ಕರ್ನಾಟಕ ರಾಜ್ಯ ಬಿಜೆಪಿಯ ಹಿರಿಯ ನಾಯಕ ನಿಧನ ಮಾಜಿ ಸಚಿವ ರಾಮಚಂದ್ರೇಗೌಡ ಇನ್ನಿಲ್ಲ

ಬೆಂಗಳೂರು, ಜು. 14: ರಾಜ್ಯ ಬಿಜೆಪಿಯ ಹಿರಿಯ ನಾಯಕ, ಮಾಜಿ ಸಚಿವ ಹಾಗೂ ಐದು ಬಾರಿ ವಿಧಾನ ಪರಿಷತ್ (ಎಂಎಲ್‌ಸಿ) ಸದಸ್ಯರಾಗಿದ್ದ ರಾಮಚಂದ್ರೇಗೌಡ ಅವರು ಇಂದು ಮುಂಜಾನೆ ನಿಧನರಾದರು. ಅವರಿಗೆ ವಯೋಸಹಜ ಅನಾರೋಗ್ಯ ಸೇರಿದಂತೆ ವಿವಿಧ ಆರೋಗ್ಯ ಸಮಸ್ಯೆಗಳು ಕಾಡುತ್ತಿದ್ದು, ಕಳೆದ ಒಂದು ತಿಂಗಳಿನಿಂದ ಬೆಂಗಳೂರಿನ ರಾಜಾಜಿನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದರು.

ಕರ್ನಾಟಕದಲ್ಲಿ ಭಾರತೀಯ ಜನತಾ ಪಕ್ಷವನ್ನು ತಳಮಟ್ಟದಿಂದ ಸಂಘಟಿಸಿ ಬೆಳೆಸುವಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರೊಂದಿಗೆ ಹೆಗಲಿಗೆ ಹೆಗಲು ನೀಡಿ ಕಾರ್ಯನಿರ್ವಹಿಸಿದ ಪ್ರಮುಖ ನಾಯಕರಲ್ಲಿ ರಾಮಚಂದ್ರೇಗೌಡ ಅವರು ಒಬ್ಬರಾಗಿದ್ದರು. ಪಕ್ಷದ ಆರಂಭಿಕ ದಿನಗಳಿಂದಲೇ ಸಂಘಟನಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು, ಬಿಜೆಪಿ ಬಲವರ್ಧನೆಗೆ ಮಹತ್ವದ ಕೊಡುಗೆ ನೀಡಿದ್ದರು.

ಆರ್‌ಎಸ್‌ಎಸ್‌ ಹಿನ್ನೆಲೆಯುಳ್ಳ ರಾಮಚಂದ್ರೇಗೌಡ ಅವರು 1953ರಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು ಸೇರುವ ಮೂಲಕ ಸಾರ್ವಜನಿಕ ಜೀವನ ಆರಂಭಿಸಿದ್ದರು. ಬಳಿಕ 1970ರಲ್ಲಿ ಸಕ್ರಿಯ ರಾಜಕೀಯ ಪ್ರವೇಶಿಸಿ, ರಾಜ್ಯ ರಾಜಕಾರಣದಲ್ಲಿ ತಮ್ಮದೇ ಆದ ಛಾಪು ಮೂಡಿಸಿದರು.

ರಾಜ್ಯ ರಾಜಕಾರಣದಲ್ಲಿ ಮೇಲ್ಮನೆಯ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದ ಅವರು, ಸತತ ಐದು ಬಾರಿ ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾಗುವ ಮೂಲಕ ಗಮನಾರ್ಹ ದಾಖಲೆ ನಿರ್ಮಿಸಿದ್ದರು. ಬಿ.ಎಸ್. ಯಡಿಯೂರಪ್ಪ ನೇತೃತ್ವದ ರಾಜ್ಯ ಸರ್ಕಾರದಲ್ಲಿ ವೈದ್ಯಕೀಯ ಶಿಕ್ಷಣ ಸಚಿವರಾಗಿ ಕಾರ್ಯನಿರ್ವಹಿಸಿ ಹಲವು ಮಹತ್ವದ ಜವಾಬ್ದಾರಿಗಳನ್ನು ಸಮರ್ಥವಾಗಿ ನಿಭಾಯಿಸಿದ್ದರು.

2010ರಲ್ಲಿ ವೈದ್ಯಕೀಯ ಕಾಲೇಜುಗಳ ನೇಮಕಾತಿ ಹಗರಣದ ಆರೋಪಗಳು ಕೇಳಿಬಂದ ಹಿನ್ನೆಲೆಯಲ್ಲಿ ನೈತಿಕ ಹೊಣೆ ಹೊತ್ತು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಬಳಿಕ ನಡೆದ ಸುದೀರ್ಘ ಕಾನೂನು ಹೋರಾಟದ ಅಂತ್ಯದಲ್ಲಿ ಹೈಕೋರ್ಟ್ ಅವರು ವಿರುದ್ಧದ ಆರೋಪಗಳಿಂದ ದೋಷಮುಕ್ತಗೊಳಿಸಿ ಸಂಪೂರ್ಣ ಕ್ಲೀನ್ ಚಿಟ್ ನೀಡಿತ್ತು.

ರಾಮಚಂದ್ರೇಗೌಡ ಅವರ ನಿಧನದಿಂದ ರಾಜ್ಯ ಬಿಜೆಪಿ ವಲಯಕ್ಕೆ ಹಾಗೂ ರಾಜಕೀಯ ಕ್ಷೇತ್ರಕ್ಕೆ ಅಪಾರ ನಷ್ಟ ಉಂಟಾಗಿದೆ. ಅವರ ಅಗಲಿಕೆಗೆ ವಿವಿಧ ರಾಜಕೀಯ ಪಕ್ಷಗಳ ನಾಯಕರು, ಗಣ್ಯರು ಹಾಗೂ ಕಾರ್ಯಕರ್ತರು ಸಂತಾಪ ಸೂಚಿಸಿದ್ದಾರೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!