ಮೂಡುಬಿದಿರೆ: ಶ್ರೀ ಲಕ್ಷ್ಮಣಾನಂದ ವಿವಿಧೋದ್ದೇಶ ಸಹಕಾರ ಸಂಘದ 7ನೇ ಶಾಖೆ ಮೂಡುಬಿದಿರೆ ಸರಕಾರಿ ಆಸ್ಪತ್ರೆ ಬಳಿಯ ಪ್ರಭು ಕಾಂಪ್ಲೆಕ್ಸ್‌ನಲ್ಲಿ ಭಾನುವಾರ ಶುಭಾರಂಭಗೊಂಡಿತು.

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ ದೀಪ ಬೆಳಗಿಸಿ ಶಾಖೆಯನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಸಮಾಜದ ಅಭಿವೃದ್ಧಿಗೆ ಸಹಕಾರ ಸಂಘಗಳ ಕೊಡುಗೆ ಮಹತ್ವದ್ದಾಗಿದೆ. ಸಂಸ್ಥೆಯನ್ನು ಮುನ್ನಡೆಸುತ್ತಿರುವ ಕೃಷ್ಣ ಜೆ. ಪಾಲೇಮಾರ್ ಅವರ ಕಾರ್ಯ ಶ್ಲಾಘನೀಯ ಎಂದರು.
ಶಾಸಕ ಉಮಾನಾಥ ಎ. ಕೋಟ್ಯಾನ್ ಮಾತನಾಡಿ, ಮೂಡುಬಿದಿರೆಯಲ್ಲಿ ಶಾಖೆ ಆರಂಭಿಸಿರುವುದು ಸಂತಸದ ವಿಚಾರವಾಗಿದ್ದು, ಸಾರ್ವಜನಿಕರು ಸಂಸ್ಥೆಯ ಬೆಳವಣಿಗೆಗೆ ಸಹಕಾರ ನೀಡಬೇಕು ಎಂದರು.

ಸಂಘದ ಅಧ್ಯಕ್ಷ ಹಾಗೂ ಮಾಜಿ ಸಚಿವ ಕೃಷ್ಣ ಜೆ. ಪಾಲೇಮಾರ್ ಮಾತನಾಡಿ, ಹಲವು ವರ್ಷಗಳ ಕನಸು ಇದೀಗ ನನಸಾಗಿದೆ. ಮುಂದಿನ ದಿನಗಳಲ್ಲಿ ಕರಾವಳಿಯಾದ್ಯಂತ ಶಾಖೆಗಳನ್ನು ವಿಸ್ತರಿಸುವ ಉದ್ದೇಶ ಹೊಂದಿದ್ದು, ಸಾರ್ವಜನಿಕರ ಸಹಕಾರ ಅಗತ್ಯ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಮಾಜಿ ಸಚಿವ ಕೆ. ಅಭಯಚಂದ್ರ ಜೈನ್, ರಾಮಕ್ಷತ್ರೀಯ ಸಂಘದ ಅಧ್ಯಕ್ಷ ಪ್ರೇಮಾನಂದ ಕೆ.ಎಸ್., ಉದ್ಯಮಿ ಶ್ರೀಪತಿ ಭಟ್, ಸುದರ್ಶನ್ ಎಂ., ನ್ಯಾಯವಾದಿ ಬಾಹುಬಲಿ ಪ್ರಸಾದ್, ಸಿಇಒ ಚಂದನ್ ಕೋಟೆಕಾರ್ ಹಾಗೂ ಶಾಖಾ ವ್ಯವಸ್ಥಾಪಕಿ ಚಂದ್ರಿಕಾ ಉಪಸ್ಥಿತರಿದ್ದರು.


