ಜುಲೈ 3ರ ದಲಿತ ಜನಾಗ್ರಹ ಸಮಾವೇಶಕ್ಕೆ ಉಡುಪಿಯಿಂದ 500 ಕಾರ್ಯಕರ್ತರು ಭಾಗವಹಣೆ

ಉಡುಪಿ, ಜೂನ್ 27:
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್‌ವಾದ) ರಾಜ್ಯ ಸಮಿತಿಯ ಆಶ್ರಯದಲ್ಲಿ ಜುಲೈ 3ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ದಲಿತ ಜನಾಗ್ರಹ ಸಮಾವೇಶ ಆಯೋಜಿಸಲಾಗಿದೆ. ಈ ಸಮಾವೇಶದಲ್ಲಿ ಉಡುಪಿ ಜಿಲ್ಲೆಯಿಂದ ಸುಮಾರು 500 ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ದಸಂಸ ರಾಜ್ಯ ಸಂಘಟನಾ ಸಂಚಾಲಕ ಸುಂದರ್ ಮಾಸ್ತರ್ ತಿಳಿಸಿದ್ದಾರೆ.

ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಪ್ರಧಾನ ಸಂಚಾಲಕ ಮಾವಳ್ಳಿ ಶಂಕರ್ ಅವರ ನೇತೃತ್ವದಲ್ಲಿ ನಡೆಯಲಿರುವ ಸಮಾವೇಶದಲ್ಲಿ ದಲಿತ ಸಂಘರ್ಷ ಸಮಿತಿಯ ಸ್ಥಾಪಕ ಪ್ರೊ. ಬಿ. ಕೃಷ್ಣಪ್ಪ ಅವರ ಪತ್ನಿ ಇಂದಿರಾ ಕೃಷ್ಣಪ್ಪ ಸೇರಿದಂತೆ ರಾಜ್ಯದ ವಿವಿಧ ಭಾಗಗಳ ಮುಖಂಡರು, ಬುದ್ಧಿಜೀವಿಗಳು, ಪ್ರಗತಿಪರರು, ಸಾಹಿತಿಗಳು ಹಾಗೂ ರೈತ ಮುಖಂಡರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಸಮಾವೇಶದಲ್ಲಿ ದಲಿತ ಸಮುದಾಯಗಳಿಗೆ ಭೂಮಿ ಮತ್ತು ವಸತಿ ಹಂಚಿಕೆ, ಸರ್ಕಾರಿ ಇಲಾಖೆಗಳಲ್ಲಿನ ಬ್ಯಾಕ್‌ಲಾಗ್ ಹುದ್ದೆಗಳ ಭರ್ತಿ, ಉದ್ಯೋಗ ನೇಮಕಾತಿ ಪ್ರಕ್ರಿಯೆ ವೇಗಗೊಳಿಸುವುದು ಹಾಗೂ ವಿಶೇಷ ಘಟಕ ಯೋಜನೆಯಡಿ ಏಕಗವಾಕ್ಷಿ ನೀತಿಯನ್ನು ತ್ವರಿತವಾಗಿ ಜಾರಿಗೊಳಿಸುವಂತೆ ಸರ್ಕಾರವನ್ನು ಆಗ್ರಹಿಸಲಾಗುವುದು ಎಂದು ಅವರು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಪ್ರಧಾನ ಸಂಚಾಲಕ ಟಿ. ಮಂಜುನಾಥ ಗಿಳಿಯಾರು, ವಿಭಾಗೀಯ ಸಂಘಟನಾ ಸಂಚಾಲಕ ಶ್ಯಾಮರಾಜ್ ಬಿರ್ತಿ ಸೇರಿದಂತೆ ಇತರ ಪದಾಧಿಕಾರಿಗಳು ಉಪಸ್ಥಿತರಿದ್ದರು.

SHARE
Loading spinner

Leave a Reply

Your email address will not be published. Required fields are marked *

error: Content is protected !!