ಬಸವಣ್ಣನವರ ಕುರಿತು ಅವಹೇಳನಕಾರಿ ಹೇಳಿಕೆ: ಕ್ರಮಕ್ಕೆ ಆಗ್ರಹಿಸಿ ಸಂಗಮೇಶ ಎನ್ ಜವಾದಿ ಮನವಿ

ಚಿಟಗುಪ್ಪಾ: ವಿಶ್ವಗುರು ಬಸವಣ್ಣನವರು ಹಾಗೂ ಬಸವಾದಿ ಶರಣರ ಕುರಿತು ಸಾಮಾಜಿಕ ಜಾಲತಾಣಗಳು ಮತ್ತು ಕೆಲವು ಖಾಸಗಿ ಸುದ್ದಿ ವಾಹಿನಿಗಳಲ್ಲಿ ನಿರಂತರವಾಗಿ ಅವಹೇಳನಕಾರಿ, ಹಗುರ ಹಾಗೂ ಆಧಾರರಹಿತ ಹೇಳಿಕೆಗಳನ್ನು ನೀಡುತ್ತಿರುವವರ ವಿರುದ್ಧ ಕಾನೂನುಬದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ, ಮಾನ್ಯ ಮುಖ್ಯಮಂತ್ರಿಗಳು, ರಾಜ್ಯದ ಗೃಹ ಸಚಿವರು ಹಾಗೂ ಪೊಲೀಸ್ ಮಹಾನಿರ್ದೇಶಕರಿಗೆ ತಹಶೀಲ್ದಾರ್ ಮೂಲಕ ಮನವಿ ಸಲ್ಲಿಸಲಾಯಿತು.

ಫೇಸ್ಬುಕ್, ವಾಟ್ಸಾಪ್, ಇನ್‌ಸ್ಟಾಗ್ರಾಮ್ ಸೇರಿದಂತೆ ವಿವಿಧ ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ಕೆಲವು ಖಾಸಗಿ ಸುದ್ದಿ ವಾಹಿನಿಗಳಲ್ಲಿ ವಿಶ್ವಗುರು ಬಸವಣ್ಣನವರು, ಬಸವಾದಿ ಶರಣರು ಮತ್ತು ವಚನ ಸಾಹಿತ್ಯದ ಕುರಿತು ಅವಹೇಳನಕಾರಿ ಹಾಗೂ ಆಧಾರರಹಿತ ಹೇಳಿಕೆಗಳು ಪ್ರಸಾರವಾಗುತ್ತಿರುವುದು ಸಮಾಜದ ಸ್ವಾಸ್ಥ್ಯಕ್ಕೆ ಧಕ್ಕೆ ತರುವ ಸಾಧ್ಯತೆಯಿದೆ ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ.

ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಗೌರವಿಸುವುದರ ಜೊತೆಗೆ, ವ್ಯಕ್ತಿ ಅಥವಾ ಸಮುದಾಯದ ವಿರುದ್ಧ ದ್ವೇಷ, ಅಶಾಂತಿ ಹಾಗೂ ಸಾಮಾಜಿಕ ಸಂಘರ್ಷಕ್ಕೆ ಕಾರಣವಾಗುವಂತಹ ಹೇಳಿಕೆಗಳ ಕುರಿತು ಕಾನೂನುಬದ್ಧವಾಗಿ ಪರಿಶೀಲಿಸಿ, ತಪ್ಪಿತಸ್ಥರು ಕಂಡುಬಂದಲ್ಲಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.

ಈ ಸಂದರ್ಭದಲ್ಲಿ ಮಾತನಾಡಿದ ಸಾಹಿತ್ಯಿ, ಪರಿಸರವಾದಿ ಹಾಗೂ ಹೋರಾಟಗಾರ, ಬಸವ ತತ್ವ ಅನುಯಾಯಿ ಸಂಗಮೇಶ ಎನ್. ಜವಾದಿ, “ಬಸವಣ್ಣನವರು ಕೇವಲ ಧಾರ್ಮಿಕ ವ್ಯಕ್ತಿಯಲ್ಲ. ಸಮಾನತೆ, ಕಾಯಕ, ದಾಸೋಹ, ಸಾಮಾಜಿಕ ನ್ಯಾಯ ಹಾಗೂ ಮಾನವೀಯ ಮೌಲ್ಯಗಳಿಗಾಗಿ ಶ್ರಮಿಸಿದ ಮಹಾನ್ ಚಿಂತಕರು. ಅವರ ಕುರಿತು ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ಕೆಲವು ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಗುರವಾಗಿ ಮಾತನಾಡುತ್ತಿರುವುದನ್ನು ಕಾಣುತ್ತಿದ್ದೇವೆ. ಇಂತಹ ಹೇಳಿಕೆಗಳು ಸಮಾಜದಲ್ಲಿ ಅನಗತ್ಯ ಭಿನ್ನಾಭಿಪ್ರಾಯ ಹಾಗೂ ಸಂಘರ್ಷಕ್ಕೆ ಎಡೆಮಾಡಿಕೊಡುವ ಸಾಧ್ಯತೆಯಿದೆ” ಎಂದು ಹೇಳಿದರು.

“ಯಾರೇ ಆಗಲಿ ಬಸವಣ್ಣನವರ ಕುರಿತು ಅವಹೇಳನಕಾರಿ ಅಥವಾ ಪ್ರಚೋದನಾತ್ಮಕ ಹೇಳಿಕೆಗಳನ್ನು ನೀಡಿದ್ದರೆ, ಆ ಹೇಳಿಕೆಗಳನ್ನು ಕಾನೂನು ಮತ್ತು ಸಂವಿಧಾನಬದ್ಧ ಮಿತಿಗಳೊಳಗೆ ಪರಿಶೀಲಿಸಿ, ಕಾನೂನು ಉಲ್ಲಂಘನೆಯ ಅಂಶಗಳು ಕಂಡುಬಂದಲ್ಲಿ ಸಂಬಂಧಪಟ್ಟವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು. ಬಸವ ತತ್ವಕ್ಕೆ ಹಾಗೂ ಸಾಮಾಜಿಕ ಸೌಹಾರ್ದತೆಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮತ್ತು ಪೊಲೀಸ್ ಇಲಾಖೆ ತ್ವರಿತವಾಗಿ ಕ್ರಮ ಕೈಗೊಳ್ಳಬೇಕು” ಎಂದು ಸಂಗಮೇಶ ಎನ್. ಜವಾದಿ ಒತ್ತಾಯಿಸಿದರು.

ಬಸವಣ್ಣನವರ ವಿಚಾರಧಾರೆ, ವಚನ ಸಾಹಿತ್ಯ ಹಾಗೂ ಸಮಾನತೆಯ ಸಂದೇಶವನ್ನು ಅವಹೇಳನ ಮಾಡುವ ಘಟನೆಗಳು ಮರುಕಳಿಸದಂತೆ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಬೇಕು. ತಪ್ಪಿತಸ್ಥರು ಯಾರೇ ಆಗಿದ್ದರೂ ಕಾನೂನಿನ ಪ್ರಕಾರ ನಿಷ್ಪಕ್ಷಪಾತ ಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!