ಕರ್ನಾಟಕದ ನೂತನ ರಾಜ್ಯಪಾಲರಾಗಿ ಸುಧಾ ಯಾದವ್ ಪ್ರಮಾಣವಚನ ಸ್ವೀಕಾರ

ಬೆಂಗಳೂರು: ಕರ್ನಾಟಕದ ನೂತನ ರಾಜ್ಯಪಾಲರಾಗಿ ಸುಧಾ ಯಾದವ್ ಅವರು ಶುಕ್ರವಾರ ಬೆಂಗಳೂರಿನ ಲೋಕಭವನದಲ್ಲಿ ಪ್ರಮಾಣವಚನ ಸ್ವೀಕರಿಸಿದರು. ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಅವರು ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣವಚನ ಬೋಧಿಸಿದರು.


ನಿರ್ಗಮಿತ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರ ಅಧಿಕಾರಾವಧಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸುಧಾ ಯಾದವ್ ಅವರನ್ನು ನೇಮಕ ಮಾಡಿದ್ದರು. ಈ ಮೂಲಕ ಅವರು ಕರ್ನಾಟಕದ ರಾಜ್ಯಪಾಲ ಹುದ್ದೆ ಅಲಂಕರಿಸಿದ ಎರಡನೇ ಮಹಿಳೆಯಾಗಿದ್ದಾರೆ. ಇದಕ್ಕೂ ಮೊದಲು ವಿ.ಎಸ್. ರಮಾದೇವಿ ಅವರು 1999ರಿಂದ 2002ರವರೆಗೆ ರಾಜ್ಯಪಾಲರಾಗಿದ್ದರು.

1999ರ ಕಾರ್ಗಿಲ್ ಯುದ್ಧದಲ್ಲಿ ಬಿಎಸ್‌ಎಫ್ ಅಧಿಕಾರಿಯಾಗಿದ್ದ ಪತಿ ಸುಖಬೀರ್ ಸಿಂಗ್ ಯಾದವ್ ಅವರನ್ನು ಕಳೆದುಕೊಂಡ ಬಳಿಕ ಸಾರ್ವಜನಿಕ ಜೀವನ ಪ್ರವೇಶಿಸಿದ ಸುಧಾ ಯಾದವ್, ಹರಿಯಾಣದ ಮಹೇಂದ್ರಗಢ ಕ್ಷೇತ್ರದಿಂದ ಲೋಕಸಭೆಗೆ ಆಯ್ಕೆಯಾಗಿ 2004ರವರೆಗೆ ಸಂಸದೆಯಾಗಿ ಕಾರ್ಯನಿರ್ವಹಿಸಿದ್ದರು. ಬಿಜೆಪಿಯ ವಿವಿಧ ಸಂಘಟನಾತ್ಮಕ ಹುದ್ದೆಗಳನ್ನು ನಿರ್ವಹಿಸಿರುವ ಅವರು, ರಾಷ್ಟ್ರೀಯ ಹಿಂದುಳಿದ ವರ್ಗಗಳ ಆಯೋಗದ ಸದಸ್ಯೆಯಾಗಿಯೂ ಸೇವೆ ಸಲ್ಲಿಸಿದ್ದಾರೆ.

ಪ್ರಮಾಣವಚನ ಸಮಾರಂಭದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಉಪಮುಖ್ಯಮಂತ್ರಿ ಜಿ. ಪರಮೇಶ್ವರ, ನಿರ್ಗಮಿತ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್, ಸಚಿವರು, ಶಾಸಕರು, ಸಂಸದರು, ಹೈಕೋರ್ಟ್ ನ್ಯಾಯಮೂರ್ತಿಗಳು ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

SHARE
Loading spinner

Leave a Reply

Your email address will not be published. Required fields are marked *

error: Content is protected !!