ನಂತೂರು:ದ್ವಿಚಕ್ರ ವಾಹನಕ್ಕೆ ಖಾಸಗಿ ಬಸ್ ಡಿಕ್ಕಿಯಾಗಿ ಯುವತಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿ, ಸಾವಿಗೆ ನ್ಯಾಯ ಒದಗಿಸುವಂತೆ ಆಗ್ರಹಿಸಿ ಸ್ಥಳೀಯರು ಇಂದು ತೀವ್ರ ಪ್ರತಿಭಟನೆ ನಡೆಸಿದ್ದಾರೆ. ಮೃತ ಯುವತಿಯ ಶವವನ್ನು ಸ್ಥಳಕ್ಕೆ ತಂದು ರಸ್ತೆ ತಡೆ ನಡೆಸಿದ ಪ್ರತಿಭಟನಾಕಾರರು, ಬಸ್ ಚಾಲಕನ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.
ನಗರದ ನಂತೂರು ವೃತ್ತದ ಬಳಿ ಬುಧವಾರ ಸಂಭವಿಸಿದ ಭೀಕರ ಅಪಘಾತದಲ್ಲಿ, ಸ್ಕೂಟರ್ ಹಿಂಬದಿ ಸವಾರೆಯಾಗಿದ್ದ ಯುವತಿ ಬಸ್ ಅಡಿ ಸಿಲುಕಿ ಸ್ಥಳದಲ್ಲೇ ಮೃತಪಟ್ಟಿದ್ದರು. ಬಳ್ಳಾಲ್ ಬಾಗ್ ನಿವಾಸಿ ದೀಪ್ತಿ (26) ಮೃತಪಟ್ಟ ಯುವತಿ.
ದೀಪ್ತಿ ಅವರು ತಮ್ಮ ಭಾವೀ ಪತಿಯೊಂದಿಗೆ ಶಿವಭಾಗ್ ಕಡೆಯಿಂದ ಸ್ಕೂಟರ್‌ನಲ್ಲಿ ವಾಮಂಜೂರು ಕಡೆಗೆ ತೆರಳುತ್ತಿದ್ದ ವೇಳೆ, ಕದ್ರಿ ಶಿವಭಾಗ್ ಕಡೆಯಿಂದ ನಂತೂರು ಕಡೆಗೆ ಸಾಗುತ್ತಿದ್ದ ಖಾಸಗಿ ಬಸ್ ಸ್ಕೂಟರ್‌ಗೆ ಡಿಕ್ಕಿಯಾಗಿದೆ. ಡಿಕ್ಕಿಯ ಪರಿಣಾಮ ಹಿಂಬದಿ ಕುಳಿತಿದ್ದ ದೀಪ್ತಿ ನೆಲಕ್ಕೆ ಬಿದ್ದು, ಬಸ್ ಆಕೆಯ ಹೊಟ್ಟೆಯ ಮೇಲೆ ಹರಿದಿದೆ. ಗಂಭೀರ ಗಾಯಗೊಂಡ ಅವರನ್ನು ತಕ್ಷಣ ಎಜೆ ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೇ ಆಕೆ ಅಸುನೀಗಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಬಸ್ ಚಾಲಕನ ನಿರ್ಲಕ್ಷ್ಯವೇ ಸಾವಿಗೆ ಕಾರಣ ಎಂದು ಆರೋಪಿಸಿರುವ ಸ್ಥಳೀಯರು ಹಾಗೂ ಕುಟುಂಬದವರು, ಸೂಕ್ತ ಪರಿಹಾರ ಹಾಗೂ ನ್ಯಾಯ ಸಿಗುವವರೆಗೆ ಪ್ರತಿಭಟನೆ ಮುಂದುವರಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ಪ್ರತಿಭಟನೆಯಿಂದ ನಂತೂರು ವೃತ್ತದ ಬಳಿ ಕೆಲಕಾಲ ವಾಹನ ಸಂಚಾರ ಅಸ್ತವ್ಯಸ್ತಗೊಂಡಿದೆ.ಸ್ಥಳಕ್ಕೆ ಕದ್ರಿ ಸಂಚಾರಿ ಪೊಲೀಸರು ಭೇಟಿ ನೀಡಿ ಪ್ರತಿಭಟನಾಕಾರರೊಂದಿಗೆ ಮಾತುಕತೆ ನಡೆಸುತ್ತಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕದ್ರಿ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.