ಪದ್ಮಶ್ರೀ ಪುರಸ್ಕೃತ ‘ಬ್ರಿಡ್ಜ್‌ಮ್ಯಾನ್ ಆಫ್ ಇಂಡಿಯಾ’ ಡಾ. ಗಿರೀಶ್ ಭಾರದ್ವಾಜ್ ನಿಧನ …. !

ಸುಳ್ಯ: ಭಾರತದಾದ್ಯಂತ 125ಕ್ಕೂ ಹೆಚ್ಚು ತೂಗುಸೇತುವೆಗಳನ್ನು ನಿರ್ಮಿಸಿ ‘ಬ್ರಿಡ್ಜ್‌ಮ್ಯಾನ್ ಆಫ್ ಇಂಡಿಯಾ’ ಹಾಗೂ ‘ಸೇತುಬಂಧು’ ಎಂದೇ ಖ್ಯಾತಿ ಪಡೆದಿದ್ದ ಪದ್ಮಶ್ರೀ ಪುರಸ್ಕೃತ ಡಾ. ಗಿರೀಶ್ ಭಾರದ್ವಾಜ್ ಅವರು ಮಂಗಳವಾರ ಮುಂಜಾನೆ ಸುಳ್ಯದ ಕೆ.ವಿ.ಜಿ. ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 76 ವರ್ಷ ವಯಸ್ಸಾಗಿತ್ತು.

ಹೃದಯ ಸಂಬಂಧಿ ಸಮಸ್ಯೆಯಿಂದಾಗಿ ಕಳೆದ ಕೆಲ ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದರು.

1989ರಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಅರಂಬೂರಿನಲ್ಲಿ ಪಯಸ್ವಿನಿ ನದಿಗೆ ಅಡ್ಡಲಾಗಿ ತಮ್ಮ ಮೊದಲ ತೂಗುಸೇತುವೆಯನ್ನು ನಿರ್ಮಿಸುವ ಮೂಲಕ ಸೇತುನಿರ್ಮಾಣ ಕ್ಷೇತ್ರದಲ್ಲಿ ಹೊಸ ಅಧ್ಯಾಯ ಆರಂಭಿಸಿದ್ದ ಡಾ. ಭಾರದ್ವಾಜ್, ದೇಶದ ವಿವಿಧ ರಾಜ್ಯಗಳ ಗ್ರಾಮೀಣ ಪ್ರದೇಶಗಳಲ್ಲಿ 125ಕ್ಕೂ ಹೆಚ್ಚು ತೂಗುಸೇತುವೆಗಳನ್ನು ನಿರ್ಮಿಸಿದ್ದರು. ಕೇರಳದಲ್ಲಿ ಸುಮಾರು 30, ಆಂಧ್ರಪ್ರದೇಶ ಮತ್ತು ಒಡಿಶಾದಲ್ಲಿ ತಲಾ ಎರಡು ಹಾಗೂ ಕರ್ನಾಟಕದ ವಿವಿಧ ಭಾಗಗಳಲ್ಲಿ ಅನೇಕ ಸೇತುವೆಗಳನ್ನು ನಿರ್ಮಿಸಿ ಸಾವಿರಾರು ಗ್ರಾಮಸ್ಥರ ಸಂಚಾರಕ್ಕೆ ನೆರವಾದ ಸಾಧಕರಾಗಿದ್ದರು.

ಗ್ರಾಮೀಣ ಅಭಿವೃದ್ಧಿ ಮತ್ತು ಜನಸೇವೆಯಲ್ಲಿನ ಅವರ ಅಪೂರ್ವ ಕೊಡುಗೆಯನ್ನು ಗುರುತಿಸಿ ಭಾರತ ಸರ್ಕಾರವು 2017ರಲ್ಲಿ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿತ್ತು. ಅವರ ನಿಧನಕ್ಕೆ ವಿವಿಧ ಕ್ಷೇತ್ರಗಳ ಗಣ್ಯರು ಹಾಗೂ ಸಾರ್ವಜನಿಕರು ಸಂತಾಪ ವ್ಯಕ್ತಪಡಿಸಿದ್ದಾರೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!