ಬಿಸಿರೋಡು–ಮಂಗಳೂರು ಮಾರ್ಗದಲ್ಲಿ ಬಸ್ ಕೊರತೆ: ಮೆಟ್ಟಿಲಲ್ಲಿ ನೇತಾಡುವ ವಿದ್ಯಾರ್ಥಿಗಳು

ಬಂಟ್ವಾಳ: ಬಿಸಿರೋಡು–ಮಂಗಳೂರು ಮಾರ್ಗದಲ್ಲಿ ಸಮರ್ಪಕ ಬಸ್ ಸೌಲಭ್ಯ ಇಲ್ಲದ ಕಾರಣ ವಿದ್ಯಾರ್ಥಿಗಳು ಪ್ರತಿದಿನ ತುಂಬಿ ತುಳುಕುವ ಬಸ್‌ಗಳ ಮೆಟ್ಟಿಲಲ್ಲಿ ನೇತಾಡುತ್ತಾ ಕಾಲೇಜಿಗೆ ತೆರಳಬೇಕಾದ ಪರಿಸ್ಥಿತಿ ನಿರ್ಮಾಣವಾಗಿದ್ದು, ಜೀವಭಯದ ನಡುವೆ ಪ್ರಯಾಣಿಸುವಂತಾಗಿದೆ.

ಬೆಳಿಗ್ಗೆ ಹಾಗೂ ಸಂಜೆ ಕಾಲೇಜು ಸಮಯದಲ್ಲಿ ಬಸ್‌ಗಳ ಕೊರತೆಯಿಂದ ವಿದ್ಯಾರ್ಥಿಗಳು ಅನಿವಾರ್ಯವಾಗಿ ಅಪಾಯಕಾರಿ ರೀತಿಯಲ್ಲಿ ಪ್ರಯಾಣಿಸುತ್ತಿದ್ದಾರೆ. ಈ ಕುರಿತು ಹಲವು ಬಾರಿ ಮಾಧ್ಯಮಗಳಲ್ಲಿ ವರದಿಗಳು ಪ್ರಕಟವಾಗಿ ಅಧಿಕಾರಿಗಳ ಗಮನ ಸೆಳೆದಿದ್ದರೂ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಬಂದಿಲ್ಲ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.

ಆರ್ಥಿಕವಾಗಿ ಹಿಂದುಳಿದ ಕುಟುಂಬಗಳ ವಿದ್ಯಾರ್ಥಿಗಳು ಸಾರ್ವಜನಿಕ ಸಾರಿಗೆಯನ್ನೇ ಅವಲಂಬಿಸಿರುವ ಹಿನ್ನೆಲೆಯಲ್ಲಿ, ಬಸ್‌ಗಳ ಕೊರತೆ ಅವರ ಶಿಕ್ಷಣಕ್ಕೂ ಸುರಕ್ಷತೆಗೂ ಸವಾಲಾಗಿದೆ. ಶಕ್ತಿ ಯೋಜನೆ ಹಾಗೂ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಯೋಜನೆ ಜಾರಿಯಲ್ಲಿದ್ದರೂ, ಪ್ರಯಾಣಿಕರ ಸಂಖ್ಯೆಗೆ ಅನುಗುಣವಾಗಿ ಹೆಚ್ಚುವರಿ ಬಸ್‌ಗಳನ್ನು ನಿಯೋಜಿಸದಿರುವುದು ಸಮಸ್ಯೆಯನ್ನು ಮತ್ತಷ್ಟು ಗಂಭೀರಗೊಳಿಸಿದೆ.

ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಬಿಸಿರೋಡು–ಮಂಗಳೂರು ಮಾರ್ಗದಲ್ಲಿ ಬೆಳಿಗ್ಗೆ ಹಾಗೂ ಸಂಜೆ ವೇಳೆಯಲ್ಲಿ ಹೆಚ್ಚುವರಿ ಬಸ್‌ಗಳನ್ನು ಕಾರ್ಯಾಚರಣೆಗೆ ಇಳಿಸಿ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವಂತೆ ವಿದ್ಯಾರ್ಥಿಗಳು, ಪೋಷಕರು ಹಾಗೂ ಸಾರ್ವಜನಿಕರು ಸರ್ಕಾರ ಮತ್ತು ಸಾರಿಗೆ ಇಲಾಖೆಯನ್ನು ಒತ್ತಾಯಿಸಿದ್ದಾರೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!