ಬಂಟ್ವಾಳ, ಜುಲೈ 6: ಕಾಲೇಜಿಗೆ ತೆರಳಲು ಬಸ್‌ಗಾಗಿ ಕಾಯುತ್ತಿದ್ದ 17 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಯುವಕನೊಬ್ಬ ಮಚ್ಚಿನಿಂದ ಹಲ್ಲೆ ನಡೆಸಿದ ಘಟನೆ ಬಂಟ್ವಾಳ ತಾಲೂಕಿನ ಮೊಂತಿಮಾರು ಬಸ್ ನಿಲ್ದಾಣದ ಬಳಿ ಸೋಮವಾರ ನಡೆದಿದೆ.
ಹಲ್ಲೆಗೊಳಗಾದ ಬಾಲಕಿಯ ತಲೆ ಹಾಗೂ ಕೈಗೆ ಗಾಯಗಳಾಗಿದ್ದು, ಆಕೆಯನ್ನು ತಕ್ಷಣ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿಕಿತ್ಸೆ ಪಡೆಯುತ್ತಿರುವ ಬಾಲಕಿ ಪ್ರಾಣಾಪಾಯದಿಂದ ಪಾರಾಗಿರುವುದಾಗಿ ತಿಳಿದುಬಂದಿದೆ.


ಹಲ್ಲೆ ನಡೆಸಿದ ಆರೋಪಿಯನ್ನು ಬಂಟ್ವಾಳ ತಾಲೂಕಿನ ಮಂಚಿ ನಿವಾಸಿ ಮೊಹಮ್ಮದ್ ಜವ್ವಾರ್ (28) ಎಂದು ಗುರುತಿಸಲಾಗಿದೆ. ಘಟನೆ ಬಳಿಕ ಆರೋಪಿ ಸ್ವತಃ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಗೆ ತೆರಳಿ ಶರಣಾಗಿದ್ದಾನೆ.
ಪ್ರಕರಣ ದಾಖಲಿಸಿಕೊಂಡಿರುವ ಬಂಟ್ವಾಳ ಗ್ರಾಮಾಂತರ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಹಲ್ಲೆಗೆ ನಿಖರ ಕಾರಣ ಏನು ಎಂಬುದು ತನಿಖೆಯಿಂದ ತಿಳಿದುಬರಬೇಕಿದ್ದು, ಈ ಸಂಬಂಧ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗಿದೆ.


