ಬೈಂದೂರು, ಏಪ್ರಿಲ್ 3: ರಾಜ್ಯ ಸರ್ಕಾರದ ಮಲತಾಯಿ ಧೋರಣೆಯನ್ನು ಖಂಡಿಸಿ Bharatiya Janata Party (ಬಿಜೆಪಿ) ಕಾರ್ಯಕರ್ತರು ಗುರುವಾರ ಗ್ರಾಮ ಪಂಚಾಯತಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಸಿದ್ದರಾಮಯ್ಯ ಅವರು ಮಂಡಿಸಿರುವ ರಾಜ್ಯ ಬಜೆಟ್‌ನಲ್ಲಿ ಕರಾವಳಿ ಜಿಲ್ಲೆಗಳನ್ನು ನಿರ್ಲಕ್ಷ್ಯ ಮಾಡಲಾಗಿದೆ ಎಂದು ಆರೋಪಿಸಿದ ಪ್ರತಿಭಟನಾಕಾರರು, ಸರ್ಕಾರವು ಜನವಿರೋಧಿ ಧೋರಣೆ ಅನುಸರಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಬಿಜೆಪಿ ಬೈಂದೂರು ಮಂಡಲದ ವತಿಯಿಂದ ನಡೆದ ಪ್ರತಿಭಟನೆಯನ್ನು ಶಾಸಕ ಗುರುರಾಜ್ ಶೆಟ್ಟಿ ಗಂಟಿಹೊಳೆ ನೇತೃತ್ವ ವಹಿಸಿದ್ದರು. ಈ ವೇಳೆ ಪಿಡಿಒ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
ಮಂಡಲ ಅಧ್ಯಕ್ಷೆ ಅನಿತಾ ಆರ್.ಕೆ ಅವರ ಮುಂದಾಳತ್ವದಲ್ಲಿ ಗ್ರಾಮ ಪಂಚಾಯತಿ ಕಚೇರಿಗಳ ಮುಂದೆ ಬೆಳಗ್ಗಿನಿಂದಲೇ ಬಿಜೆಪಿ ಕಾರ್ಯಕರ್ತರು, ಪ್ರಮುಖರು ಹಾಗೂ ಬಿಜೆಪಿ ಬೆಂಬಲಿತ ಸದಸ್ಯರು ಜಮಾಯಿಸಿ ಪ್ರತಿಭಟನೆ ನಡೆಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಗುರುರಾಜ್ ಶೆಟ್ಟಿ ಗಂಟಿಹೊಳೆ ಅವರು, ರಾಜ್ಯ ಸರ್ಕಾರ ಅಭಿವೃದ್ಧಿಯನ್ನು ಸಂಪೂರ್ಣ ಮರೆತಿದ್ದು, ಬಜೆಟ್‌ನಲ್ಲಿ ಕರಾವಳಿ ಜಿಲ್ಲೆಗಳನ್ನು ಕಡೆಗಣಿಸಲಾಗಿದೆ ಎಂದು ಟೀಕಿಸಿದರು.
ಗ್ರಾಮೀಣ ಭಾಗದ ಜನಸಾಮಾನ್ಯರಿಗೆ ರಸ್ತೆ ಅಭಿವೃದ್ಧಿ, 9/11 ಖಾತೆ ಸಮಸ್ಯೆ, ವಸತಿ ಯೋಜನೆ ಮನೆ ಸೌಲಭ್ಯ, ರೇಷನ್ ಕಾರ್ಡ್, ನೀರಾವರಿ, ಕೃಷಿ ಹಾಗೂ ತೋಟಗಾರಿಕೆ ಸೇರಿದಂತೆ ವಿವಿಧ ಇಲಾಖೆಗಳ ಸೌಲಭ್ಯಗಳು ಸಮರ್ಪಕವಾಗಿ ಸಿಗುತ್ತಿಲ್ಲ ಎಂಬ ಪ್ರಮುಖ ಬೇಡಿಕೆಗಳನ್ನು ಮುಂದಿಟ್ಟು ಪ್ರತಿಭಟನೆ ನಡೆಸಲಾಗಿದೆ ಎಂದು ಹೇಳಿದರು.