ನ. 5ರೊಳಗೆ ಸುಸಜ್ಜಿತ ವ್ಯವಸ್ಥೆಯೊಂದಿಗೆ ಜಿಲ್ಲಾಸ್ಪತ್ರೆ ಆರಂಭಿಸಿ

ಹಳೆಯ ಆಸ್ಪತ್ರೆಯ ಪರಿಕರಗಳ ಅಳವಡಿಕೆಗೆ ಕರವೇ ಆಕ್ಷೇಪ; ಪ್ರವೀಣ್ ಶೆಟ್ಟಿ ಎಚ್ಚರಿಕೆ

ಉಡುಪಿ: ಅಜ್ಜರಕಾಡಿನ ನೂತನ ಜಿಲ್ಲಾ ಆಸ್ಪತ್ರೆಯನ್ನು ಸುಸಜ್ಜಿತ ವೈದ್ಯಕೀಯ ಸೌಲಭ್ಯಗಳೊಂದಿಗೆ ಆರಂಭಿಸಿ, ರೋಗಿಗಳಿಗೆ ಚಿಕಿತ್ಸೆ ನೀಡುವ ಪ್ರಕ್ರಿಯೆ ಆರಂಭಿಸಬೇಕು. ಜಿಲ್ಲಾಡಳಿತ ನೀಡಿರುವ ಭರವಸೆಯಂತೆ ನವೆಂಬರ್ 5ರೊಳಗೆ ಆಸ್ಪತ್ರೆ ಕಾರ್ಯಾರಂಭ ಮಾಡಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆಯ (ಪ್ರವೀಣ್ ಶೆಟ್ಟಿ ಬಣ) ರಾಜ್ಯಾಧ್ಯಕ್ಷ ಪ್ರವೀಣ್ ಶೆಟ್ಟಿ ಆಗ್ರಹಿಸಿದರು.


ಈ ಕುರಿತು ಉಡುಪಿಯಲ್ಲಿ ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲಾಸ್ಪತ್ರೆಯನ್ನು ಆರಂಭಿಸುವಂತೆ ಆಗ್ರಹಿಸಿ ಕರವೇ ನಡೆಸಿದ ಹೋರಾಟದ ಫಲವಾಗಿ ಜಿಲ್ಲಾಡಳಿತ ನವೆಂಬರ್ 5ರೊಳಗೆ ಆಸ್ಪತ್ರೆ ಆರಂಭಿಸುವ ಭರವಸೆ ನೀಡಿದೆ. ಆದರೆ, ತರಾತುರಿಯಲ್ಲಿ ಆಸ್ಪತ್ರೆ ಆರಂಭಿಸುವ ಉದ್ದೇಶದಿಂದ ಹಳೆಯ ಜಿಲ್ಲಾಸ್ಪತ್ರೆಯ ಪರಿಕರಗಳನ್ನು ನೂತನ ಕಟ್ಟಡಕ್ಕೆ ತಂದು ಅಳವಡಿಸುವ ಕೆಲಸ ನಡೆಯುತ್ತಿದೆ. ಇದು ಸಂಘಟನೆಯ ಬೇಡಿಕೆಗೆ ವಿರುದ್ಧವಾಗಿದ್ದು, ಈ ಕ್ರಮವನ್ನು ಖಂಡಿಸುತ್ತೇವೆ ಎಂದರು.


ನೂತನ ಜಿಲ್ಲಾಸ್ಪತ್ರೆಯನ್ನು ಅಗತ್ಯ ವೈದ್ಯಕೀಯ ಉಪಕರಣಗಳು ಹಾಗೂ ಸುಸಜ್ಜಿತ ಸೌಲಭ್ಯಗಳೊಂದಿಗೆ ಆರಂಭಿಸಬೇಕು ಎಂಬುದು ಸಂಘಟನೆಯ ಪ್ರಮುಖ ಬೇಡಿಕೆಯಾಗಿದೆ. ಕೇವಲ ಕಟ್ಟಡವನ್ನು ಸಿದ್ಧಪಡಿಸಿ, ಹಳೆಯ ಪರಿಕರಗಳನ್ನು ಸ್ಥಳಾಂತರಿಸುವ ಮೂಲಕ ಆಸ್ಪತ್ರೆ ಆರಂಭಿಸಿದರೆ ರೋಗಿಗಳಿಗೆ ಗುಣಮಟ್ಟದ ಚಿಕಿತ್ಸೆ ದೊರೆಯುವುದಿಲ್ಲ. ಆದ್ದರಿಂದ ಜಿಲ್ಲಾಡಳಿತ ಹಾಗೂ ಸಂಬಂಧಪಟ್ಟ ಇಲಾಖೆಯು ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ, ನಿಗದಿತ ಗಡುವಿನೊಳಗೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಬೇಕು ಎಂದು ಒತ್ತಾಯಿಸಿದರು.


ಬಡ ರೋಗಿಗಳ ಆರೋಗ್ಯದ ವಿಚಾರದಲ್ಲಿ ಜಿಲ್ಲಾಡಳಿತ ಅಥವಾ ಸಂಬಂಧಪಟ್ಟ ಇಲಾಖೆ ನಿರ್ಲಕ್ಷ್ಯ ವಹಿಸಿದರೆ, ಈ ಹಿಂದೆ ಎಚ್ಚರಿಸಿದಂತೆ ಸಂಘಟನೆಯ ವತಿಯಿಂದ ಉಗ್ರ ಹೋರಾಟ ನಡೆಸಲಾಗುವುದು ಎಂದು ಪ್ರವೀಣ್ ಶೆಟ್ಟಿ ಎಚ್ಚರಿಕೆ ನೀಡಿದರು.
ಸುದ್ದಿಗೋಷ್ಠಿಯಲ್ಲಿ ಕರವೇ ರಾಜ್ಯ ಸಂಚಾಲಕ ಪ್ರಸನ್ನ ಶೆಟ್ಟಿ, ಜಿಲ್ಲಾ ಗೌರವಾಧ್ಯಕ್ಷ ಅನ್ಸರ್ ಅಹಮದ್ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.

SHARE
Loading spinner

Leave a Reply

Your email address will not be published. Required fields are marked *

error: Content is protected !!