾಗಿರುವ ಬೀದಿ ದೀಪಗಳು ಅನೇಕ ಕಡೆಗಳಲ್ಲಿ ಕಾರ್ಯನಿರ್ವಹಿಸುತ್ತಿಲ್ಲ ಎನ್ನುವ ದೂರುಗಳೂ ಕೇಳಿಬಂದಿವೆ. ಇಂತಹ ಸಣ್ಣಪುಟ್ಟ ಲೋಪಗಳು ಕೂಡ ಗಂಭೀರ ರಸ್ತೆ ಅಪಘಾತಗಳಿಗೆ ಕಾರಣವಾಗುವ ಸಾಧ್ಯತೆ ಇರುವುದರಿಂದ, ಗುತ್ತಿಗೆ ಕಂಪನಿ ಹಾಗೂ ರಾಷ್ಟ್ರೀಯ ಹೆದ್ದಾರಿ ಇಲಾಖೆ ತಕ್ಷಣ ಎಚ್ಚೆತ್ತುಕೊಂಡು ಅಗತ್ಯ ಸುರಕ್ಷತಾ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
ಇತ್ತೀಚಿನ ಅಪಘಾತಗಳ ಹಿನ್ನೆಲೆಯಲ್ಲಿ ಹೆದ್ದಾರಿಯ ಸುರಕ್ಷತಾ ವ್ಯವಸ್ಥೆಗಳನ್ನು ಸಮಗ್ರವಾಗಿ ಪರಿಶೀಲಿಸಿ, ವಾಹನ ಸವಾರರ ಜೀವ ರಕ್ಷಣೆಗೆ ಆದ್ಯತೆ ನೀಡಬೇಕೆಂಬ ಒತ್ತಾಯಗಳು ಹೆಚ್ಚಾಗಿವೆ.