ಬಿಡದಿಯ ಮಂಡಲಹಳ್ಳಿ ಗ್ರಾಮದ ರೈತರ ವಿರುದ್ಧ ಎಫ್‌ಐಆರ್ ದಾಖಲಿಸಿರುವ ಪೊಲೀಸ್ ಕ್ರಮವನ್ನು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ತೀವ್ರವಾಗಿ ಖಂಡಿಸಿದ್ದಾರೆ. “ನಾಡಿದ್ದು ಮಂಡಲಹಳ್ಳಿಗೆ ಹೋಗುತ್ತೇನೆ. ತಾಕತ್ತಿದ್ದರೆ ನನ್ನ ವಿರುದ್ಧವೂ ಎಫ್‌ಐಆರ್ ದಾಖಲಿಸಲಿ” ಎಂದು ಅವರು ರಾಜ್ಯ ಸರ್ಕಾರಕ್ಕೆ ಸವಾಲು ಹಾಕಿದರು.

ಸಂಬಂಧವಿಲ್ಲದವರ ದೂರಿನ ಆಧಾರದಲ್ಲಿ ರೈತರ ವಿರುದ್ಧ ಅನಗತ್ಯವಾಗಿ ಪ್ರಕರಣ ದಾಖಲಿಸಲಾಗಿದೆ. ಜಮೀನಿನ ಸರ್ವೆಗೆ ಅಧಿಕಾರಿಗಳು ಬಂದಾಗ ರೈತರು ಸಹಜವಾಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ ಎಂದು ಕುಮಾರಸ್ವಾಮಿ ಆರೋಪಿಸಿದರು. ರೈತರು ಶಾಂತಿಯುತವಾಗಿ ಹೋರಾಟ ಮುಂದುವರಿಸಬೇಕು ಎಂದು ಕರೆ ನೀಡಿದರು.

ಮಂಡಲಹಳ್ಳಿ ಗಲಾಟೆಗೆ ಸಂಬಂಧಿಸಿದಂತೆ ಪೊಲೀಸ್ ಇನ್ಸ್‌ಪೆಕ್ಟರ್ ಹಾಗೂ ಇನ್ನೋವಾ ಕಾರು ಚಾಲಕ ನೀಡಿದ ದೂರಿನ ಮೇರೆಗೆ ಎರಡು ಪ್ರತ್ಯೇಕ ಎಫ್‌ಐಆರ್‌ಗಳು ದಾಖಲಾಗಿವೆ. ಪ್ರಕರಣದಲ್ಲಿ ಕೊಲೆ ಯತ್ನ ಸೇರಿದಂತೆ 22ಕ್ಕೂ ಹೆಚ್ಚು ಸೆಕ್ಷನ್‌ಗಳನ್ನು ಸೇರಿಸಲಾಗಿದೆ.ಆದರೆ, ಈವರೆಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ರೈತರನ್ನು ಬಂಧಿಸಿಲ್ಲ ಎಂದು ಪೊಲೀಸ್ ಮೂಲಗಳು ತಿಳಿಸಿವೆ.


