ಉಡುಪಿ, ಜು. 7: ಹಿರಿಯಡಕ ಪೊಲೀಸ್ ಠಾಣೆ ವ್ಯಾಪ್ತಿಯ ಪೆರ್ಡೂರು ಪದ್ಮಕಮಲ ಸಂಜೀವಿನಿ ಗ್ರಾಮ ಪಂಚಾಯಿತಿ ಮಟ್ಟದ ಒಕ್ಕೂಟದಲ್ಲಿ ₹23 ಲಕ್ಷ ಹಣ ದುರ್ಬಳಕೆ ಹಾಗೂ ವಂಚನೆ ನಡೆಸಿದ ಆರೋಪದಡಿ ಇಬ್ಬರನ್ನು ಹಿರಿಯಡಕ ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ಒಕ್ಕೂಟದ ಮಾಜಿ ಮುಖ್ಯ ಪುಸ್ತಕ ಬರಹಗಾರ್ತಿ ಸುಗಂಧಿ ಹಾಗೂ ಅವರ ಪತಿ ಸಂತೋಷ ಎಂದು ಗುರುತಿಸಲಾಗಿದೆ.
ಪೊಲೀಸರ ಮಾಹಿತಿ ಪ್ರಕಾರ, ಸುಗಂಧಿ ಅವರು 2023ರಿಂದ 2025ರ ಅವಧಿಯಲ್ಲಿ ಸದಸ್ಯರಿಂದ ಸಂಗ್ರಹಿಸಿದ ಸಾಲ ಮರುಪಾವತಿ ಹಣವನ್ನು ರಿಜಿಸ್ಟರ್‌ನಲ್ಲಿ ದಾಖಲಿಸಿದ್ದರೂ, ಅದನ್ನು ಒಕ್ಕೂಟದ ಬ್ಯಾಂಕ್ ಖಾತೆಗೆ ಜಮೆ ಮಾಡದೆ ದುರ್ಬಳಕೆ ಮಾಡಿಕೊಂಡಿರುವ ಆರೋಪವಿದೆ. ಅಲ್ಲದೆ, ವಿವಿಧ ಸಂಘಗಳ ಹೆಸರಿನಲ್ಲಿ ಒಕ್ಕೂಟದ ಚೆಕ್‌ಗಳಿಗೆ ಅಧ್ಯಕ್ಷರು ಮತ್ತು ಕಾರ್ಯದರ್ಶಿಯ ನಕಲಿ ಸಹಿ ಮಾಡಿ ಬ್ಯಾಂಕ್‌ನಿಂದ ಹಣ ಪಡೆದಿರುವುದಾಗಿಯೂ ಆರೋಪಿಸಲಾಗಿದೆ.

ಲೆಕ್ಕಪರಿಶೋಧನೆ ವೇಳೆ ವಂಚನೆ ಪತ್ತೆಯಾಗದಂತೆ ವಿವಿಧ ಸಾಲ ಖಾತೆ ಪುಸ್ತಕಗಳನ್ನು ಪ್ರತ್ಯೇಕವಾಗಿ ನಿರ್ವಹಿಸಿ, ಕಾರ್ಯಕಾರಿ ಸಮಿತಿಗೆ ಅನುಮಾನ ಬಾರದ ರೀತಿಯಲ್ಲಿ ದಾಖಲೆಗಳನ್ನು ಸೃಷ್ಟಿಸಿರುವುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಈ ಮೂಲಕ ಒಟ್ಟು ₹23 ಲಕ್ಷವನ್ನು ದುರುಪಯೋಗಪಡಿಸಿಕೊಂಡಿರುವುದಾಗಿ ಆರೋಪಿಸಲಾಗಿದೆ.
ಈ ಸಂಬಂಧ ಹಿರಿಯಡಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಉಡುಪಿ ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಬೆಳ್ಳಿಯಪ್ಪ ಕೆ.ಯು. ಅವರ ನಿರ್ದೇಶನ ಹಾಗೂ ವೃತ್ತ ನಿರೀಕ್ಷಕ ಗೋಪೀಕೃಷ್ಣ ಅವರ ಮಾರ್ಗದರ್ಶನದಲ್ಲಿ ಪಿಎಸ್‌ಐ ಪುನೀತ್ ಕುಮಾರ್ ಬಿ.ಇ. ಮತ್ತು ತನಿಖಾ ಪಿಎಸ್‌ಐ ವಿಠ್ಠಲ ಮಲವಡಕರ ನೇತೃತ್ವದ ತಂಡ ಜುಲೈ 6ರಂದು ಆರೋಪಿಗಳನ್ನು ಬಂಧಿಸಿದೆ.
ಪ್ರಾಥಮಿಕ ತನಿಖೆಯಲ್ಲಿ ಸುಗಂಧಿ ಮತ್ತು ಸಂತೋಷ ಅವರು ವಿವಿಧ ಸದಸ್ಯರ ಹೆಸರಿನಲ್ಲಿ ನಕಲಿ ಸಹಿ ಹಾಗೂ ದಾಖಲೆಗಳನ್ನು ಸೃಷ್ಟಿಸಿ ವಂಚನೆ ಎಸಗಿರುವುದು ಕಂಡುಬಂದಿದ್ದು, ಪ್ರಕರಣದ ತನಿಖೆಯನ್ನು ಪೊಲೀಸರು ಮುಂದುವರಿಸಿದ್ದಾರೆ.


