ಬಂಟ್ವಾಳ: ಜುಲೈ 16ರಂದು ಬಿ.ಸಿ.ರೋಡು ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ನಡೆದ ಲಾವಣ್ಯ (21) ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಿಕಿತ್ಸೆ ಪಡೆಯುತ್ತಿದ್ದ ಆರೋಪಿ ಚೇತನ್ (22) ಅವರನ್ನು ಸೋಮವಾರ ಬಂಟ್ವಾಳ ನಗರ ಪೊಲೀಸರು ಅಧಿಕೃತವಾಗಿ ತಮ್ಮ ವಶಕ್ಕೆ ಪಡೆದಿದ್ದಾರೆ.


ಪೊಲೀಸರು ನೀಡಿದ ಮಾಹಿತಿಯಂತೆ, ಮಂಗಳವಾರ ಆರೋಪಿಯನ್ನು ಬಂಟ್ವಾಳ ನ್ಯಾಯಾಲಯದ ಮುಂದೆ ಹಾಜರುಪಡಿಸಿ ಹೆಚ್ಚಿನ ತನಿಖೆಗಾಗಿ ಪೊಲೀಸ್ ಕಸ್ಟಡಿಗೆ ನೀಡುವಂತೆ ಮನವಿ ಸಲ್ಲಿಸಲಾಯಿತು. ಮನವಿಯನ್ನು ಪರಿಗಣಿಸಿದ ನ್ಯಾಯಾಲಯವು ಆರೋಪಿಯನ್ನು ನಾಲ್ಕು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಿ ಆದೇಶಿಸಿದೆ.

ಪ್ರಕರಣದ ಆರೋಪದ ಪ್ರಕಾರ, ಬಂಟ್ವಾಳ ತಾಲೂಕಿನ ಉಳಿ ಗ್ರಾಮದ ಕಕ್ಯಪದವು ನಿವಾಸಿ ಲಾವಣ್ಯ ಅವರ ಮೇಲೆ ಬೆಳ್ತಂಗಡಿ ತಾಲೂಕಿನ ಓಡಿಲ್ನಾಳ ನಿವಾಸಿ ಚೇತನ್ ಮಾರಕಾಸ್ತ್ರದಿಂದ ಹಲ್ಲೆ ನಡೆಸಿ ಹತ್ಯೆಗೈದಿದ್ದಾನೆ ಎನ್ನಲಾಗಿದೆ. ಘಟನೆ ನಡೆದ ಬಳಿಕ ಆರೋಪಿ ಕಾರಿನಲ್ಲಿ ಸ್ಥಳದಿಂದ ಪರಾರಿಯಾಗಿದ್ದನು.
ಪ್ರಕರಣದ ತನಿಖೆ ನಡೆಸಿದ ಪೊಲೀಸರು ಘಟನೆಯ ಮರುದಿನ ಮಂಗಳೂರು ನಗರದ ಪಚ್ಚನಾಡಿ ಪ್ರದೇಶದಲ್ಲಿ ಆರೋಪಿಯನ್ನು ವಶಕ್ಕೆ ಪಡೆದಿದ್ದರು. ಈ ವೇಳೆ ವಿಷಕಾರಿ ಪದಾರ್ಥ (ಇಲಿಪಾಷಾಣ) ಸೇವಿಸಿದ್ದಾಗಿ ಆತ ತಿಳಿಸಿದ್ದ ಹಿನ್ನೆಲೆಯಲ್ಲಿ, ಮೊದಲಿಗೆ ಬಂಟ್ವಾಳ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿತ್ತು. ಬಳಿಕ ವೈದ್ಯರ ಸಲಹೆಯಂತೆ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು.

ಚಿಕಿತ್ಸೆ ಪೂರ್ಣಗೊಂಡ ಬಳಿಕ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಪ್ರಕರಣದ ಕುರಿತು ಹೆಚ್ಚಿನ ತನಿಖೆಯನ್ನು ಮುಂದುವರಿಸಿದ್ದಾರೆ.

