ಉಳ್ಳಾಲ, ಜು. 7: ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಲ್ಲಿ ಬಿಎಲ್‌ಒಗಳು ಯಾವುದೇ ರಾಜಕೀಯ ಒತ್ತಡಕ್ಕೆ ಮಣಿದು ನಿಯಮಬಾಹಿರವಾಗಿ ನಡೆದುಕೊಳ್ಳಬಾರದು. ಅಕ್ರಮಗಳು ಕಂಡುಬಂದರೆ ಬಿಜೆಪಿ ಸಹಿಸುವುದಿಲ್ಲ ಎಂದು ಬಿಜೆಪಿ ಮಂಗಳೂರು ಮಂಡಲ ಅಧ್ಯಕ್ಷ ಜಗದೀಶ್ ಆಳ್ವ ಕುವ್ವೆತ್ತಬೈಲ್ ಎಚ್ಚರಿಸಿದರು.
ತೊಕ್ಕೊಟ್ಟಿನ ಪತ್ರಿಕಾಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆಲವು ಕಡೆ ಮನೆಮನೆಗೆ ತೆರಳಿ ಫಾರಂ ಭರ್ತಿ ಮಾಡುವ ಬದಲು ಪ್ರಾರ್ಥನಾ ಮಂದಿರಗಳಲ್ಲಿ ಸಾಮೂಹಿಕವಾಗಿ ಎಸ್‌ಐಆರ್ ಫಾರಂ ಭರ್ತಿ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಜಿಲ್ಲಾಡಳಿತ ಹಾಗೂ ಚುನಾವಣಾ ಆಯೋಗ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಮಂಗಳೂರು ಮಂಡಲ ಪ್ರಧಾನ ಕಾರ್ಯದರ್ಶಿ ಮೋಹನ್‌ರಾಜ್ ಕೆ.ಆರ್. ಮಾತನಾಡಿ, ಎಸ್‌ಐಆರ್ ಪ್ರಕ್ರಿಯೆ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ತಪ್ಪು ಮಾಹಿತಿ ಹರಡಲಾಗುತ್ತಿದೆ ಎಂದು ಆರೋಪಿಸಿದರು. ಸೂಕ್ಷ್ಮ ಮತಗಟ್ಟೆಗಳಲ್ಲಿ ಪೊಲೀಸ್ ಭದ್ರತೆಯೊಂದಿಗೆ ನಿಯಮಾನುಸಾರ ಎಸ್‌ಐಆರ್ ಪ್ರಕ್ರಿಯೆ ನಡೆಸಬೇಕು ಹಾಗೂ ವಾಸ್ತವ್ಯ ದೃಢೀಕರಣ ಪತ್ರ ವಿತರಣೆಯಲ್ಲಿ ಅಕ್ರಮ ನಡೆದಿರುವ ಬಗ್ಗೆ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು.
ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಮುಖಂಡರಾದ ಕೆ. ರವೀಂದ್ರ ಶೆಟ್ಟಿ ಉಳಿದೊಟ್ಟು, ಜೀವನ್ ಕುಮಾರ್ ತೊಕ್ಕೊಟ್ಟು, ಧನಲಕ್ಷ್ಮಿ ಗಟ್ಟಿ, ಪೂಜಾ ಪೈ ಹಾಗೂ ಜಯಶ್ರೀ ಕರ್ಕೇರ ಉಪಸ್ಥಿತರಿದ್ದರು.


