ಬೆಳ್ತಂಗಡಿ:* ರಾಜ್ಯದಾದ್ಯಂತ ಗಮನ ಸೆಳೆದಿರುವ ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರು ತನಿಖೆಗೆ ರಾಜ್ಯ ಸರ್ಕಾರ ವಿಶೇಷ ತನಿಖಾ ತಂಡ (ಎಸ್ಐಟಿ) ರಚಿಸಿದೆ. ಸುಪ್ರೀಂ ಕೋರ್ಟ್ನ ಸೂಚನೆಯ ಹಿನ್ನೆಲೆಯಲ್ಲಿ ಪ್ರಕರಣದ ತನಿಖೆಯನ್ನು ಮುಂದುವರಿಸುವ ನಿಟ್ಟಿನಲ್ಲಿ ಸರ್ಕಾರ ಈ ಕ್ರಮ ಕೈಗೊಂಡಿದೆ.

ಪೊಲೀಸ್ ಮಹಾ ನಿರೀಕ್ಷಕ ಎನ್. ಶಶಿಕುಮಾರ್ ಅವರನ್ನು ಎಸ್ಐಟಿಯ ಮುಖ್ಯಸ್ಥರನ್ನಾಗಿ ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಎಸ್ಐಟಿ ತಂಡದಲ್ಲಿ ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ, ರಾಜ್ಯ ಗುಪ್ತವಾರ್ತೆಯ ಪೊಲೀಸ್ ಅಧೀಕ್ಷಕಿ ನಿಶಾ ಜೇಮ್ಸ್, ಬೆಂಗಳೂರು ಸಿಐಡಿ ಪೊಲೀಸ್ ಅಧೀಕ್ಷಕ ಲೋಕೇಶ್ ಜಲಸಾಗರ್ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕ ವೆಂಕಟೇಶ್ ಪ್ರಸನ್ನ ಅವರನ್ನು ಸದಸ್ಯರನ್ನಾಗಿ ನೇಮಿಸಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದ ಲಭ್ಯವಿರುವ ದಾಖಲೆಗಳು, ಸಾಕ್ಷ್ಯಾಧಾರಗಳು ಹಾಗೂ ಈ ಹಿಂದೆ ನಡೆದ ತನಿಖೆಯ ವಿವಿಧ ಅಂಶಗಳನ್ನು ಎಸ್ಐಟಿ ಪರಿಶೀಲಿಸಲಿದೆ. ಅಗತ್ಯವಿರುವ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸುವುದು, ಸಂಬಂಧಿತ ವ್ಯಕ್ತಿಗಳ ಹೇಳಿಕೆಗಳನ್ನು ದಾಖಲಿಸುವುದು ಸೇರಿದಂತೆ ತನಿಖೆಯನ್ನು ಮುಂದುವರಿಸುವ ಸಾಧ್ಯತೆಯಿದೆ.

ಸೌಜನ್ಯ ಪ್ರಕರಣದ ಮರು ತನಿಖೆಗೆ ವಿಶೇಷ ತನಿಖಾ ತಂಡ ರಚನೆಯಾಗಿರುವುದು ಪ್ರಕರಣದ ಮುಂದಿನ ಬೆಳವಣಿಗೆಗಳ ಬಗ್ಗೆ ಕುತೂಹಲ ಮೂಡಿಸಿದೆ.


