ಬೆಂಗಳೂರು, ಜು. 20: ರಾಜ್ಯದಲ್ಲಿ ಮುಂಗಾರು ಮತ್ತೆ ಚುರುಕುಗೊಂಡಿದ್ದು, ಜುಲೈ 20 ಮತ್ತು 21ರಂದು ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.

ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸಾಧಾರಣದಿಂದ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಉತ್ತರ ಮತ್ತು ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಗಂಟೆಗೆ 40ರಿಂದ 50 ಕಿ.ಮೀ. ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆ ಇದೆ.
ಬೆಳಗಾವಿ, ಧಾರವಾಡ, ಹಾವೇರಿ, ಗದಗ, ವಿಜಯನಗರ, ಬಳ್ಳಾರಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಹಾಗೂ ತುಮಕೂರು ಜಿಲ್ಲೆಗಳಲ್ಲಿ ಗುಡುಗು-ಮಿಂಚು ಸಹಿತ ಮಳೆಯ ಮುನ್ಸೂಚನೆ ನೀಡಲಾಗಿದೆ.

ಸಮುದ್ರದಲ್ಲಿ ಗಾಳಿ ವೇಗ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಮೀನುಗಾರರು ಸಮುದ್ರಕ್ಕೆ ತೆರಳುವ ಮುನ್ನ ಹವಾಮಾನ ಇಲಾಖೆ ಸೂಚನೆಗಳನ್ನು ಪಾಲಿಸುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ. ತಗ್ಗು ಪ್ರದೇಶಗಳಲ್ಲಿ ನೀರು ನಿಲ್ಲುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಹಾಗೂ ವಾಹನ ಸವಾರರು ಎಚ್ಚರಿಕೆಯಿಂದ ಸಂಚರಿಸುವಂತೆ ಸೂಚಿಸಲಾಗಿದೆ.


