ಉಡುಪಿ : ವಂದೇ ಮಾತರಂ ಗೀತೆ ಸ್ವಾತಂತ್ರ್ಯ ಚಳುವಳಿಯಲ್ಲಿ ಬಹುಮುಖ್ಯ ಪಾತ್ರವಹಿಸಿದೆ. ಇದಕ್ಕೆ ರಾಷ್ಟ್ರಗೀತೆ ಸಮನಾದ ಪ್ರಾಮುಖ್ಯತೆ ಸಿಕ್ಕಿರುವುದು ಸಂತೋಷದ ವಿಚಾರ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಬುಧವಾರ ಎಂಜಿಎಂ ಕಾಲೇಜಿನ ಮುದ್ದಣ್ಣ ಮಂಟಪದಲ್ಲಿ ರಂಗಭೂಮಿ ಉಡುಪಿ ವತಿಯಿಂದ ಕೇಂದ್ರ ಸಂಗೀತ ನಾಟಕ ಅಕಾಡೆಮಿಯ ಸಹಕಾರದಲ್ಲಿ ವಂದೇ ಮಾತರಂನ 150 ರ ಸಂಭ್ರಮಾಚರಣೆ, ಕವಿ ಚಕ್ರವರ್ತಿ ಕಾಳಿದಾಸ ಜಯಂತಿ ಅಂಗವಾಗಿ ನಡೆದ ಯುವ ರಂಗೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.


ಇದೀಗ ದೇಶಾದ್ಯಂತ ಸುಮಾರು 20 ಲಕ್ಷ ಮಂದಿ ಸೇರುವ 4,000 ಕಲಾವಿದರ ಭಾಗವಹಿಸುವಿಕೆಯಲ್ಲಿ ಈ ಕಾರ್ಯಕ್ರಮ ಏಕಕಾಲದಲ್ಲಿ ನಡೆಯುತ್ತಿದೆ. ಉಡುಪಿಗೆ ಈ ಕಾರ್ಯಕ್ರಮವನ್ನು ತಂದ ರಂಗಭೂಮಿಗೆ ಅಭಿನಂದನೆಯನ್ನು ಸಲ್ಲಿಸಿದರು.ಮಣಿಪಾಲ ಮಾಹೆಯ ಸಹಕುಲಾಧಿಪತಿ, ಡಾ. ಎಚ್.ಎಸ್. ಬಲ್ಲಾಳ್ ಮಾತನಾಡಿ ಯುವ ಪೀಳಿಗೆಗೆ ನಮ್ಮ ಸಂಸ್ಕೃತಿ, ಕಲೆಯ ಬಗ್ಗೆ ಅರಿವು ಮೂಡಿಸಲು ರಂಗಭೂಮಿ ಶ್ರಮಿಸುತ್ತಿರುವುದು ಹೆಮ್ಮೆಯ ವಿಷಯ. ಇದು ಇಂದಿನ ಅಗತ್ಯತೆಯಾಗಿದೆ ಎಂದರು.

ಕರಾವಳಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಂ.ಎ.ಗಪೂರ್ ಮಾತನಾಡಿ, ವಂದೇ ಮಾತರಂ ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿ ದೇಶವನ್ನು ಒಗ್ಗೂಡಿಸುವಲ್ಲಿ ಪ್ರಮುಖ ಪಾತ್ರವಹಿಸಿದೆ ಎಂದರು.ವಂದೇ ಮಾತರಂ ಬಗ್ಗೆ ಪ್ರೊ. ಪವನ್ ಕಿರಣ್ ಕೆರೆ , ಮಹಾಕವಿ ಕಾಳಿದಾಸ ಜಯಂತಿ ಬಗ್ಗೆ ಶಾರದಾ ರೆಸಿಡೆನ್ಸಿಯಲ್ ಸ್ಕೂಲ್ ನ ನಿರ್ದೇಶಕ ವಿದ್ಯಾವಂತ ಆಚಾರ್ಯ ಹಾಗೂ ಚಿಂತಕ ಪ್ರಭಾಕರ್ ಜಿ.ಪಿ. ಮಾತನಾಡಿದರು.

ಸಮಾರಂಭದಲ್ಲಿ ಶಾಸಕರಾದ ಯಶಪಾಲ್ ಸುವರ್ಣ, ಕಿರಣ್ ಕುಮಾರ್ ಕೊಡ್ಡಿ, ಗುರುರಾಜ ಗಂಟಿಹೊಳೆ, ಅಂಬಲಪಾಡಿ ದೇವಸ್ಥಾನದ ಧರ್ಮದರ್ಶಿ ಡಾ. ನಿ.ಬೀ.ವಿಜಯ ಬಲ್ಲಾಳ, ರಂಗಭೂಮಿ ಉಡುಪಿ ಅಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ , ಪ್ರಧಾನ ಕಾರ್ಯದರ್ಶಿ ಪ್ರದೀಪ್ ಚಂದ್ರ ಕುತ್ಪಾಡಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ, ತುಳುಕೂಟ ಉಡುಪಿ ಅಧ್ಯಕ್ಷ ಬಿ.ಜಯಕರ ಶೆಟ್ಟಿ ಇಂದ್ರಾಳಿ, ಮಾಹೆಯ ಅಕಾಡೆಮಿ ಆಫ್ ಜನರಲ್ ಎಜುಕೇಶನ್ ಕಾರ್ಯದರ್ಶಿ ನಾರಾಯಣ ಸಭಾಹಿತ್, ಎಂಜಿಎಂ ಕಾಲೇಜಿನ ಪ್ರಾಂಶುಪಾಲರುಗಳಾದ ಡಾ. ಗಾಯತ್ರಿ ಗಿರಿಧರ್ ಪೈ , ಡಾ. ದೇವಿದಾಸ ನಾಯಕ್, ಡಾ.ವಿಶ್ವನಾಥ ಪೈ , ಡಾ. ಮಾಲತಿ ದೇವಿ , ರಂಗಭೂಮಿಯ ಪದಾಧಿಕಾರಿಗಳು, ಜಿಲ್ಲೆಯ ರಂಗ ತಂಡಗಳ, ವಿವಿಧ ಸಂಸ್ಥೆಯ ಮುಖ್ಯಸ್ಥರು ಉಪಸ್ಥಿತರಿದ್ದರು. ಲೇಖಕಿ ಪೂರ್ಣಿಮಾ ಸುರೇಶ್ ಕಾರ್ಯಕ್ರಮ ನಿರೂಪಿಸಿದರು. ಸಭಾ ಕಾರ್ಯಕ್ರಮದ ಬಳಿಕ ಎಂಜಿಎಂ ಕಾಲೇಜಿನ ವಿದ್ಯಾರ್ಥಿಗಳಿಂದ ಯುವ ರಂಗೋತ್ಸವ ಕಾರ್ಯಕ್ರಮದಡಿ ಸ್ವಾತಂತ್ರ್ಯ ಶರದಿ ನಾಟಕ ಪ್ರಸ್ತುತಗೊಂಡಿತು.
ಲೇಖಕರ ಬಗ್ಗೆ

