ತಮಿಳುನಾಡು ಸಿಎಂ ವಿಜಯ್‌ಗೆ ಕಪ್ಪು ಬಾವುಟ ಪ್ರದರ್ಶಿಸಲು ಯತ್ನ: ಕರವೇ ಕಾರ್ಯಕರ್ತರ ವಶ

ಉಡುಪಿ: ಮೇಕೆದಾಟು ಯೋಜನೆಗೆ ತಮಿಳುನಾಡು ಸರ್ಕಾರ ವಿರೋಧ ವ್ಯಕ್ತಪಡಿಸುತ್ತಿರುವುದನ್ನು ಖಂಡಿಸಿ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅವರಿಗೆ ಕಪ್ಪು ಬಾವುಟ ಪ್ರದರ್ಶಿಸಲು ಮುಂದಾಗಿದ್ದ ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಕುಮಾರ್ ಶೆಟ್ಟಿ ಬಣ) ಕಾರ್ಯಕರ್ತರನ್ನು ಪೊಲೀಸರು ಶನಿವಾರ ವಶಕ್ಕೆ ಪಡೆದರು.

ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅವರ ಕೊಲ್ಲೂರು ಭೇಟಿ ಹಿನ್ನೆಲೆ ರಾಷ್ಟ್ರೀಯ ಹೆದ್ದಾರಿ 66ರ ಉದ್ಯಾವರ ಬಲಾಯಿಪಾದೆ ಪ್ರದೇಶದಲ್ಲಿ ಕರವೇ ಉಡುಪಿ ಜಿಲ್ಲಾ ಘಟಕದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಕಪ್ಪು ಬಾವುಟ ಪ್ರದರ್ಶನಕ್ಕೆ ಸಿದ್ಧತೆ ನಡೆಸಿದ್ದರು.

ಆದರೆ ವಿಜಯ್ ಅವರ ವಾಹನ ಸಂಚಾರಕ್ಕೂ ಮುನ್ನವೇ ಸ್ಥಳಕ್ಕಾಗಮಿಸಿದ ಪೊಲೀಸರು ಪ್ರತಿಭಟನೆಗೆ ಅವಕಾಶ ನೀಡದೆ ಕಾರ್ಯಕರ್ತರನ್ನು ವಶಕ್ಕೆ ಪಡೆದರು. ಯಾವುದೇ ಅಹಿತಕರ ಘಟನೆ ನಡೆಯದಂತೆ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ.

ಮುಖ್ಯಮಂತ್ರಿ ವಿಜಯ್ ಸಂಚರಿಸಿದ ಮಾರ್ಗದುದ್ದಕ್ಕೂ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಕರವೇ ಉಡುಪಿ ಜಿಲ್ಲಾ ಗೌರವಾಧ್ಯಕ್ಷ ಅನ್ಸಾರ್ ಅಹಮದ್ ಸೇರಿದಂತೆ ಹಲವು ಪದಾಧಿಕಾರಿಗಳು ಮತ್ತು ಕಾರ್ಯಕರ್ತರನ್ನು ವಶಕ್ಕೆ ಪಡೆದು ಬಳಿಕ ಬಿಡುಗಡೆ ಮಾಡಲಾಯಿತು.

ಮೇಕೆದಾಟು ಯೋಜನೆ ವಿಚಾರದಲ್ಲಿ ತಮಿಳುನಾಡು ಸರ್ಕಾರದ ನಿಲುವು ಖಂಡಿಸಿ ಕರವೇ ಕಾರ್ಯಕರ್ತರು ಪ್ರತಿಭಟನೆಗೆ ಮುಂದಾಗಿದ್ದರು ಎಂದು ಮೂಲಗಳು ತಿಳಿಸಿವೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!