ದುರ್ಬಲಗೊಂಡ ಮುಂಗಾರು: ರಾಜ್ಯದಲ್ಲಿ ಮಳೆ ಕೊರತೆ, ಜಲಾಶಯಗಳ ನೀರಿನ ಮಟ್ಟ ಕುಸಿತ

ಬೆಂಗಳೂರು, ಜೂ.16: ರಾಜ್ಯದಲ್ಲಿ ನೈಋತ್ಯ ಮುಂಗಾರು ಮಾರುತಗಳು ತೀವ್ರ ದುರ್ಬಲಗೊಂಡ ಪರಿಣಾಮ ಜೂನ್ ತಿಂಗಳ ಮೊದಲ ಎರಡು ವಾರಗಳಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗಿದ್ದು, ಪ್ರಮುಖ ಜಲಾಶಯಗಳ ನೀರಿನ ಮಟ್ಟ ಗಣನೀಯವಾಗಿ ಕುಸಿದಿದೆ. ಇದರಿಂದ ಕುಡಿಯುವ ನೀರು ಹಾಗೂ ಕೃಷಿ ಚಟುವಟಿಕೆಗಳ ಬಗ್ಗೆ ಆತಂಕ ಹೆಚ್ಚಾಗಿದೆ.

ಹವಾಮಾನ ಇಲಾಖೆಯ ಮಾಹಿತಿಯ ಪ್ರಕಾರ, ರಾಜ್ಯದಲ್ಲಿ ಇದುವರೆಗೆ ಶೇ.21ರಷ್ಟು ಮಳೆ ಕೊರತೆ ದಾಖಲಾಗಿದ್ದು, ದೇಶಾದ್ಯಂತ ಶೇ.64ರಷ್ಟು ಮಳೆಯ ಅಭಾವ ಉಂಟಾಗಿದೆ. ಜೂನ್ 4ರಿಂದ 15ರವರೆಗಿನ ಅವಧಿಯಲ್ಲಿ ದೇಶದಲ್ಲಿ ವಾಡಿಕೆಯಂತೆ 53 ಮಿ.ಮೀ. ಮಳೆಯಾಗಬೇಕಾಗಿದ್ದರೆ, ಕೇವಲ 19 ಮಿ.ಮೀ. ಮಳೆ ಮಾತ್ರ ದಾಖಲಾಗಿದೆ.

ರಾಜ್ಯದ ವಿವಿಧ ಭಾಗಗಳಲ್ಲಿ ಮುಂಗಾರು ದುರ್ಬಲವಾಗಿರುವುದು ಸ್ಪಷ್ಟವಾಗಿ ಗೋಚರಿಸುತ್ತಿದೆ. ಕರಾವಳಿ ಜಿಲ್ಲೆಗಳಲ್ಲಿ ವಾಡಿಕೆಗಿಂತ ಶೇ.41ರಷ್ಟು ಕಡಿಮೆ ಮಳೆಯಾಗಿದ್ದು, ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಪ್ರದೇಶಗಳಿಗೆ ಕುಡಿಯುವ ನೀರು ಒದಗಿಸುವ ಕಾವೇರಿ ಕಣಿವೆಯಲ್ಲಿ ಶೇ.36ರಷ್ಟು ಮಳೆ ಕೊರತೆ ದಾಖಲಾಗಿದೆ. ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡು ಪ್ರದೇಶಗಳಲ್ಲಿ ಕ್ರಮವಾಗಿ ಶೇ.2 ಮತ್ತು ಶೇ.1ರಷ್ಟು ಮಳೆ ಕೊರತೆ ಕಂಡುಬಂದಿದೆ.

ಪೂರ್ವ ಮುಂಗಾರು ಹಾಗೂ ನೈಋತ್ಯ ಮುಂಗಾರಿನ ದುರ್ಬಲತೆಯ ಪರಿಣಾಮ ಕೃಷ್ಣಾ ಮತ್ತು ಕಾವೇರಿ ಕಣಿವೆಯ ಪ್ರಮುಖ ಜಲಾಶಯಗಳ ನೀರಿನ ಮಟ್ಟ ಕುಸಿದಿದೆ. ಸದ್ಯ ರಾಜ್ಯದ ಪ್ರಮುಖ ಅಣೆಕಟ್ಟುಗಳಲ್ಲಿ ಒಟ್ಟು ಸಾಮರ್ಥ್ಯದ ಕೇವಲ ಶೇ.23ರಷ್ಟು ನೀರು ಮಾತ್ರ ಸಂಗ್ರಹವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದರ ನಡುವೆ ಮುಂದಿನ ತಿಂಗಳು ‘ಎಲ್ ನಿನೋ’ ಪರಿಣಾಮದ ಆತಂಕವೂ ಎದುರಾಗಿದೆ. ಪೂರ್ವ ಮುಂಗಾರು ಸಮರ್ಪಕವಾಗಿ ಆಗದ ಕಾರಣ ಭೂಮಿಯಲ್ಲಿ ನೀರಿನ ಹೀರಿಕೆ ಪ್ರಮಾಣ ಕಡಿಮೆಯಾಗಿದೆ. ಈ ಹಿನ್ನೆಲೆಯಲ್ಲಿ ‘ಎಲ್ ನಿನೋ’ ಪ್ರಭಾವ ರಾಜ್ಯದ ಮುಂಗಾರು ಚಟುವಟಿಕೆಗಳ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಹವಾಮಾನ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

‘ಎಲ್ ನಿನೋ’ ಪರಿಣಾಮ ತೀವ್ರಗೊಂಡಲ್ಲಿ ರಾಜ್ಯದಲ್ಲಿ ಮಳೆಯ ಪ್ರಮಾಣ ಮತ್ತಷ್ಟು ಕಡಿಮೆಯಾಗುವ ಸಾಧ್ಯತೆ ಇದ್ದು, ಮುಂಬರುವ ವಾರಗಳಲ್ಲಿ ಹವಾಮಾನ ಪರಿಸ್ಥಿತಿಯ ಮೇಲೆ ನಿಗಾ ವಹಿಸಲಾಗುತ್ತಿದೆ ಎಂದು ತಜ್ಞರು ತಿಳಿಸಿದ್ದಾರೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!