ಬಂಟ್ವಾಳ: ಎರಡು ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಒಬ್ಬನನ್ನು ಬಂಟ್ವಾಳ ನಗರ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.
ಬಂಧಿತನನ್ನು ಕಾಟಿಪಳ್ಳ ಸುರತ್ಕಲ್ ನಿವಾಸಿ ಮೊಹಮ್ಮದ್ ಆಯುಬ್ ಅವರ ಪುತ್ರ ಮೊಹಮ್ಮದ್ ಫರಾಜ್ ಎಂದು ಗುರುತಿಸಲಾಗಿದೆ.
ಬಂಟ್ವಾಳ ನಗರ ಪೊಲೀಸ್ ಠಾಣೆಯ ಅ.ಕ್ರ. 98/2023 ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳದ ಎಸಿಜೆ ಮತ್ತು ಜೆಎಂಎಫ್ಸಿ ನ್ಯಾಯಾಲಯದ ಸಿ.ಸಿ. ನಂ. 440/2024 ಪ್ರಕರಣದಲ್ಲಿ ಫರಾಜ್ ವಾರಂಟ್ ಆರೋಪಿಯಾಗಿ ತಲೆಮರೆಸಿಕೊಂಡಿದ್ದನು.
ಬಂಟ್ವಾಳ ನಗರ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಅನಂತಪದ್ಮನಾಭ ಅವರ ಮಾರ್ಗದರ್ಶನದಲ್ಲಿ ಎಎಸ್ಐ ಸುಜು, ಸಿಎಚ್ಸಿ ಜಗದೀಶ್ ಹಾಗೂ ಪಿಸಿ ಮಂಜುನಾಥ್ ಅವರ ತಂಡ ಮಂಗಳೂರಿನಲ್ಲಿ ಆರೋಪಿಯನ್ನು ಬಂಧಿಸಿತು. ಬಳಿಕ ಪಿಸಿ ವಿಜಯ ಹಾಗೂ ಪಿಸಿ ರಂಜಿತ್ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದರು.
ವಿಚಾರಣೆ ನಡೆಸಿದ ನ್ಯಾಯಾಲಯ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ. ಆರೋಪಿಯ ವಿರುದ್ಧ ಮಂಗಳೂರು ನಗರದ ಪಣಂಬೂರು, ಬಜ್ಪೆ ಹಾಗೂ ಉಡುಪಿ ನಗರ ಪೊಲೀಸ್ ಠಾಣೆಗಳಲ್ಲಿ ವಿವಿಧ ಪ್ರಕರಣಗಳು ದಾಖಲಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.