ಜಮೀರ್ ಅಹ್ಮದ್ ಖಾನ್‌ಗೆ ಪ್ರಮುಖ ಸಚಿವ ಸ್ಥಾನ ನೀಡುವಂತೆ ಡಿಕೆಶಿಗೆ ಕಾಂಗ್ರೆಸ್ ಕಾರ್ಯಕರ್ತನ ಮನವಿ

ಬಂಟ್ವಾಳ, ಜೂನ್ 27:
ಚಾಮರಾಜಪೇಟೆ ಕ್ಷೇತ್ರದ ಶಾಸಕ ಜಮೀರ್ ಅಹ್ಮದ್ ಖಾನ್ ಅವರಿಗೆ ಜನಸೇವೆ ಹಾಗೂ ಕಾಂಗ್ರೆಸ್ ಪಕ್ಷದ ಮೇಲಿನ ನಿಷ್ಠೆಯನ್ನು ಪರಿಗಣಿಸಿ ರಾಜ್ಯ ಸರ್ಕಾರದಲ್ಲಿ ಪ್ರಮುಖ ಸಚಿವ ಸ್ಥಾನ ನೀಡುವಂತೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಕಾಂಗ್ರೆಸ್ ಕಾರ್ಯಕರ್ತ ಅಸೀಬ್ ರಹ್ಮಾನ್ ಅವರು ರಾಜ್ಯದ ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.

ಪತ್ರದಲ್ಲಿ ಜಮೀರ್ ಅಹ್ಮದ್ ಖಾನ್ ಅವರು ಕಾಂಗ್ರೆಸ್ ಪಕ್ಷದ ಸಂಘಟನೆಗೆ ಮಹತ್ವದ ಕೊಡುಗೆ ನೀಡಿದ್ದು, ರಾಜ್ಯಾದ್ಯಂತ ಪ್ರವಾಸ ಕೈಗೊಂಡು ಅಲ್ಪಸಂಖ್ಯಾತರು, ದಲಿತರು, ಹಿಂದುಳಿದ ವರ್ಗಗಳು ಸೇರಿದಂತೆ ವಿವಿಧ ಸಮುದಾಯಗಳ ಜನರನ್ನು ಪಕ್ಷದ ಪರವಾಗಿ ಒಗ್ಗೂಡಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ಉಲ್ಲೇಖಿಸಿದ್ದಾರೆ.

ಪಕ್ಷ ಸಂಕಷ್ಟದಲ್ಲಿದ್ದ ಸಂದರ್ಭಗಳಲ್ಲಿಯೂ ಅವರು ಪಕ್ಷದ ಬೆನ್ನೆಲುಬಾಗಿ ನಿಂತು ಹಲವು ಚುನಾವಣೆಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಿದ್ದಾರೆ ಎಂದು ಪ್ರಶಂಸಿಸಲಾಗಿದೆ. ಚಾಮರಾಜಪೇಟೆ ಕ್ಷೇತ್ರದಲ್ಲಿ ರಸ್ತೆ, ಕುಡಿಯುವ ನೀರು, ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರಗಳ ಅಭಿವೃದ್ಧಿಗೆ ಆದ್ಯತೆ ನೀಡಿರುವುದರ ಜೊತೆಗೆ, ಕೋವಿಡ್-19 ಸಾಂಕ್ರಾಮಿಕ ಅವಧಿಯಲ್ಲಿ ಸಾವಿರಾರು ಬಡ ಹಾಗೂ ನಿರ್ಗತಿಕರಿಗೆ ಆಹಾರ, ದಿನಸಿ ಮತ್ತು ವೈದ್ಯಕೀಯ ನೆರವು ಒದಗಿಸಿ ಮಾನವೀಯ ಸೇವೆ ಸಲ್ಲಿಸಿದ್ದಾರೆ ಎಂದು ಪತ್ರದಲ್ಲಿ ತಿಳಿಸಲಾಗಿದೆ.

ಎಲ್ಲಾ ಧರ್ಮ ಹಾಗೂ ಜಾತಿಯ ಜನರನ್ನು ಸಮಾನವಾಗಿ ಕಾಣುವ ಜನಪರ ನಾಯಕತ್ವ ಮತ್ತು ಪಕ್ಷದ ಅಭಿವೃದ್ಧಿಗೆ ನೀಡಿರುವ ಕೊಡುಗೆಯನ್ನು ಪರಿಗಣಿಸಿ ಜಮೀರ್ ಅಹ್ಮದ್ ಖಾನ್ ಅವರಿಗೆ ಉನ್ನತ ಜವಾಬ್ದಾರಿಯುತ ಸಚಿವ ಸ್ಥಾನ ನೀಡಬೇಕು. ಇದರಿಂದ ಸರ್ಕಾರ, ಪಕ್ಷ ಹಾಗೂ ರಾಜ್ಯದ ಜನತೆಗೆ ಹೆಚ್ಚಿನ ಅನುಕೂಲವಾಗಲಿದೆ ಎಂದು ಅಸೀಬ್ ರಹ್ಮಾನ್ ಮನವಿ ಮಾಡಿದ್ದಾರೆ.

ಇದೇ ವೇಳೆ, ಮುಖ್ಯಮಂತ್ರಿ ಅವರಿಗೆ ತಮ್ಮ ಸಚಿವ ಸ್ಥಾನದ ಕುರಿತು ಮನವಿ ಸಲ್ಲಿಸಿರುವ ವಿಷಯವನ್ನು ತಿಳಿಸಿ ಜಮೀರ್ ಅಹ್ಮದ್ ಖಾನ್ ಅವರಿಗೂ ಪ್ರತ್ಯೇಕ ಪತ್ರ ಬರೆದಿರುವುದಾಗಿ ಅಸೀಬ್ ರಹ್ಮಾನ್ ತಿಳಿಸಿದ್ದಾರೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!