ಕಡಬ: ಹುಡುಗಿಯೊಬ್ಬಳ ಮದುವೆ ವಿಚಾರಕ್ಕೆ ಸಂಬಂಧಿಸಿದಂತೆ ಉಂಟಾದ ಗಲಾಟೆಯ ಹಿನ್ನೆಲೆಯಲ್ಲಿ ಕಡಬ ಪೊಲೀಸ್ ಠಾಣೆಯಲ್ಲಿ ಎರಡೂ ಕಡೆಯಿಂದ ದೂರು ಹಾಗೂ ಪ್ರತಿದೂರು ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಕಡಬ ನಿವಾಸಿ ಮೋನಿಷ್ (21) ಅವರು ನೀಡಿದ ದೂರಿನ ಪ್ರಕಾರ, ಜು.10ರಂದು ರಾತ್ರಿ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ವೇಳೆ ಕಡಬ ಗ್ರಾಮದ ಕಾಲೇಜು ರಸ್ತೆ ಜಂಕ್ಷನ್ ಬಳಿ ಶರತ್, ದೀಪಕ್ ಹಾಗೂ ವಿಶ್ವನಾಥ ಅವರು ತಡೆದು ನಿಲ್ಲಿಸಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿ ಜೀವ ಬೆದರಿಕೆ ಒಡ್ಡಿದ್ದಾರೆ ಎಂದು ಆರೋಪಿಸಲಾಗಿದೆ. ಈ ಸಂಬಂಧ ಕಡಬ ಪೊಲೀಸ್ ಠಾಣೆಯಲ್ಲಿ ಅ.ಕ್ರ.84/2026ರಡಿ ಭಾರತೀಯ ನ್ಯಾಯ ಸಂಹಿತೆಯ (BNS) ವಿವಿಧ ಕಲಂಗಳಡಿ ಪ್ರಕರಣ ದಾಖಲಾಗಿದೆ.

ಇದೇ ಘಟನೆಗೆ ಸಂಬಂಧಿಸಿದಂತೆ ಕುಟ್ರುಪ್ಪಾಡಿ ನಿವಾಸಿ ದೀಪಕ್ (33) ಅವರು ನೀಡಿದ ಪ್ರತಿದೂರಿನಲ್ಲಿ, ಮೋನಿಷ್ ತಡೆದು ನಿಲ್ಲಿಸಿ ಹಲ್ಲೆ ನಡೆಸಿ ಜೀವ ಬೆದರಿಕೆ ಒಡ್ಡಿದ್ದಾರೆ ಎಂದು ಆರೋಪಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಕಡಬ ಪೊಲೀಸ್ ಠಾಣೆಯಲ್ಲಿ ಅ.ಕ್ರ.85/2026ರಡಿ ಪ್ರತ್ಯೇಕ ಪ್ರಕರಣ ದಾಖಲಾಗಿದೆ.
ಎರಡೂ ಪ್ರಕರಣಗಳನ್ನು ದಾಖಲಿಸಿಕೊಂಡಿರುವ ಕಡಬ ಪೊಲೀಸರು ತನಿಖೆ ಕೈಗೊಂಡಿದ್ದು, ತನಿಖೆಯ ಫಲಿತಾಂಶದ ಆಧಾರದ ಮೇಲೆ ಮುಂದಿನ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಪೊಲೀಸ್ ಮೂಲಗಳು ತಿಳಿಸಿವೆ.

