ಬೆಂಗಳೂರು: ರಾಜ್ಯ ಹಾಗೂ ರಾಷ್ಟ್ರಮಟ್ಟದ ಕ್ರೀಡಾಕೂಟಗಳಲ್ಲಿ ಭಾಗವಹಿಸುವ ವಿದ್ಯಾರ್ಥಿಗಳಿಗೆ ಹಾಜರಾತಿಯಲ್ಲಿ ಶೇ.15 ಹಾಗೂ ಅಂತಾರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಪಾಲ್ಗೊಳ್ಳುವವರಿಗೆ ಶೇ.25ರಷ್ಟು ವಿನಾಯಿತಿ ನೀಡುವ ಸರ್ಕಾರಿ ಆದೇಶ ಜಾರಿಗೊಳಿಸಲಾಗಿದೆ ಎಂದು ಉಪ ಮುಖ್ಯಮಂತ್ರಿ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ. ಜಿ. ಪರಮೇಶ್ವರ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಾಜರಾತಿ ಕೊರತೆಯಿಂದ ಯಾವುದೇ ಕ್ರೀಡಾಪಟು ಪರೀಕ್ಷೆಯಿಂದ ವಂಚಿತರಾಗಬಾರದು ಎಂಬ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದರು.

ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ನೇಮಕಾತಿಯಲ್ಲಿ ಶೇ.2ರಷ್ಟು ಕ್ರೀಡಾ ಮೀಸಲಾತಿ ಕಲ್ಪಿಸಲಾಗಿದ್ದು, ಸುಮಾರು 2,000 ಹುದ್ದೆಗಳು ಕ್ರೀಡಾಪಟುಗಳಿಗೆ ಲಭ್ಯವಾಗಲಿವೆ. ಕಾಮನ್‌ವೆಲ್ತ್, ಏಷ್ಯನ್ ಹಾಗೂ ಏಷ್ಯನ್ ಪ್ಯಾರಾ ಗೇಮ್ಸ್‌ನಲ್ಲಿ ಕರ್ನಾಟಕವನ್ನು ಪ್ರತಿನಿಧಿಸುವ ಕ್ರೀಡಾಪಟುಗಳಿಗೆ ₹5 ಲಕ್ಷ ವಿಶೇಷ ಪ್ರೋತ್ಸಾಹಧನವನ್ನೂ ನೀಡಲಾಗುವುದು ಎಂದು ಹೇಳಿದರು.

ರಾಜ್ಯದ 32 ಸ್ಥಳಗಳಲ್ಲಿ ₹36 ಕೋಟಿ ವೆಚ್ಚದಲ್ಲಿ ಕ್ರೀಡಾಂಗಣಗಳ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದ್ದು, ಕಂಠೀರವ ಕ್ರೀಡಾಂಗಣವನ್ನು ಅಂತರರಾಷ್ಟ್ರೀಯ ಮಟ್ಟದ ಮೂಲಸೌಕರ್ಯಗಳೊಂದಿಗೆ ಪುನರ್ ಅಭಿವೃದ್ಧಿಪಡಿಸಲು ಸರ್ಕಾರ ಯೋಜನೆ ರೂಪಿಸಿದೆ ಎಂದರು.

ಕಳೆದ ಎರಡು ವರ್ಷಗಳಿಂದ ಬಾಕಿ ಉಳಿದಿರುವ ಏಕಲವ್ಯ, ಕ್ರೀಡಾರತ್ನ, ಕ್ರೀಡಾ ಪೋಷಕ ಹಾಗೂ ಜೀವಮಾನ ಸಾಧನೆ ಪ್ರಶಸ್ತಿಗಳನ್ನು ರಾಷ್ಟ್ರೀಯ ಕ್ರೀಡಾ ದಿನವಾದ ಆಗಸ್ಟ್ 29ರಂದು ಪ್ರದಾನ ಮಾಡಲಾಗುವುದು ಎಂದು ಡಾ. ಪರಮೇಶ್ವರ ತಿಳಿಸಿದ

