ವಿಶ್ವವಿದ್ಯಾನಿಲಯ ಕಾಲೇಜು ಕ್ಯಾಂಪಸ್‌ನಲ್ಲಿ ಎಬಿವಿಪಿ ಪ್ರತಿಭಟನೆ

ಮಂಗಳೂರು: ಕಾಲೇಜುಗಳಲ್ಲಿ ವಿದ್ಯಾರ್ಥಿ ಸಂಘಗಳ ಚುನಾವಣೆ ಮರುಆರಂಭಿಸುವ ಬಗ್ಗೆ ರಾಜ್ಯ ಬಜೆಟ್‌ನಲ್ಲಿ ಮಾಡಿರುವ ಘೋಷಣೆಯನ್ನು ವಿವಿಧ ವಿದ್ಯಾರ್ಥಿ ಸಂಘಟನೆಗಳು ಸ್ವಾಗತಿಸಿವೆ. ಇದೇ ವೇಳೆ ವಿದ್ಯಾರ್ಥಿಗಳಿಗಾಗಿ “ವಿದ್ಯಾರ್ಥಿ ಇಂದಿರಾ ಕ್ಯಾಂಟೀನ್” ಆರಂಭಿಸುವುದಾಗಿ ಸರ್ಕಾರ ಘೋಷಿಸಿರುವುದನ್ನು ಸ್ವಾಗತಿಸಿ ಎನ್‌.ಎಸ್‌.ಯು.ಐ. ವಿದ್ಯಾರ್ಥಿ ಸಂಘಟನೆ ಮಂಗಳೂರಿನಲ್ಲಿ ಸಂಭ್ರಮಾಚರಣೆ ನಡೆಸಿತ್ತು.

ಈ ಹಿನ್ನೆಲೆಯಲ್ಲಿ ಮಂಗಳೂರು ನಗರದ ಹಂಪನಕಟ್ಟೆಯ ವಿಶ್ವವಿದ್ಯಾನಿಲಯ ಕಾಲೇಜು ಕ್ಯಾಂಪಸ್‌ನಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ವತಿಯಿಂದ ಪ್ರತಿಭಟನೆ ನಡೆಯಿತು. ಕಾಲೇಜು ಆವರಣಕ್ಕೆ ನುಗ್ಗಿ ಶೈಕ್ಷಣಿಕ ಚಟುವಟಿಕೆಗಳಿಗೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿ ಎಬಿವಿಪಿ ಕಾರ್ಯಕರ್ತರು ಕಾಲೇಜು ಪ್ರವೇಶ ದ್ವಾರದ ಬಳಿ ಪ್ರತಿಭಟನೆ ನಡೆಸಿದರು.

ಪ್ರತಿಭಟನಾಕಾರರು ಎನ್‌.ಎಸ್‌.ಯು.ಐ. ಸಂಘಟನೆಯ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಜೊತೆಗೆ ಕಾಲೇಜು ಆವರಣಕ್ಕೆ ಪ್ರವೇಶಕ್ಕೆ ಅವಕಾಶ ನೀಡಿದ ಪ್ರಾಂಶುಪಾಲರ ವಿರುದ್ಧವೂ ಪ್ರತಿಭಟನಾಕಾರರು ಧಿಕ್ಕಾರ ಕೂಗಿದರು.

ಇತ್ತ ನಿನ್ನೆ ನಡೆದ ಸಂಭ್ರಮಾಚರಣೆಗೆ ಸಂಬಂಧಿಸಿದಂತೆ ಕಾಲೇಜಿನ ಅಧಿಕಾರಿಗಳು ಸ್ಪಷ್ಟೀಕರಣ ನೀಡಿದ್ದು, ಸಿಂಡಿಕೇಟ್ ಸದಸ್ಯರೊಬ್ಬರು ಬಂದು ವಿದ್ಯಾರ್ಥಿಗಳಿಗೆ ಸಿಹಿ ಹಂಚಲು ವಿನಂತಿಸಿದ್ದರಿಂದ ಸಾಂಕೇತಿಕವಾಗಿ ಒಂದು ತರಗತಿಯಲ್ಲಿ ಮಾತ್ರ ಸಿಹಿ ಹಂಚಲು ಅವಕಾಶ ನೀಡಲಾಗಿತ್ತು ಎಂದು ತಿಳಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೆಲವರು ಬೈಟ್‌ಗಳನ್ನು ಪಡೆದುಕೊಂಡಿದ್ದರೂ ಅದಕ್ಕೆ ಯಾವುದೇ ಅಧಿಕೃತ ಅನುಮತಿ ನೀಡಲಾಗಿರಲಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!