ಮಂಗಳೂರು ನಗರ ದಕ್ಷಿಣ ಬಿಜೆಪಿ ಶಾಸಕ ವೇದವ್ಯಾಸ ಕಾಮತ್ ಹಾಗೂ ಅವರ ಪತ್ನಿಯ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿಯಾಗಿ ಪೋಸ್ಟ್ ಹಾಕಿದ ಬಂಟ್ವಾಳ ತಾಲೂಕಿನ ಶರಣ್ ರೈ(29) ಎಂಬಾತನನ್ನು ಬಂದರು ಠಾಣೆ ಪೊಲೀಸರು ಬಂಧಿಸಿದ್ದಾರೆ.
ಅಧಿವೇಶನದಲ್ಲಿ ಅರಸೀಕೆರೆ ಕ್ಷೇತ್ರದ ಕಾಂಗ್ರೆಸ್ ಶಾಸಕ ಕೆ.ಎಂ. ಶಿವಲಿಂಗೇಗೌಡ ಹಾಗೂ ಬಿಜೆಪಿ ಸದಸ್ಯರ ನಡುವೆ ಮಾತಿನ ಚಕಮಕಿ ನಡೆದಿತ್ತು. ಅದನ್ನೇ ತಿರುಚಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ ಶರಣ್ ರೈ ಎಂಬಾತನು ಶಾಸಕರ ಪತ್ನಿಯನ್ನು ಅವಮಾನಿಸುವ ರೀತಿಯಲ್ಲಿ ಹಾಗೂ ಮಹಿಳೆಯರ ಗೌರವ ಘನತೆಗೆ ಧಕ್ಕೆ ತರುವಂತಹ ಪೋಸ್ಟ್ ಹಾಕಿದ ಬಗ್ಗೆ ಮಹಿಳೆಯೊಬ್ಬರು ಬಂದರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಅಮ್ಟಾಡಿ ನಿವಾಸಿಯಾಗಿರುವ ಆರೋಪಿಯು ರಿಯಲ್ ಎಸ್ಟೇಟ್ ಕೆಲಸ ಮಾಡಿಕೊಂಡಿದ್ದು ಕಾಂಗ್ರೆಸ್ ಪಕ್ಷದ ಚಟುವಟಿಕೆಗಳಲ್ಲಿ ಸಕ್ರಿಯನಾಗಿದ್ದಾನೆ ಎನ್ನಲಾಗಿದೆ.
ಮಹಿಳೆಯರ ಬಗ್ಗೆ ಸಮಾಜದಲ್ಲಿ ಅಗೌರವ ತರುವ ಇಂತಹ ದುರುದ್ದೇಶಪೂರಿತ ಪೋಸ್ಟ್ ಗಳ ವಿರುದ್ಧ ಈಗಾಗಲೇ ನಗರದ ಪೊಲೀಸರು ಕಾರ್ಯಾಚರಣೆ ಆರಂಭಿಸಿದ್ದು ಸಾಮಾಜಿಕ ಜಾಲತಾಣಗಳ ಮೇಲೆ ಹದ್ದಿನ ಕಣ್ಣಿಟ್ಟಿದ್ದಾರೆ