ಉಡುಪಿ: 23 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಲಾರಿ ಚಾಲಕ ಬಂಧನ

ಉಡುಪಿ: 2002ರಲ್ಲಿ ನಡೆದ ರಸ್ತೆ ಅಪಘಾತ ಪ್ರಕರಣದಲ್ಲಿ ನ್ಯಾಯಾಲಯದಿಂದ ಶಿಕ್ಷೆಗೆ ಗುರಿಯಾಗಿ 23 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಲಾರಿ ಚಾಲಕನನ್ನು ಪಡುಬಿದ್ರಿ ಪೊಲೀಸರು ಮಹಾರಾಷ್ಟ್ರದಲ್ಲಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.


2002ರ ಸೆಪ್ಟೆಂಬರ್ 7ರಂದು ಬೆಳಿಗ್ಗೆ 8.30ರ ಸುಮಾರಿಗೆ ಪಡುಬಿದ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ಬಡಾ ಗ್ರಾಮದ ಮೂಳೂರು ಮಸೀದಿ ಸಮೀಪದ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಮಹಾರಾಷ್ಟ್ರ ನೋಂದಣಿಯ ಮಿನಿ ಗೂಡ್ಸ್ ಲಾರಿ (MH12FA6993)ಯನ್ನು ಚಾಲಕ ವಿಲಾಸ್ ಶಿಂಧೆ ಅತೀವೇಗ ಹಾಗೂ ಅಜಾಗರೂಕತೆಯಿಂದ ಚಲಾಯಿಸಿ ರಸ್ತೆಯ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಶಾಲಾ ಬಾಲಕನಿಗೆ ಡಿಕ್ಕಿ ಹೊಡೆದಿದ್ದ. ಪರಿಣಾಮ ಬಾಲಕ ಮೃತಪಟ್ಟಿದ್ದನು.


ಈ ಸಂಬಂಧ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಪೂರ್ಣಗೊಳಿಸಿ ಆರೋಪಿಯ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಲಾಗಿತ್ತು. ಬಳಿಕ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯವು ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ವಿಲಾಸ್ ಶಿಂಧೆಗೆ ಮೂರು ತಿಂಗಳ ಜೈಲು ಶಿಕ್ಷೆ ಹಾಗೂ ₹1,000 ದಂಡ ವಿಧಿಸಿತ್ತು.
ಆದರೆ ತೀರ್ಪಿನ ಬಳಿಕ ಆರೋಪಿ ತಲೆಮರೆಸಿಕೊಂಡಿದ್ದರಿಂದ ನ್ಯಾಯಾಲಯವು ಆತನ ವಿರುದ್ಧ ಎಲ್‌ಪಿಸಿ (LPC) ವಾರಂಟ್ ಹೊರಡಿಸಿತ್ತು.
ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಐಪಿಎಸ್ ಅವರ ನಿರ್ದೇಶನದಂತೆ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಸುಧಾಕರ ಎಸ್. ನಾಯಕ್, ಕಾರ್ಕಳ ಉಪವಿಭಾಗದ ಡಿವೈಎಸ್ಪಿ ಎಸ್. ವಿಜಯಪ್ರಸಾದ್ ಹಾಗೂ ಕಾಪು ವೃತ್ತ ನಿರೀಕ್ಷಕ ಅಜ್ಮತ್ ಅಲಿ ಅವರ ಮಾರ್ಗದರ್ಶನದಲ್ಲಿ ಪಡುಬಿದ್ರಿ ಠಾಣೆಯ ಪಿಎಸ್‌ಐ ಸಕ್ತಿವೇಲು ಹಾಗೂ ಅನಿಲ್ ಕುಮಾರ್ ಟಿ. ನಾಯಕ್ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿತು.


ಆರೋಪಿ ಮಹಾರಾಷ್ಟ್ರದ ಪುಣೆ ಪ್ರದೇಶದಲ್ಲಿ ಲಾರಿ ಚಾಲಕನಾಗಿ ಕೆಲಸ ಮಾಡುತ್ತಿರುವ ಬಗ್ಗೆ ಮಾಹಿತಿ ಸಂಗ್ರಹಿಸಿದ ಪೊಲೀಸರು, ಅಲ್ಲಿಗೆ ತೆರಳಿ ವಿಲಾಸ್ ಶಿಂಧೆಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!