ಮಂಗಳೂರು: ಕಾರ್ಮಿಕ ವಿರೋಧಿ ಲೇಬರ್ ಕೋಡ್‌ಗಳ ವಿರುದ್ಧ ದೇಶಾದ್ಯಂತ ಜಂಟಿ ಹೋರಾಟ ನಡೆಯುತ್ತಿರುವ ಸಂದರ್ಭದಲ್ಲಿ, ಕೇರಳದಲ್ಲಿ ಎಲ್‌ಡಿಎಫ್ ಸರ್ಕಾರದ ಗೆಲುವು ಈ ಹೋರಾಟಕ್ಕೆ ಬಲ ನೀಡಲಿದೆ ಎಂದು ಸಿಐಟಿಯು ರಾಷ್ಟ್ರೀಯ ಕಾರ್ಯದರ್ಶಿ ಕೆ.ಎನ್. ಉಮೇಶ್ ಅಭಿಪ್ರಾಯಪಟ್ಟರು.
ಮಂಗಳೂರಿನ ಸಂದೇಶ ಸಂಸ್ಥೆಯ ಸಭಾಂಗಣದಲ್ಲಿ ನಡೆಯುತ್ತಿರುವ ಎರಡು ದಿನಗಳ ಸಿಐಟಿಯು ರಾಜ್ಯ ಮಟ್ಟದ ಸಂಘಟನಾ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಮೋದಿಯವರ ನೇತೃತ್ವದ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಲೇಬರ್ ಕೋಡ್‌ಗಳನ್ನು ರಾಜ್ಯಗಳಲ್ಲಿ ಬಿಜೆಪಿ ಸರ್ಕಾರಗಳು ಜಾರಿಗೆ ತರಲು ಮುಂದಾಗಿವೆ. ಕರ್ನಾಟಕದಲ್ಲಿಯೂ ಕಾಂಗ್ರೆಸ್ ಸರ್ಕಾರ ಅದನ್ನು ಜಾರಿಗೆ ತರುವ ಪ್ರಯತ್ನದಲ್ಲಿದೆ ಎಂದು ಅವರು ಹೇಳಿದರು. ಆದರೆ ಕೇರಳದ ಎಲ್‌ಡಿಎಫ್ ಸರ್ಕಾರ ಈ ಕೋಡ್‌ಗಳನ್ನು ಜಾರಿಗೊಳಿಸದೇ ಪರ್ಯಾಯ ಕ್ರಮಗಳನ್ನು ಕೈಗೊಳ್ಳಲು ನ್ಯಾಯಮೂರ್ತಿ ವಿ. ಗೋಪಾಲಗೌಡ ನೇತೃತ್ವದಲ್ಲಿ ತಜ್ಞರ ಸಮಿತಿಯನ್ನು ರಚಿಸಿದೆ ಎಂದು ವಿವರಿಸಿದರು.
ಕಾರ್ಮಿಕ ವಿರೋಧಿ ನೀತಿಗಳ ವಿರುದ್ಧ ಹೋರಾಟ ಅಗತ್ಯವಿದ್ದು, ಬೆಲೆ ಏರಿಕೆ ಮತ್ತು ಜಾಗತಿಕ ಯುದ್ಧಗಳ ಪರಿಣಾಮ ಜನರ ಮೇಲೆ ಬಿದ್ದಿದೆ. ಇಂತಹ ಪರಿಸ್ಥಿತಿಯಲ್ಲಿ ವಿಶಾಲ ತಳಹದಿಯ ಹೋರಾಟಗಳನ್ನು ರೂಪಿಸಬೇಕಿದೆ ಎಂದು ಉಮೇಶ್ ಹೇಳಿದರು.
ಮುಖ್ಯ ಅತಿಥಿಯಾಗಿ ಮಾತನಾಡಿದ ಸಿಐಟಿಯು ಕರ್ನಾಟಕ ರಾಜ್ಯಾಧ್ಯಕ್ಷ ಮೀನಾಕ್ಷಿ ಸುಂದರಂ, ಸರ್ಕಾರಗಳು ಜನರ ಹಿತ ಕಾಪಾಡಬೇಕು ಹೊರತು ಕಾರ್ಪೊರೇಟ್ ಹಿತಾಸಕ್ತಿಗಳಲ್ಲ ಎಂದು ಹೇಳಿದರು. ಕನಿಷ್ಠ ಕೂಲಿ ಪರಿಷ್ಕರಣೆಯಲ್ಲಿ ವಿಳಂಬವಾಗುತ್ತಿರುವುದನ್ನೂ ಅವರು ಟೀಕಿಸಿದರು.
ಕಾರ್ಯಕ್ರಮದಲ್ಲಿ ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ಸೇರಿದಂತೆ ಹಲವು ನಾಯಕರು ಭಾಗವಹಿಸಿದರು. ಸಭೆಗೆ ಜೆ. ಬಾಲಕೃಷ್ಣ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.