ಉಡುಪಿ: ಪೆರ್ಡೂರು ಪ್ರದೀಪ್ ಪೂಜಾರಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಮಧ್ಯಪ್ರದೇಶದ ಭೋಪಾಲ್ನಿಂದ ಇಬ್ಬರನ್ನು ವಶಕ್ಕೆ ಪಡೆದಿದ್ದರೆ, ಕಾರ್ಕಳದಲ್ಲಿ ಉಳಿದ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.

ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದ ತನಿಖೆಗಾಗಿ ಉಡುಪಿ ಉಪವಿಭಾಗದ ಡಿವೈಎಸ್ಪಿ ಬೆಳ್ಳಿಯಪ್ಪ ಕೆ.ಯು. ಅವರ ಮಾರ್ಗದರ್ಶನದಲ್ಲಿ ಮಣಿಪಾಲ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ಮಹೇಶ್ ಪ್ರಸಾದ್ ನೇತೃತ್ವದಲ್ಲಿ ವಿಶೇಷ ಪೊಲೀಸ್ ತಂಡ ರಚಿಸಲಾಗಿತ್ತು.
ಈ ತಂಡ ನವೆಂಬರ್ 3ರಂದು ಮಧ್ಯಪ್ರದೇಶಕ್ಕೆ ತೆರಳಿ ಭೋಪಾಲ್ ರೈಲ್ವೆ ನಿಲ್ದಾಣದ ಸಮೀಪ ಉತ್ತರ ಪ್ರದೇಶದ ಕುಶಿನಗರ ಜಿಲ್ಲೆಯ ಪವನ್ ಕುಮಾರ್ (24) ಹಾಗೂ ಓರ್ವ ಅಪ್ರಾಪ್ತ ಬಾಲಕನನ್ನು ವಶಕ್ಕೆ ಪಡೆದಿತ್ತು.
ನಂತರ ನವೆಂಬರ್ 5ರಂದು ಪವನ್ ಕುಮಾರ್ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ. ಅಪ್ರಾಪ್ತ ಬಾಲಕನನ್ನು ಸುರಕ್ಷತೆಯ ದೃಷ್ಟಿಯಿಂದ ಪರಿವೀಕ್ಷಣಾಲಯದಲ್ಲಿ ಇರಿಸಲಾಗಿದೆ.

ಇನ್ನು ಪ್ರಕರಣದ ಉಳಿದ ಆರೋಪಿಗಳಾದ ಕಾರ್ಕಳ ತಾಲೂಕಿನ ವರಂಗ ಗ್ರಾಮದ ಮುನಿಯಾಲು ನಿವಾಸಿಗಳಾದ ಆದರ್ಶ ಕಾಂಚನ್ ಹಾಗೂ ದಿನೇಶ್ ಶೆಟ್ಟಿ ಅವರನ್ನು ನವೆಂಬರ್ 7ರ ರಾತ್ರಿ ಕಾರ್ಕಳದಲ್ಲಿ ಹಿರಿಯಡ್ಕ ಪೊಲೀಸ್ ಠಾಣೆಯ ಪ್ರಭಾರ ಪೊಲೀಸ್ ಉಪನಿರೀಕ್ಷಕಿ ಮುಕ್ತಾಬಾಯಿ ಹಾಗೂ ಸಿಬ್ಬಂದಿ ಬಂಧಿಸಿದ್ದಾರೆ.
ಬಳಿಕ ಇಬ್ಬರು ಆರೋಪಿಗಳನ್ನು ಪ್ರಕರಣದ ತನಿಖಾಧಿಕಾರಿ ಹಾಗೂ ಉಡುಪಿ ನಗರ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ಮಹೇಶ್ ಪ್ರಸಾದ್ ಅವರ ಮುಂದೆ ಹಾಜರುಪಡಿಸಲಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮುಂದಿನ ತನಿಖೆಯನ್ನು ಮುಂದುವರಿಸಿದ್ದಾರೆ.

