ನಿಯಮ ಪಾಲನೆ, ಜನರ ಇಚ್ಛಾಶಕ್ತಿಯಿಂದ ವಿಬಿಜಿ ರಾಮ್ ಜಿ ಯೋಜನೆಯ ಸದುಪಯೋಗ: ಉಮೇಶ ಮುಂಡಳ್ಳಿ

ಹೊನ್ನಾವರ: ಗ್ರಾಮೀಣ ಭಾಗದ ದುಡಿಯುವ ಜನರಿಗೆ ವಿಬಿಜಿ ರಾಮ್ ಜಿ ಯೋಜನೆ ವರದಾನವಿದ್ದಂತೆ. ಯೋಜನೆಯ ಸದುಪಯೋಗ ಪಡೆದುಕೊಳ್ಳಲು ಜನರು ಮುಂದೆ ಬರಬೇಕು. ಈ ನಿಟ್ಟಿನಲ್ಲಿ ಇಚ್ಛಾಶಕ್ತಿ ಬಹುಮುಖ್ಯವಾಗಿದ್ದು, ನಿಯಮಾವಳಿಗಳನ್ನು ಸಮರ್ಪಕವಾಗಿ ಪಾಲಿಸಿದಲ್ಲಿ ಹೆಚ್ಚಿನ ಸೌಲಭ್ಯಗಳನ್ನು ಪಡೆಯಲು ಸಾಧ್ಯ ಎಂದು ಭಟ್ಕಳ ತಾಲೂಕು ಸಾಮಾಜಿಕ ಪರಿಶೋಧನಾ ಕಾರ್ಯಕ್ರಮ ವ್ಯವಸ್ಥಾಪಕ ಉಮೇಶ ಮುಂಡಳ್ಳಿ ಹೇಳಿದರು.
ಅವರು ಹೊನ್ನಾವರ ತಾಲೂಕಿನ ಕಾಸರಕೋಡು ಗ್ರಾಮ ಪಂಚಾಯತ್‌ನಲ್ಲಿ ಗುರುವಾರ ಬೆಳಿಗ್ಗೆ ನಡೆದ 2026-27ನೇ ಸಾಲಿನ ಸಾಮಾಜಿಕ ಪರಿಶೋಧನಾ ಗ್ರಾಮಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.


ಕಾಮಗಾರಿ ಆರಂಭಿಸುವ ಮುನ್ನವೇ ಅಗತ್ಯ ದಾಖಲಾತಿಗಳನ್ನು ಸಂಗ್ರಹಿಸಿಟ್ಟುಕೊಳ್ಳಬೇಕು. ಫಲಾನುಭವಿಗಳಿಗೆ ಯೋಜನೆಯ ಕುರಿತು ಸಮರ್ಪಕ ಮಾಹಿತಿ ನೀಡಬೇಕು. ಈ ಕ್ರಮಗಳನ್ನು ಅನುಸರಿಸಿದಲ್ಲಿ ಕಾಮಗಾರಿಗಳ ಅನುಷ್ಠಾನದಲ್ಲಿ ಕಂಡುಬರುವ ನ್ಯೂನತೆಗಳನ್ನು ಕಡಿಮೆಗೊಳಿಸುವುದರೊಂದಿಗೆ ಫಲಾನುಭವಿಗಳಿಗೆ ಹೆಚ್ಚಿನ ಸೌಲಭ್ಯಗಳನ್ನು ಒದಗಿಸಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು. ಇದೇ ಸಂದರ್ಭದಲ್ಲಿ ಸಾಮಾಜಿಕ ಪರಿಶೋಧನಾ ವರದಿಯನ್ನು ಮಂಡಿಸಿದರು.


