ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ವಿಶೇಷ ಕಾರ್ಯಕ್ರಮ

ಮಂಗಳೂರು: ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲ ಮಹಿಳಾ ಮೋರ್ಚಾ ವತಿಯಿಂದ ನಗರದ ಅಟಲ್ ಸೇವಾ ಕೇಂದ್ರದಲ್ಲಿ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಯಿತು.

ಕಾರ್ಯಕ್ರಮದಲ್ಲಿ ಮಾತನಾಡಿದ ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಶ್ರೀಮತಿ ಪೂರ್ಣಿಮಾ ಅವರು, ನಮ್ಮ ಜೀವನ ಶೈಲಿಯಲ್ಲಿ ಸಿರಿಧಾನ್ಯಗಳ ಮಹತ್ವವನ್ನು ವಿವರಿಸಿ, ಆರೋಗ್ಯಕರ ಆಹಾರ ಪದ್ಧತಿಯಲ್ಲಿ ಸಿರಿಧಾನ್ಯಗಳು ಪ್ರಮುಖ ಪಾತ್ರ ವಹಿಸುತ್ತವೆ ಎಂದು ತಿಳಿಸಿದರು. ಇವು ಪೌಷ್ಟಿಕಾಂಶಗಳಿಂದ ಸಮೃದ್ಧವಾಗಿದ್ದು, ಆರೋಗ್ಯವನ್ನು ಕಾಪಾಡಲು ಬಹಳ ಸಹಾಯಕವಾಗುತ್ತವೆ ಎಂದರು.

ಜಿಲ್ಲಾ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿಗಳಾದ ಶ್ರೀಮತಿ ಲಕಿತಾ ಶೆಟ್ಟಿ ಅವರು ಮಹಿಳಾ ದಿನಾಚರಣೆಯ ಮಹತ್ವದ ಬಗ್ಗೆ ಮಾತನಾಡಿ, ಸಮಾಜದಲ್ಲಿ ಮಹಿಳೆಯರು ಶಿಕ್ಷಣ, ಉದ್ಯೋಗ ಹಾಗೂ ನಾಯಕತ್ವ ಕ್ಷೇತ್ರಗಳಲ್ಲಿ ಸಾಧಿಸುತ್ತಿರುವ ಸಾಧನೆಗಳನ್ನು ಸ್ಮರಿಸಿದರು. ಮಹಿಳೆಯರು ಆತ್ಮವಿಶ್ವಾಸದಿಂದ ಮುಂದೆ ಬರಬೇಕು ಎಂದು ಅವರು ಕರೆ ನೀಡಿದರು.

ಇದೇ ವೇಳೆ ಶ್ರೀಮತಿ ಸಂಧ್ಯಾ ವೆಂಕಟೇಶ್ ಅವರು ಮಹಿಳೆಯರ ಸ್ವರಕ್ಷಣೆ ಹಾಗೂ ಕಾನೂನು ಜಾಗೃತಿಯ ಬಗ್ಗೆ ಮಾಹಿತಿ ನೀಡಿ, ಮಹಿಳೆಯರು ತಮ್ಮ ಹಕ್ಕುಗಳ ಬಗ್ಗೆ ಅರಿವು ಹೊಂದಿ ಸ್ವರಕ್ಷಣೆ ಬಗ್ಗೆ ತಿಳಿದುಕೊಳ್ಳುವುದು ಅಗತ್ಯ ಎಂದು ಹೇಳಿದರು.

ಕಾರ್ಯಕ್ರಮದ ಮತ್ತೊಂದು ವಿಶೇಷವಾಗಿ, ಉತ್ತರ ಪ್ರದೇಶದ ವಾರಾಣಸಿಯಲ್ಲಿ ನಡೆದ 33ನೇ ಸಬ್ ಜೂನಿಯರ್ ರಾಷ್ಟ್ರೀಯ ತ್ರೋಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿ ಪ್ರಶಸ್ತಿ ಗೆದ್ದ ಮಂಗಳೂರಿನ ಕೆನರಾ ಸಿಬಿಎಸ್‌ಇ ಶಾಲೆಯ ವಿದ್ಯಾರ್ಥಿಗಳಾದ ನಿಷ್ಕಾ ರೈ, ವೈಷ್ಣವಿ ಆರ್. ಗುಜರನ್, ರಾಶಿ ಶೆಟ್ಟಿ ಹಾಗೂ ಹಿರಾಲಿ ಅವರನ್ನು ಸನ್ಮಾನಿಸಲಾಯಿತು.

ಮಂಡಲ ಮಹಿಳಾ ಮೋರ್ಚಾ ಅಧ್ಯಕ್ಷೆ ಶ್ರೀಮತಿ ಪೂರ್ಣಿಮಾ ರಾವ್ ಕಾರ್ಯಕ್ರಮಕ್ಕೆ ಸ್ವಾಗತ ಕೋರಿದರು. ಪ್ರಧಾನ ಕಾರ್ಯದರ್ಶಿ ಶ್ರೀಮತಿ ಶಬರಿ ಶೆಟ್ಟಿ ಕಾರ್ಯಕ್ರಮವನ್ನು ನಿರೂಪಿಸಿದರು. ಶ್ರೀಮತಿ ಕಮಲಾಕ್ಷಿ ಧನ್ಯವಾದ ಸಮರ್ಪಿಸಿದರು.

ಕಾರ್ಯಕ್ರಮದಲ್ಲಿ ಮಹಿಳಾ ಮೋರ್ಚಾದ ಪದಾಧಿಕಾರಿಗಳಾದ ಲೀಲಾವತಿ ಪ್ರಕಾಶ್, ಯಶೋಧ ಗಟ್ಟಿ, ಗೀತಾ, ವಿದ್ಯಾ ಕುಡ್ವ, ಮಾಲತಿ ಅರುಣ್, ಸವಿತಾ ರೈ, ರೇಷ್ಮಾ ಶೆಟ್, ಭಾಗ್ಯ ಶೆಟ್, ಸೌಮ್ಯ ಆಚಾರ್ಯ, ಅಮಿತಾ ಹಾಗೂ ಜಿಲ್ಲಾ ಮಹಿಳಾ ಮೋರ್ಚಾದ ಸದಸ್ಯೆ ಶ್ರೀಮತಿ ಭವಾನಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

SHARE
Loading spinner

Leave a Reply

Your email address will not be published. Required fields are marked *

error: Content is protected !!