ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಾಲಯಕ್ಕೆ ಡಿಸಿಎಂ ಡಾ. ಜಿ. ಪರಮೇಶ್ವರ್ ಭೇಟಿ: ಭಕ್ತರಿಗೆ ಮೂಲಸೌಕರ್ಯ ವಿಸ್ತರಣೆಗೆ ಶೀಘ್ರ ಮಾಸ್ಟರ್ ಪ್ಲಾನ್ ಜಾರಿ

ಕುಂದಾಪುರ: ರಾಜ್ಯದ ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವ ಡಾ. ಜಿ. ಪರಮೇಶ್ವರ್ ಅವರು ಭಾನುವಾರ ಬೆಳಗ್ಗೆ ಪತ್ನಿಯೊಂದಿಗೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಾಲಯಕ್ಕೆ ಭೇಟಿ ನೀಡಿ ದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಅವರು ಚಂಡಿಕಾ ಹೋಮದಲ್ಲೂ ಭಾಗವಹಿಸಿದರು.

ದೇವಾಲಯದ ಹಿರಿಯ ಅರ್ಚಕರಾದ ನರಸಿಂಹ ಅಡಿಗ ಹಾಗೂ ಸುಬ್ರಮಣ್ಯ ಅಡಿಗ ಅವರ ನೇತೃತ್ವದಲ್ಲಿ ಚಂಡಿಕಾ ಹೋಮ ಸೇರಿದಂತೆ ವಿವಿಧ ಧಾರ್ಮಿಕ ವಿಧಿವಿಧಾನಗಳು ನೆರವೇರಿದವು. ಪೂಜೆ ಬಳಿಕ ದೇವಾಲಯದ ಆಡಳಿತ ಮಂಡಳಿ ವತಿಯಿಂದ ಉಪಮುಖ್ಯಮಂತ್ರಿಗೆ ದೇವಿಯ ಪ್ರಸಾದ ಹಾಗೂ ಸ್ಮರಣಿಕೆಯನ್ನು ನೀಡಿ ಗೌರವಿಸಲಾಯಿತು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಡಾ. ಪರಮೇಶ್ವರ್, ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಆಗಮಿಸುವ ಭಕ್ತರಿಗೆ ಉತ್ತಮ ದರ್ಶನ ವ್ಯವಸ್ಥೆ, ಪಾರ್ಕಿಂಗ್, ವಸತಿ ಸೇರಿದಂತೆ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸುವ ಉದ್ದೇಶದಿಂದ ಸಮಗ್ರ ಮಾಸ್ಟರ್ ಪ್ಲಾನ್ ಸಿದ್ಧಪಡಿಸಲಾಗಿದ್ದು, ಶೀಘ್ರದಲ್ಲೇ ಅದನ್ನು ಕಾರ್ಯಗತಗೊಳಿಸಲಾಗುವುದು ಎಂದು ತಿಳಿಸಿದರು.

ಮುಜರಾಯಿ ಇಲಾಖೆಗೆ ಸೇರಿದ ದೇವಸ್ಥಾನಗಳ ಜಮೀನುಗಳ ಮೇಲಿನ ಅಕ್ರಮ ಒತ್ತುವರಿಗಳನ್ನು ತೆರವುಗೊಳಿಸುವಂತೆ ಇಲಾಖೆಯ ಆಯುಕ್ತರಿಗೆ ಈಗಾಗಲೇ ಸೂಚನೆ ನೀಡಲಾಗಿದೆ. ಇದೇ ನಿರ್ದೇಶನವನ್ನು ಸಂಬಂಧಪಟ್ಟ ಜಿಲ್ಲಾಧಿಕಾರಿಗಳಿಗೂ ನೀಡಲಾಗಿದ್ದು, ಅಗತ್ಯ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು.

ಈ ಸಂದರ್ಭದಲ್ಲಿ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ, ಬೈಂದೂರು ಕ್ಷೇತ್ರದ ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ, ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ., ದೇವಾಲಯದ ಆಡಳಿತ ಮಂಡಳಿಯ ಸದಸ್ಯರು ಹಾಗೂ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.

SHARE
Loading spinner

Leave a Reply

Your email address will not be published. Required fields are marked *

error: Content is protected !!