ಸಭೆಯ ಅಧ್ಯಕ್ಷತೆ ವಹಿಸಿದ್ದ ಕ್ಷೇತ್ರ ಸಮನ್ವಯಾಧಿಕಾರಿ ಜಯಶ್ರೀ ನಾಯ್ಕ ಮಾತನಾಡಿ, ಪ್ರತಿ ಸಾಮಾಜಿಕ ಪರಿಶೋಧನಾ ಗ್ರಾಮಸಭೆಗೆ ಕಾಮಗಾರಿಗಳನ್ನು ಅನುಷ್ಠಾನಗೊಳಿಸಿದ ಎಲ್ಲ ಇಲಾಖೆಗಳ ಅಧಿಕಾರಿಗಳು ಕಡ್ಡಾಯವಾಗಿ ಹಾಜರಾಗಬೇಕು. ಇದರಿಂದ ಸಾಮಾಜಿಕ ಪರಿಶೋಧನೆಯಲ್ಲಿ ಕಂಡುಬಂದ ಅಂಶಗಳ ಕುರಿತು ತುರ್ತಾಗಿ ಕ್ರಮ ಕೈಗೊಳ್ಳಲು ಸಹಾಯಕವಾಗುತ್ತದೆ. ಅಲ್ಲದೆ, ಕಾಮಗಾರಿ ಅನುಷ್ಠಾನದ ಹಂತದಲ್ಲಿ ಶಿಕ್ಷಣ ಇಲಾಖೆಗೆ ಹೆಚ್ಚಿನ ಅವಕಾಶ ನೀಡಬೇಕು ಎಂದು ಅಭಿಪ್ರಾಯಪಟ್ಟರು.


ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಉದಯ ಬಾಂದೇಕರ್ ಎಲ್ಲರನ್ನು ಸ್ವಾಗತಿಸಿ, ಕಾಮಗಾರಿಗಳ ಪಟ್ಟಿಯನ್ನು ಹಾಗೂ ಹಿಂದಿನ ಸಭೆಯ ನಡಾವಳಿಯನ್ನು ಓದಿ ಹೇಳಿದರು. ಪಂಚಾಯತ್ ವ್ಯಾಪ್ತಿಯಲ್ಲಿ ಕೈಗೊಂಡ ಪ್ರತಿ ಕಾಮಗಾರಿಯ ವಿವರಗಳನ್ನು ಗೋಡೆ ಬರಹದ ಮೂಲಕ ದಾಖಲಿಸಿರುವ ಬಗ್ಗೆಯೂ ಮಾಹಿತಿ ನೀಡಿದರು.
ಸಭೆಯಲ್ಲಿ ಎಲ್ಲರೂ ಒಟ್ಟಾಗಿ ಸಂವಿಧಾನದ ಪೀಠಿಕೆಯನ್ನು ಓದುವ ಮೂಲಕ ಸಂವಿಧಾನದ ಆಶಯಗಳನ್ನು ಸ್ಮರಿಸಿದರು.
ಈ ಸಂದರ್ಭದಲ್ಲಿ ಸಾಮಾಜಿಕ ಪರಿಶೋಧನಾ ಘಟಕದ ಸಿಬ್ಬಂದಿಗಳಾದ ಯಮುನಾ ನಾಯ್ಕ, ಶಿಲ್ಪಾ ನಾಯ್ಕ, ಗ್ರಾಮ ಪಂಚಾಯತ್ ಸಿಬ್ಬಂದಿಗಳಾದ ಸೀಮಾ ನಾಯ್ಕ, ಸವಿತಾ, ವಿಘ್ನೇಶ ಗೌಡ, ಮೋನಿಕಾ, ಸಾಂಜೂಜೆ ಪರಾಸ್ಕ ಲೋಫೀಸ್ ಹಾಗೂ ಬಿಎಫ್‌ಟಿ ಶ್ರೀಧರ ಪಟಗಾರ ಉಪಸ್ಥಿತರಿದ್ದರು.

SHARE
Loading spinner

Leave a Reply

Your email address will not be published. Required fields are marked *

error: Content is protected !!