ಹೆದ್ದಾರಿ ಬದಿ ನಿಲ್ಲಿಸಿದ್ದ ಟ್ಯಾಂಕರ್‌ಗಳಿಂದ ಡೀಸೆಲ್ ಕಳವು: ಇಬ್ಬರ ಬಂಧನ

ಉಪ್ಪಿನಂಗಡಿ: ಹೆದ್ದಾರಿ ಬದಿ ನಿಲ್ಲಿಸಿದ್ದ ವಾಹನಗಳ ಡೀಸೆಲ್ ಟ್ಯಾಂಕ್‌ನಿಂದ ಡೀಸೆಲ್ ಕಳವು ಮಾಡುತ್ತಿದ್ದ ಆರೋಪದ ಮೇಲೆ ಇಬ್ಬರನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದಾರೆ.

ಸೆ.3ರಂದು ರಾತ್ರಿ ಉಪ್ಪಿನಂಗಡಿ ಠಾಣೆಯ ಸಿಬ್ಬಂದಿ ಕಡಬ ಕೌಕ್ರಾಡಿ ಗ್ರಾಮದ ಅಲಂಪಾಡಿ ಕ್ರಾಸ್ ಬಳಿ ರೌಂಡ್ಸ್ ಕರ್ತವ್ಯದಲ್ಲಿದ್ದಾಗ, ಹೆದ್ದಾರಿ ಬದಿ ನಿಲ್ಲಿಸಿದ್ದ ಟ್ಯಾಂಕರ್‌ವೊಂದರ ಬಳಿ ಬೊಲೆರೋ ಪಿಕಪ್ ವಾಹನ ಹಾಗೂ ಮೂವರು ಅನುಮಾನಾಸ್ಪದ ವ್ಯಕ್ತಿಗಳು ಕಂಡುಬಂದಿದ್ದಾರೆ. ಪೊಲೀಸರು ಬರುತ್ತಿರುವುದನ್ನು ಗಮನಿಸಿ ಅವರು ಪರಾರಿಯಾಗಲು ಯತ್ನಿಸಿದಾಗ ಇಬ್ಬರನ್ನು ಹಿಡಿದು ವಿಚಾರಣೆ ನಡೆಸಲಾಗಿದೆ.

ಬಂಧಿತರನ್ನು ಮಂಡ್ಯ ಜಿಲ್ಲೆಯ ಮದ್ದೂರು ನಿವಾಸಿಗಳಾದ ಜೈಮುತ್ತಾ (23) ಮತ್ತು ಮುತ್ತು (28) ಎಂದು ಗುರುತಿಸಲಾಗಿದೆ. ವಿಚಾರಣೆ ವೇಳೆ ಹೆದ್ದಾರಿ ಬದಿ ನಿಲ್ಲಿಸಿದ್ದ ವಾಹನಗಳ ಡೀಸೆಲ್ ಟ್ಯಾಂಕ್‌ಗಳಿಂದ ಡೀಸೆಲ್ ಕಳವು ಮಾಡುತ್ತಿರುವುದಾಗಿ ಆರೋಪಿಗಳು ಒಪ್ಪಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಸ್ಥಳ ಪರಿಶೀಲನೆ ವೇಳೆ ಕ್ಯಾನ್‌ನಲ್ಲಿ ತುಂಬಿಸಲಾಗಿದ್ದ ಸುಮಾರು 20 ಲೀಟರ್ ಡೀಸೆಲ್, ಖಾಲಿ ಕ್ಯಾನ್‌ಗಳು, ಡೀಸೆಲ್ ಕಳವಿಗೆ ಬಳಸಲು ಉದ್ದೇಶಿಸಿದ್ದ ರಬ್ಬರ್ ಪೈಪ್ ಸೇರಿದಂತೆ ಕೃತ್ಯಕ್ಕೆ ಬಳಸಿದ ಪಿಕಪ್ ವಾಹನವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಈ ಕುರಿತು ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಅ.ಕ್ರ. 118/2026, ಬಿ.ಎನ್.ಎಸ್.ಎಸ್. 2023ರ ಕಲಂ 35(1)(ಡಿ) ಹಾಗೂ ಬಿ.ಎನ್.ಎಸ್. 2023ರ ಕಲಂ 303(2) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿದೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!