ಬೆಳ್ತಂಗಡಿ: ಪರಿಶಿಷ್ಟ ಜಾತಿಗೆ ಸೇರಿದ ಯುವತಿಯೊಬ್ಬರಿಗೆ ಸಾರ್ವಜನಿಕ ಸ್ಥಳದಲ್ಲಿ ಅಸಭ್ಯವಾಗಿ ವರ್ತಿಸಿ, ಹಣದ ಆಮಿಷವೊಡ್ಡಿ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ 61 ವರ್ಷದ ವ್ಯಕ್ತಿಯ ವಿರುದ್ಧ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಳ್ತಂಗಡಿ ತಾಲೂಕಿನ ವೇಣೂರು ನಿವಾಸಿ ಸೈಯ್ಯದ್ ಮಹಮ್ಮದ್ ಇಸಾಕ್ ಎಂಬಾತನೇ ಆರೋಪಿಯಾಗಿದ್ದಾನೆ. ದಿನಾಂಕ 24-10-2026ರಂದು ಮಧ್ಯಾಹ್ನ ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಯುವತಿ ಕೆಲಸ ಮಾಡುತ್ತಿದ್ದ ಸ್ಥಳಕ್ಕೆ ದ್ವಿಚಕ್ರ ವಾಹನದಲ್ಲಿ ಬಂದ ಆರೋಪಿಯು, ಯುವತಿಯೊಂದಿಗೆ ಸಾರ್ವಜನಿಕ ಸ್ಥಳದಲ್ಲಿ ಅಸಭ್ಯವಾಗಿ ಮಾತನಾಡಿ, ಹಣದ ಆಮಿಷವೊಡ್ಡಿ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಈ ಸಂಬಂಧ ವೇಣೂರು ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 73/2026ರ ಅಡಿಯಲ್ಲಿ ಭಾರತೀಯ ನ್ಯಾಯ ಸಂಹಿತೆ 2023ರ ಕಲಂ 75(1)(ii), 75(1)(iv) ಮತ್ತು 79 ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯ ಸಂಬಂಧಿತ ಕಲಂಗಳಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ಪ್ರಕರಣದ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದು, ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಪ್ರಕರಣದ ಕುರಿತು ಪೊಲೀಸರು ಮುಂದಿನ ತನಿಖೆ ನಡೆಸುತ್ತಿದ್ದಾರೆ.

