ಪುತ್ತೂರಿನಲ್ಲಿ ವಿದ್ಯುತ್ ಸಮಸ್ಯೆ: ಮೆಸ್ಕಾಂ ಅಧಿಕಾರಿಗಳಿಗೆ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಮನವಿ

ಪುತ್ತೂರು | ಜು. 9: ಪುತ್ತೂರು ನಗರ ಹಾಗೂ ಗ್ರಾಮಾಂತರ ಪ್ರದೇಶಗಳಲ್ಲಿ ಕಳೆದ ಕೆಲವು ದಿನಗಳಿಂದ ವಿದ್ಯುತ್ ಪೂರೈಕೆಯಲ್ಲಿ ಉಂಟಾಗಿರುವ ವ್ಯತ್ಯಯ ಮತ್ತು ಲೋ-ವೋಲ್ಟೇಜ್ ಸಮಸ್ಯೆಯಿಂದ ಸಾರ್ವಜನಿಕರು ತೀವ್ರ ಸಂಕಷ್ಟ ಅನುಭವಿಸುತ್ತಿರುವ ಹಿನ್ನೆಲೆಯಲ್ಲಿ, ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ನೇತೃತ್ವದಲ್ಲಿ ಮೆಸ್ಕಾಂ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

ಟ್ರಸ್ಟ್‌ನ ಪದಾಧಿಕಾರಿಗಳು ಮೆಸ್ಕಾಂ ಓ&ಎಂ-1 ಶಾಖಾಧಿಕಾರಿ ಹಾಗೂ ಕಾರ್ಯನಿರ್ವಾಹಕ ಇಂಜಿನಿಯರ್ (ವಿ) ಅವರನ್ನು ಭೇಟಿ ಮಾಡಿ, ಸಾರ್ವಜನಿಕರು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಚರ್ಚಿಸಿ ಮನವಿ ಪತ್ರ ಸಲ್ಲಿಸಿದರು.

ಮನವಿಯಲ್ಲಿ, ನಗರದ ಹಲವು ಪ್ರದೇಶಗಳಲ್ಲಿ ಲೋ-ವೋಲ್ಟೇಜ್ ಸಮಸ್ಯೆ ಹಾಗೂ ನಿರಂತರ ವಿದ್ಯುತ್ ವ್ಯತ್ಯಯದಿಂದ ಸಾರ್ವಜನಿಕರು, ವಿದ್ಯಾರ್ಥಿಗಳು ಹಾಗೂ ವ್ಯಾಪಾರಸ್ಥರು ತೊಂದರೆ ಅನುಭವಿಸುತ್ತಿದ್ದಾರೆ ಎಂದು ತಿಳಿಸಲಾಗಿದೆ. ಕುಡಿಯುವ ನೀರಿನ ಪೂರೈಕೆಯ ಮೇಲೂ ಇದರ ಪರಿಣಾಮ ಬೀರುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ ಎಂದು ಉಲ್ಲೇಖಿಸಲಾಗಿದೆ.

ಇದಲ್ಲದೆ, ಮೆಸ್ಕಾಂ ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿದರೂ ಸಮರ್ಪಕ ಪ್ರತಿಕ್ರಿಯೆ ದೊರೆಯುತ್ತಿಲ್ಲ ಎಂಬ ದೂರುಗಳು ಸಾರ್ವಜನಿಕರಿಂದ ವ್ಯಾಪಕವಾಗಿ ಕೇಳಿಬರುತ್ತಿವೆ ಎಂದು ಟ್ರಸ್ಟ್ ಆರೋಪಿಸಿದೆ.

ಮಳೆಗಾಲ ತೀವ್ರಗೊಳ್ಳುವ ಮುನ್ನವೇ ಇಲಾಖೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ಸರ್ಕಾರದ ಮಟ್ಟದಲ್ಲಿ ಒತ್ತಡ ಹೇರಿ ಹೆಚ್ಚುವರಿ ಸಿಬ್ಬಂದಿಯನ್ನು ನೇಮಿಸಬೇಕು ಹಾಗೂ ಗ್ರಾಹಕರ ಸಮಸ್ಯೆಗಳಿಗೆ ಸ್ಪಂದಿಸಲು ಒಂದಕ್ಕಿಂತ ಹೆಚ್ಚು ಸಹಾಯವಾಣಿ ಸಂಖ್ಯೆಗಳನ್ನು ಕಾರ್ಯಗತಗೊಳಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.

ಮುಂದಿನ ದಿನಗಳಲ್ಲಿಯೂ ಸಮಸ್ಯೆ ಪರಿಹಾರವಾಗದಿದ್ದರೆ ಸ್ಥಳೀಯಾಡಳಿತ, ಮೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯ ಹಾಗೂ ಲೈನ್‌ಮ್ಯಾನ್‌ಗಳ ಕೊರತೆಯನ್ನು ಖಂಡಿಸಿ ಸಾರ್ವಜನಿಕರ ಸಹಕಾರದೊಂದಿಗೆ ಪ್ರತಿಭಟನೆ ನಡೆಸಲಾಗುವುದು ಎಂದು ಟ್ರಸ್ಟ್ ಎಚ್ಚರಿಕೆ ನೀಡಿದೆ.

ಈ ಸಂದರ್ಭದಲ್ಲಿ ಟ್ರಸ್ಟ್ ಕಾರ್ಯದರ್ಶಿಗಳಾದ ಉಮೇಶ್ ಕೋಡಿಬೈಲು, ಅನಿಲ್ ತೆಂಕಿಲ, ಪ್ರಶಾಂತ್ ನೆಕ್ಕಿಲಾಡಿ ಹಾಗೂ ಖಜಾಂಚಿ ರೂಪೇಶ್ ನಾಯಕ್ ಉಪಸ್ಥಿತರಿದ್ದರು.

SHARE
Loading spinner

Leave a Reply

Your email address will not be published. Required fields are marked *

error: Content is protected !!