ರಾಹುಲ್ ಗಾಂಧಿ ಜನ್ಮದಿನ: ಹಿರಿಯ ಕಾಂಗ್ರೆಸ್ ಕಾರ್ಯಕರ್ತರಿಗೆ ಸನ್ಮಾನ

ಉಡುಪಿ:ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ದೇಶದ ಪ್ರಧಾನಿಯಾಗಬೇಕಾದರೆ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (SIR) ಪ್ರಕ್ರಿಯೆ ಕುರಿತು ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಜಾಗೃತರಾಗಿರಬೇಕು ಎಂದು ಉಡುಪಿ ಕಾಂಗ್ರೆಸ್ ಮುಖಂಡ ಪ್ರಸಾದ್ ರಾಜ್ ಕಾಂಚನ್ ಹೇಳಿದರು.

ಬ್ರಹ್ಮಾವರದಲ್ಲಿ ರಾಹುಲ್ ಗಾಂಧಿ ಅವರ ಜನ್ಮದಿನದ ಅಂಗವಾಗಿ ಆಯೋಜಿಸಲಾದ ಹಿರಿಯ ಕಾಂಗ್ರೆಸ್ ಕಾರ್ಯಕರ್ತರ ಸನ್ಮಾನ ಹಾಗೂ ಸ್ವಚ್ಛತಾ ಕಾರ್ಮಿಕರಿಗೆ ಕಿಟ್ ವಿತರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಬಿಜೆಪಿ ಉದ್ಯಮಿಗಳು ಮತ್ತು ಶ್ರೀಮಂತರ ಪರ ಇರುವ ಪಕ್ಷವಾಗಿದ್ದು, ಕಾಂಗ್ರೆಸ್ ಪಕ್ಷವು ಸದಾ ಬಡವರು, ರೈತರು ಹಾಗೂ ಸಾಮಾನ್ಯ ಜನರ ಹಿತಾಸಕ್ತಿಗಾಗಿ ಕೆಲಸ ಮಾಡುತ್ತಿದೆ ಎಂದು ಅವರು ಹೇಳಿದರು.

ರಾಜ್ಯ ಸರ್ಕಾರ ಜಾರಿಗೊಳಿಸಿರುವ ಗ್ಯಾರಂಟಿ ಯೋಜನೆಗಳು ಜನಸಾಮಾನ್ಯರ ಬದುಕಿನಲ್ಲಿ ಸಕಾರಾತ್ಮಕ ಬದಲಾವಣೆ ತಂದಿದ್ದು, ಈ ಯೋಜನೆಗಳ ಯಶಸ್ಸನ್ನು ಕಂಡು ಬಿಜೆಪಿ ಕೂಡ ಇದೇ ಮಾದರಿಯ ಕಾರ್ಯಕ್ರಮಗಳನ್ನು ಅನುಸರಿಸಲು ಮುಂದಾಗಿದೆ ಎಂದು ಟೀಕಿಸಿದರು.

ರಾಹುಲ್ ಗಾಂಧಿ ಅವರ ನಾಯಕತ್ವದಲ್ಲಿ ದೇಶದಲ್ಲಿ ಪರಿವರ್ತನೆ ಸಾಧ್ಯವಾಗಲಿದ್ದು, ಅದಕ್ಕಾಗಿ ಪಕ್ಷದ ಕಾರ್ಯಕರ್ತರು ಸಂಘಟಿತವಾಗಿ ಕಾರ್ಯನಿರ್ವಹಿಸಬೇಕು ಎಂದು ಅವರು ಕರೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಘವೇಂದ್ರ ಶೆಟ್ಟಿ ಕರ್ಜೆ ವಹಿಸಿದ್ದರು. ಕರಾವಳಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಂ.ಎ. ಗಫೂರ್ ಹಾಗೂ ಕಾಂಗ್ರೆಸ್ ಉಡುಪಿ ಜಿಲ್ಲಾಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಮಾತನಾಡಿದರು.

ಮುಖಂಡರಾದ ಕಿಶನ್ ಹೆಗ್ಡೆ ಕೊಳ್ಕೆಬೈಲು, ನಿತ್ಯಾನಂದ ಶೆಟ್ಟಿ, ಭುಜಂಗ ಶೆಟ್ಟಿ, ವೆರೋನಿಕಾ ಕರ್ನೆಲಿಯೋ, ಪ್ರಖ್ಯಾತ್ ಶೆಟ್ಟಿ, ಜ್ಯೋತಿ ಹೆಬ್ಬಾರ್, ಗೋಪಿಕೃಷ್ಣ ನಾಯ್ಕ್, ರೋಶನ್ ಕುಮಾರ್ ಶೆಟ್ಟಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಹಿರಿಯ ಕಾಂಗ್ರೆಸ್ ಕಾರ್ಯಕರ್ತರನ್ನು ಸನ್ಮಾನಿಸಲಾಯಿತು. ಸ್ವಚ್ಛತಾ ಕಾರ್ಮಿಕರಿಗೆ ಕಿಟ್ ವಿತರಣೆ ನಡೆಯಿತು. ಡಾ. ಸುನೀತಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

SHARE
Loading spinner

Leave a Reply

Your email address will not be published. Required fields are marked *

error: Content is protected !!