ಚಲಿಸುತ್ತಿದ್ದ ಶಾಲಾ ಬಸ್ ಚಾಲಕನಿಗೆ ಹೃದಯಾಘಾತ; ಸಮಯಪ್ರಜ್ಞೆಯಿಂದ ತಪ್ಪಿದ ಭಾರೀ ಅನಾಹುತ

ಮಣಿಪಾಲ, ಜೂ.15: ಚಲಿಸುತ್ತಿದ್ದ ಶಾಲಾ ಬಸ್‌ನ ಚಾಲಕನಿಗೆ ಹಠಾತ್ ಹೃದಯಾಘಾತ ಉಂಟಾದ ಪರಿಣಾಮ ಬಸ್ ಡಿವೈಡರ್‌ಗೆ ಡಿಕ್ಕಿಯಾದ ಘಟನೆ ಸೋಮವಾರ ಮಣಿಪಾಲದಲ್ಲಿ ಸಂಭವಿಸಿದ್ದು, ಚಾಲಕನ ಸಮಯಪ್ರಜ್ಞೆಯಿಂದ ಸಂಭವಿಸಬಹುದಾಗಿದ್ದ ಭಾರೀ ಅನಾಹುತ ಕೂದಲೆಳೆಯ ಅಂತರದಲ್ಲಿ ತಪ್ಪಿದೆ.

ಮಣಿಪಾಲದ ಮಾಧವ ಕೃಪಾ ಶಾಲೆಗೆ ಸೇರಿದ ಬಸ್ ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ವೇಳೆ ಚಾಲಕ ಸುರೇಶ್ ಸಣ್ಣಕ್ಕಿಬೆಟ್ಟು (54) ಅವರಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡು ಅಸ್ವಸ್ಥಗೊಂಡರು. ಪರಿಸ್ಥಿತಿಯ ಗಂಭೀರತೆಯನ್ನು ಅರಿತ ಅವರು ಬಸ್‌ನ ನಿಯಂತ್ರಣ ಕಳೆದುಕೊಳ್ಳುವ ಮುನ್ನವೇ ವಾಹನವನ್ನು ರಸ್ತೆ ಬದಿಗೆ ತರುವ ಪ್ರಯತ್ನ ನಡೆಸಿದರು.

ಈ ವೇಳೆ ಬಸ್ ಡಿವೈಡರ್‌ಗೆ ಡಿಕ್ಕಿಯಾಗಿ ನಿಂತಿತು. ಆದರೆ ಚಾಲಕನ ಸಮಯೋಚಿತ ಕ್ರಮದಿಂದ ಬಸ್ ಹೆಚ್ಚಿನ ಅಪಾಯಕ್ಕೆ ಒಳಗಾಗದೆ ನಿಂತ ಪರಿಣಾಮ ಸಂಭವಿಸಬಹುದಾಗಿದ್ದ ದೊಡ್ಡ ದುರಂತ ತಪ್ಪಿದೆ.

ಬಸ್‌ನಲ್ಲಿದ್ದ ವಿದ್ಯಾರ್ಥಿಗಳು ಸುರಕ್ಷಿತರಾಗಿದ್ದು, ಯಾರಿಗೂ ಗಂಭೀರ ಗಾಯಗಳಾಗಿಲ್ಲ ಎಂದು ತಿಳಿದುಬಂದಿದೆ. ಘಟನೆ ನಡೆದ ತಕ್ಷಣ ಸ್ಥಳೀಯರು ಹಾಗೂ ಶಾಲಾ ಸಿಬ್ಬಂದಿ ಚಾಲಕನ ನೆರವಿಗೆ ಧಾವಿಸಿ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಚಾಲಕನಿಗೆ ಚಿಕಿತ್ಸೆ ಮುಂದುವರಿದಿದ್ದು, ಅವರ ಆರೋಗ್ಯ ಸ್ಥಿತಿ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. ಘಟನೆಯಿಂದ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

SHARE
Loading spinner

Leave a Reply

Your email address will not be published. Required fields are marked *

error: Content is protected !!