ಬೆಂಗಳೂರು:* ಶ್ರೀ ಜ್ಞಾನ ಮಂದಾರ ಎಜುಕೇಶನಲ್ ಮತ್ತು ಸಾಂಸ್ಕೃತಿಕ ಟ್ರಸ್ಟ್ನ ಬೆಳ್ಳಿ ಹಬ್ಬದ ಅಂಗವಾಗಿ ನೀಡಲಾಗುವ ಪ್ರತಿಷ್ಠಿತ ‘ಬಸವಶ್ರೀ’ ರಾಜ್ಯ ಪ್ರಶಸ್ತಿಗೆ ಹಿರಿಯ ಕ್ರೀಡಾ ಅಂಕಣಕಾರ ಎಸ್. ಜಗದೀಶ್ಚಂದ್ರ ಅಂಚನ್ ಸೂಟರ್ಪೇಟೆ ಅವರನ್ನು ಆಯ್ಕೆ ಮಾಡಲಾಗಿದೆ.
ಕಳೆದ 32 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಕ್ರೀಡಾ ಬರವಣಿಗೆ ಹಾಗೂ ಕ್ರೀಡಾ ಅಂಕಣಕಾರರಾಗಿ ಸೇವೆ ಸಲ್ಲಿಸುತ್ತಿರುವ ಜಗದೀಶ್ಚಂದ್ರ ಅಂಚನ್ ಅವರು ಇದುವರೆಗೆ 4,500ಕ್ಕೂ ಅಧಿಕ ಕ್ರೀಡಾ ಲೇಖನಗಳು ಮತ್ತು ಅಂಕಣ ಬರಹಗಳನ್ನು ರಚಿಸಿದ್ದಾರೆ. ಅವರ ಬರಹಗಳು ಜಿಲ್ಲೆ, ರಾಜ್ಯ ಹಾಗೂ ಅಂತರ್ರಾಜ್ಯ ಮಟ್ಟದ ವಿವಿಧ ಕನ್ನಡ ದಿನಪತ್ರಿಕೆಗಳು, ವಾರಪತ್ರಿಕೆಗಳು ಹಾಗೂ ಮಾಸಪತ್ರಿಕೆಗಳಲ್ಲಿ ಪ್ರಕಟಗೊಂಡಿವೆ.

ಕ್ರೀಡಾ ಕ್ಷೇತ್ರದ ಬೆಳವಣಿಗೆ, ಸಾಧನೆಗಳು ಹಾಗೂ ವಿವಿಧ ಕ್ರೀಡಾ ವಿಷಯಗಳ ಕುರಿತು ವಿಮರ್ಶಾತ್ಮಕ ಮತ್ತು ವಿಶ್ಲೇಷಣಾತ್ಮಕ ಬರಹಗಳ ಮೂಲಕ ಅಂಚನ್ ಅವರು ತಮ್ಮದೇ ಆದ ಛಾಪು ಮೂಡಿಸಿದ್ದಾರೆ. ಕನ್ನಡ ನಾಡಿಗೆ ಅವರು ಸಲ್ಲಿಸುತ್ತಿರುವ ಅನುಪಮ ಕ್ರೀಡಾ ಸಾಹಿತ್ಯ ಸೇವೆಯನ್ನು ಗುರುತಿಸಿ ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಟ್ರಸ್ಟ್ ತಿಳಿಸಿದೆ.
ಕ್ರೀಡಾ ಬರವಣಿಗೆಯ ಜೊತೆಗೆ ಸಾಹಿತ್ಯ ಕ್ಷೇತ್ರದಲ್ಲೂ ತೊಡಗಿಸಿಕೊಂಡಿರುವ ಅಂಚನ್ ಅವರು ಇತ್ತೀಚೆಗೆ ‘ತ್ಯಾಗಮಯಿ ಮೊಳಹಳ್ಳಿ’ ಕೃತಿಯನ್ನು ರಚಿಸಿ ಬಿಡುಗಡೆಗೊಳಿಸಿದ್ದಾರೆ. ಮೂರು ದಶಕಗಳಿಗೂ ಹೆಚ್ಚು ಕಾಲ ಮಾಧ್ಯಮ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆಗಾಗಿ ಅವರಿಗೆ ಈಗಾಗಲೇ ಹಲವು ರಾಜ್ಯ ಹಾಗೂ ಅಂತರ್ರಾಜ್ಯ ಮಟ್ಟದ ಪ್ರಶಸ್ತಿ-ಪುರಸ್ಕಾರಗಳು ಲಭಿಸಿವೆ.

ಬೆಂಗಳೂರಿನ ಜೆ.ಎಸ್.ಎಸ್. ಸಭಾಂಗಣದಲ್ಲಿ ಆಗಸ್ಟ್ 29ರಂದು ನಡೆಯಲಿರುವ ಶ್ರೀ ಜ್ಞಾನ ಮಂದಾರ ಎಜುಕೇಶನಲ್ ಮತ್ತು ಸಾಂಸ್ಕೃತಿಕ ಟ್ರಸ್ಟ್ನ ಬೆಳ್ಳಿ ಹಬ್ಬದ ಸಮಾರೋಪ ಸಮಾರಂಭದಲ್ಲಿ ಎಸ್. ಜಗದೀಶ್ಚಂದ್ರ ಅಂಚನ್ ಅವರಿಗೆ ‘ಬಸವಶ್ರೀ’ ರಾಜ್ಯ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಟ್ರಸ್ಟ್ನ ಕಾರ್ಯದರ್ಶಿ ಎಚ್. ಸೋಮಶೇಖರ್ ತಿಳಿಸಿದ್ದಾರೆ.

