ಬೆಳ್ತಂಗಡಿ, ಜು. 2: ಸುಮಾರು ಒಂಬತ್ತು ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಕಳ್ಳತನ ಪ್ರಕರಣದ ಆರೋಪಿಯನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಆಂಧ್ರಪ್ರದೇಶದ ಚಿತ್ತೂರು ನಿವಾಸಿ ಶ್ರೀನಿವಾಸಲು ವಿ. ಎಂದು ಗುರುತಿಸಲಾಗಿದೆ. ಈತ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ 2016ರಲ್ಲಿ ದಾಖಲಾಗಿದ್ದ (ಅಪರಾಧ ಸಂಖ್ಯೆ 169/2016) ಭಾರತೀಯ ದಂಡ ಸಂಹಿತೆಯ ಕಲಂ 379 (ಕಳ್ಳತನ) ಹಾಗೂ 201 (ಸಾಕ್ಷ್ಯ ನಾಶ) ಪ್ರಕರಣದಲ್ಲಿ ಆರೋಪಿಯಾಗಿದ್ದ.

ಪ್ರಕರಣ ದಾಖಲಾದ ಬಳಿಕ ಸುಮಾರು ಒಂಬತ್ತು ವರ್ಷಗಳಿಂದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಧರ್ಮಸ್ಥಳ ಪೊಲೀಸ್ ಠಾಣೆಯ ಸಿಬ್ಬಂದಿಗಳಾದ ವೃಷಭ ಹಾಗೂ ಚರಣ್ ರಾಜ್ ಅವರು ಆಂಧ್ರಪ್ರದೇಶದ ಚಿತ್ತೂರಿನಲ್ಲಿ ಪತ್ತೆಹಚ್ಚಿ ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಜುಲೈ 1ರಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಧೀಶರು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದ್ದಾರೆ.


